ಕಾಂಗ್ರೆಸ್ ದೇಶದಲ್ಲಿ ವಿರೋಧ ಪಕ್ಷವಾಗಿ ಇರಲು ಲಾಯಕ್ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಬಿಜೆಪಿಯವರನ್ನು ಜೈಲಿಗೆ ಕಳಿಸುತ್ತೇನೆ ಎಂದಿದ್ದ ಹರಿಪ್ರಸಾದ್ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ, ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಇಂದಿರಾಗಾಂಧಿ ನಮ್ಮ ಪಕ್ಷವನ್ನು ಮುಗಿಸಲು ಹೊರಟಿದ್ದರು. ಅಂದು ಯಾರೆಲ್ಲಾ ದ್ವೇಷ ಕಾರಿದ್ದಾರೋ, ಅವರ್ಯಾರೂ ಇಂದು ಉಳಿದಿಲ್ಲ. ಇಂದಿರಾಗಾಂಧಿ ಅವರೇ ನಮ್ಮನ್ನು ಜೈಲಿಗೆ ದೂಡಲು ಯತ್ನಿಸಿದ್ದರು. ಈ ಕೆಲಸ ಯಾರ ಕೈಯಲ್ಲೂ ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದರು. ಇನ್ನೂ ಎರಡು ಪಕ್ಷಗಳನ್ನು ಚಪ್ಪಲಿಗೆ ಹೋಲಿಕೆ ವಿಚಾರವಾಗಿ, ನಾನು ಯಾವುದೇ ಪಕ್ಷಗಳ ಹೆಸರನ್ನು ಹೇಳಿಲ್ಲ. ನನಗೆ ದೇವೇಗೌಡರ ಮೇಲೆ ಅಪಾರ ಗೌರವವಿದೆ. ಈ ರಾಜ್ಯದಲ್ಲಿ ಮೂರು ಪಕ್ಷಗಳಿವೆ. ಎರಡು ಪಕ್ಷಗಳಲ್ಲಿ ಟಿಕೆಟ್‌ಗಾಗಿ ಪೈಪೋಟಿ ನಡೆಯುತ್ತಿದೆ. ಹಾಗಾಗಿ ಈ ವಿಚಾರ ಪ್ರಸ್ತಾಪ ಮಾಡಿದೆ. ಆ ವಿಚಾರವನ್ನು ಅಲ್ಲಿಗೇ ಬಿಟ್ಟಿದ್ದೇನೆ ಎಂದು ಸ್ಪಷ್ಟನೆ ನೀಡಿದರು.