Select Your Language

Notifications

webdunia
webdunia
webdunia
webdunia

ಅಭಿವೃದ್ಧಿ, ಸ್ವಾವಲಂಬಿ ಭಾರತದ ಗುರಿ ಹೊಂದಿರುವ ಎನ್ಇಪಿ

ಅಭಿವೃದ್ಧಿ, ಸ್ವಾವಲಂಬಿ ಭಾರತದ ಗುರಿ ಹೊಂದಿರುವ ಎನ್ಇಪಿ
bangalore , ಗುರುವಾರ, 30 ಸೆಪ್ಟಂಬರ್ 2021 (19:44 IST)
ದೇಶದ ಎಲ್ಲ ಮಕ್ಕಳಿಗೂ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುವುದರ ಮೂಲಕ ಸ್ವಾವಲಂಬಿ ಮತ್ತು ಅಭಿವೃದ್ಧಿ ಹೊಂದಿರುವ ದೇಶವಾಗಿ ಪರಿವರ್ತಿಸುವ ಮೂಲ ಉದ್ದೇಶದೊಂದಿಗೆ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ರೂಪಿಸಿ ಜಾರಿಗೆ ತರಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ಹೇಳಿದರು. 
 
ಮಾನ್ಯತೆ ಪಡೆದ ಅನುದಾನರಹಿತ ಖಾಸಗಿ ಶಾಲೆಗಳ ಸಂಘ ಬುಧವಾರ (ಸೆ.29) ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಆಯೋಜಿಸಿದ್ದ ‘ಅತ್ಯುತ್ತಮ ಶಿಕ್ಷಕ’ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದರು. 
 
‘ಎನ್‌ಇಪಿ ಅನುಷ್ಠಾನದ ಕುರಿತು ಪ್ರತಿಪಕ್ಷದವರು ಟೀಕೆ ಮಾಡುತ್ತಿದ್ದಾರೆ. ಯಾವುದೇ ಚರ್ಚೆಯನ್ನು ನಡೆಸಿಲ್ಲ ಎಂದು ದೂರುತ್ತಿದ್ದಾರೆ. ಆದರೆ, ಶಿಕ್ಷಣ ತಜ್ಞರು, ಶಿಕ್ಷಕ ಸಮುದಾಯ, ಪಾಲಕರು, ಪೋಷಕರು, ಮಕ್ಕಳು, ತರಬೇತಿ ಸಂಸ್ಥೆಗಳು, ಸಂಶೋಧನಾ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳ ಪ್ರಮುಖರು, ಶಿಕ್ಷಣ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ತೊಡಗಿಸಿಕೊಂಡವರು ಸೇರಿದಂತೆ ಕ್ಷೇತ್ರದ ಸಾವಿರಾರು ಜನರ ಜೊತೆ ಚರ್ಚಿಸಿ ಇಸ್ರೋ ಮಾಜಿ ಅಧ್ಯಕ್ಷ, ವಿಜ್ಞಾನಿ ಕಸ್ತೂರಿ ರಂಗನ್ ಅವರ ಅಧ್ಯಕ್ಷತೆಯ ಸಮಿತಿ ಎನ್ಇಪಿ ಸಿದ್ದಪಡಿಸಿದೆ’ ಎಂದು ಸಚಿವ ನಾಗೇಶ್ ನುಡಿದರು. 
 
‘ಎನ್ಇಪಿ ಕುರಿತು ಸಾರ್ವಜನಿಕರಿಂದ ಸಲಹೆ ಸೂಚನೆ ನೀಡಲು ಕೋರಲಾಗಿತ್ತು. ದೇಶದ ಎಲ್ಲ ಭಾಗಗಳಿಂದ ದೊಡ್ಡ ಸಂಖ್ಯೆಯಲ್ಲಿ ಸಲಹೆಗಳು ಬಂದಿವೆ. ಅವುಗಳನ್ನು ಪರಿಶೀಲಿಸಲಾಗಿದೆ. ಆದರೆ, ಚರ್ಚೆಗೆ ಅವಕಾಶ ನೀಡದೆ ಏಕಾಏಕಿ ಎನ್ಇಪಿ ಅನುಷ್ಠಾನಗೊಳಿಸಲಾಗುತ್ತಿದೆ ಎಂಬ ಪ್ರತಿಪಕ್ಷದವರ ಮಾತುಗಳು ಸತ್ಯಕ್ಕೆ ದೂರವಾಗಿವೆ’ ಎಂದು ಸಚಿವ ನಾಗೇಶ್ ಹೇಳಿದರು. 
 
‘ಭವಿಷ್ಯದ ಪ್ರಜೆಗಳನ್ನು ರೂಪಿಸುವ ಶಿಕ್ಷಕರಿಗೆ ಸನ್ಮಾನ ಮಾಡುವುದು ಶ್ಲಾಘನೀಯ ಸಂಗತಿ. ಉತ್ತಮ ಶಿಕ್ಷಕರಿಗೆ ಸನ್ಮಾನ ಮಾಡುವುದರಿಂದ ಅವರ ಜವಾಬ್ದಾರಿ ಹೆಚ್ಚುತ್ತದೆ. ಇನ್ನಷ್ಟು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಾರೆ. ಅದೇ ರೀತಿ ಬೇರೆ ಶಿಕ್ಷಕರು ಕೂಡ ಇನ್ನಷ್ಟು ಉತ್ತಮವಾಗಿ ಕೆಲಸ ಮಾಡಿ ಪ್ರಶಸ್ತಿ ಪಡೆಯಲು ಪ್ರಯತ್ನಿಸುತ್ತಾರೆ. ಅಂತಿಮವಾಗಿ ಮಕ್ಕಳು, ಶಿಕ್ಷಣ ಕ್ಷೇತ್ರಕ್ಕೆ ಒಳಿತಾಗುತ್ತದೆ’ ಎಂದು ಸಚಿವರು ಹೇಳಿದರು. 
 
‘ರುಪ್ಸ ಸಂಘಟನೆಯ ಬೇಡಿಕೆಗಳ ಕುರಿತು ಪರಿಶೀಲನೆ ನಡೆಸಲಾಗುತ್ತದೆ. ಕೋವಿಡ್-19 ಕಾರಣ ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ. ಪರಿಸ್ಥಿತಿ ಸುಧಾರಿಸಬೇಕಿದೆ. ಮುಂದಿನ ದಿನಗಳಲ್ಲಿ ಬೇಡಿಕೆಗಳಿಗೆ ಸ್ಪಂದಿಸಲು ಪ್ರಯತ್ನಿಸಲಾಗುತ್ತದೆ’ ಎಂದು ಸಚಿವರು ತಿಳಿಸಿದರು.
ಇದೇ ವೇಳೆ 38 ಅತ್ಯುತ್ತಮ ಶಿಕ್ಷಕರಿಗೆ ಸನ್ಮಾನ ಮಾಡಲಾಯಿತು. 
 
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರ್ ಎಸ್. ಸಾಹುಕಾರ್, ರುಪ್ಸ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ, ರೂಪ್ಸ ಗೌರವಾಧ್ಯಕ್ಷ ಸಿ.ಎನ್ ಭಂಡಾರೆ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
nagesh

Share this Story:

Follow Webdunia kannada

ಮುಂದಿನ ಸುದ್ದಿ

ಭವಾನಿಪುರದಲ್ಲಿ ಬಿಗಿ ಭದ್ರತೆಯಲ್ಲಿ ಬಿರುಸಿನ ಮತದಾನ