Publish Date: Sat, 15 Jun 2024 (14:14 IST)
Updated Date: Sat, 15 Jun 2024 (14:17 IST)
ಬೆಂಗಳೂರು: ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸದಸ್ಯರಾದ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಸಿದ್ದಾರೆ.
ಮಾಜಿ ಮುಖ್ಯಮಂತ್ರಿಯೂ ಆಗಿರುವ ಬಸವರಾಜ ಬೊಮ್ಮಾಯಿ ಅವರು ವಿಧಾನಸೌಧದ ಮೊದಲನೆ ಮಹಡಿಯಲ್ಲಿರುವ ಸ್ಪೀಕರ್ ಕಚೇರಿಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ರಾಜೀನಾಮೆ ಸಲ್ಲಿಕೆ ಮಾಡಿದರು.
ಲೋಕಸಭಾ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಶಿಗ್ಗಾವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ಬೊಮ್ಮಾಯಿ ರಾಜೀನಾಮೆ ನೀಡಿದರು. ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ಸತತ ನಾಲ್ಕು ಬಾರಿ ಜಯಭೇರಿ ಬಾರಿಸಿದ್ದ ಬೊಮ್ಮಾಯಿ ಇದೇ ಮೊದಲ ಬಾರಿಗೆ ಲೋಕಸಭೆಗೆ ಸ್ಪರ್ಧಿಸಿ ವಿಜಯಿಯಾಗಿದ್ದಾರೆ.
ಎದುರಾಳಿಯಾಗಿ ಕಾಂಗ್ರೆಸ್ ಪಕ್ಷದಿಂದ ಕಣದಲ್ಲಿದ್ದ ಆನಂದಸ್ವಾಮಿ ಗಡ್ಡದೇವರಮಠ ವಿರುದ್ಧ ಅವರು ಗೆಲುವು ಸಾಧಿಸಿದ್ದಾರೆ. 7,05,538 ಮತಗಳನ್ನು ಪಡೆದಿದ್ದ ಬಸವರಾಜ ಬೊಮ್ಮಾಯಿ ಅವರು, 43,513 ವೋಟ್ ಅಂತರದಿಂದ ಆನಂದಸ್ವಾಮಿ ಗಡ್ಡದೇವರಮಠ ವಿರುದ್ಧ ಜಯಿಸಿದ್ದರು. ಗಡ್ಡದೇವರಮಠ ಅವರು 6,62,025 ಮತ ಪಡೆದಿದ್ದರು.