ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾದ ನಿವೇಶನ ಹಂಚಿಕೆ ಹಗರಣದ ತನಿಖೆಯನ್ನು ಸಿಬಿಐ ತನಿಖೆಗೆ ವರ್ಗಾಯಿಸಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಡಿಸೆಂಬರ್ 10ಕ್ಕೆ ಮಂಗಳವಾರ ಮುಂದೂಡಿದೆ.
ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು, ಲೋಕಾಯುಕ್ತ ತನಿಖೆಯ ವಿಶ್ವಾಸಾರ್ಹತೆ ಬಗ್ಗೆ ಅನುಮಾನಗೊಂಡು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಲೋಕಾಯುಕ್ತ ಪೊಲೀಸರಲ್ಲಿ ನಂಬಿಕೆ ಇಲ್ಲದ ಕಾರಣ, ಸಿಬಿಐ ತನಿಖೆಗೆ ವಹಿಸಬೇಕು ಎಂದು ಹೈಕೋರ್ಟ್ ಮೆಟ್ಟಿಲೇರಿದ್ದರು.
ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಮುಡಾದಿಂದ ಸ್ವಾಧೀನಪಡಿಸಿಕೊಂಡ ಭೂಮಿಗೆ ಪರ್ಯಾಯವಾಗಿ ಮೈಸೂರಿನ ಉನ್ನತ ಮಾರುಕಟ್ಟೆ ಪ್ರದೇಶದಲ್ಲಿ (ವಿಜಯನಗರ ಲೇಔಟ್) 14 ಪರಿಹಾರ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಮುಡಾ ಪಾರ್ವತಿ ಅವರಿಗೆ 50:50 ಅನುಪಾತದ ಯೋಜನೆಯಡಿ ಅವರ 3.16 ಎಕರೆ ಜಮೀನಿಗೆ ಬದಲಾಗಿ ನಿವೇಶನಗಳನ್ನು ಮಂಜೂರು ಮಾಡಿತ್ತು. ಅಲ್ಲಿ ಅದು ವಸತಿ ಬಡಾವಣೆಯನ್ನು ಅಭಿವೃದ್ಧಿಪಡಿಸಿತ್ತು.
ವಿವಾದಾತ್ಮಕ ಯೋಜನೆಯಡಿಯಲ್ಲಿ, ವಸತಿ ಬಡಾವಣೆಗಳನ್ನು ರೂಪಿಸಲು ಅವರಿಂದ ಸ್ವಾಧೀನಪಡಿಸಿಕೊಂಡಿರುವ ಅಭಿವೃದ್ಧಿಯಾಗದ ಭೂಮಿಗೆ ಬದಲಾಗಿ ಭೂಮಿ ಕಳೆದುಕೊಳ್ಳುವವರಿಗೆ ಮುಡಾ ಅಭಿವೃದ್ಧಿ ಹೊಂದಿದ ಭೂಮಿಯಲ್ಲಿ 50 ಪ್ರತಿಶತವನ್ನು ಮಂಜೂರು ಮಾಡಿದೆ. ಮೈಸೂರು ತಾಲೂಕಿನ ಕಸಬಾ ಹೋಬಳಿಯ ಕೆಸರೆ ಗ್ರಾಮದ ಸರ್ವೆ ನಂಬರ್ 464ರಲ್ಲಿನ ಈ 3.16 ಎಕರೆ ಜಮೀನಿನಲ್ಲಿ ಪಾರ್ವತಿ ಅವರಿಗೆ ಯಾವುದೇ ಕಾನೂನು ಬದ್ಧ ಹಕ್ಕು ಇಲ್ಲ ಎಂದು ಆರೋಪಿಸಲಾಗಿದೆ.
ಕರ್ನಾಟಕ ಲೋಕಾಯುಕ್ತ ಪೊಲೀಸರು ಮತ್ತು ಜಾರಿ ನಿರ್ದೇಶನಾಲಯ ಹಗರಣದ ತನಿಖೆ ಆರಂಭಿಸಿದೆ.