ತುಮಕೂರು: ಹುಬ್ಬಳ್ಳಿ ಬಿವಿಬಿ ಕಾಲೇಜು ಕ್ಯಾಂಪೆಸ್‌ನಲ್ಲಿ ಹತ್ಯೆಯಾದ ವಿದ್ಯಾರ್ಥಿನಿ ನೇಹಾ ಹಿರೇಮಠ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಇಲ್ಲಿ ಸೋಮವಾರ ತಿಳಿಸಿದರು.
									
			
			 
 			
 
 			
					
			        							
								
																	ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೇಹಾ ಕೊಲೆ ವಿಚಾರವನ್ನು ಬಿಜೆಪಿಯವರು ರಾಜಕೀಯ ಲಾಭಕ್ಕಾಗಿ ಅಪಪ್ರಚಾರ ಮಾಡುತ್ತಿದ್ದಾರೆ.  ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ರಾಜಕೀಯಕ್ಕೆ ಬಳಸುತ್ತಿದ್ದಾರೆ. ಹಾಗಾಗಿ ಸತ್ಯಾಸತ್ಯತೆ ಹೊರ ತರುವ ಸಲುವಾಗಿ ಸಿಐಡಿ ತನಿಖೆಗೆ ವಹಿಸಲು ನಿರ್ಧರಿಸಲಾಗಿದೆ ಎಂದರು.
									
										
								
																	10ರಿಂದ 12 ದಿನಗಳಲ್ಲಿ ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಸಿಐಡಿ ಅಧಿಕಾರಿಗಳಿಗೆ ಸೂಚಿಸಲಾಗಿದೆ. ತನಿಖಾಧಿಕಾರಿಗಳ ತಂಡ ಸೋಮವಾರವೇ ಹುಬ್ಬಳ್ಳಿಗೆ ತೆರಳಿದ್ದು, ತನಿಖೆ ಕೈಗೆತ್ತಿಕೊಂಡಿದೆ. ನೇಹಾ ಕೊಲೆಯ ಹಿಂದೆ ಇನ್ನೂ ನಾಲ್ವರು ಇದ್ದಾರೆ ಎಂದು ಅವರ ಕುಟುಂಬದವರು ಹೇಳಿದ್ದಾರೆ.
									
											
							                     
							
							
			        							
								
																	ಆ ಬಗ್ಗೆಯೂ ತನಿಖೆ ನಡೆಸುವಂತೆ ನಿರ್ದೇಶನ ನೀಡಲಾಗಿದೆ. ತನಿಖೆ ನಂತರ ಸತ್ಯಾಂಶ ಹೊರ ಬರಲಿದ್ದು, ನೊಂದ ಕುಟುಂಬಕ್ಕೆ ನ್ಯಾಯ ಸಿಗಲಿದೆ ಎಂದು ಹೇಳಿದರು.