ಬೆಂಗಳೂರು: ಮಹಾರಾಷ್ಟ್ರ ಸಿಎಂ ಅಜಿತ್ ಪವಾರ್ ಸಾವಿನ ಸುದ್ದಿ ಕೇಳಿ ಆಘಾತಕ್ಕೊಳಗಾದೆ. ರಾಜಕಾರಣದಲ್ಲಿರುವ ನಾವುಗಳು ತುಂಬಾನೇ ಎಚ್ಚರಿಕೆಯಿಂದ ಇರಬೇಕೆಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಅಜಿತ್ ಪವಾರ್ ಅವರು ಅತ್ಯಂತ ಪ್ರಗತಿಪರ ಆಲೋಚನೆ ಹೊಂದಿದ್ದಂತಹ ನಾಯಕರಾಗಿದ್ದರು. ಎಲ್ಲಾ ಕೆಲಸಗಳಿಗೂ ಸಹಕಾರ ಕೊಡುತ್ತಿದ್ದಾರೆ ಎಂದು ಮೊನ್ನೆಯಷ್ಟೇ ಮಹಾರಾಷ್ಟ್ರ ಮುಖ್ಯಮಂತ್ರಿಯವರು ಹೇಳಿದ್ದರು. ಅವರ ಆತ್ಮಕ್ಕೆ ಶಾಂತಿ ದೊರಕಲಿ. ಅವರ ಕುಟುಂಬ ವರ್ಗ ಹಾಗೂ ಬೆಂಬಲಿಗರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ. ಅವರ ಕುಟುಂಬಸ್ಥರು ಬೆಂಗಳೂರಿನಲ್ಲೂ ನೆಂಟಸ್ಥಿಕೆ ಬೆಳೆಸಿದ್ದಾರೆ. ಮಂಗಳವಾರ ಅವರ ಸಂಬಂಧಿಕರನ್ನು ಭೇಟಿಮಾಡಿದ್ದೇ ಎಂದು ಪ್ರತಿಕ್ರಿಯಿಸಿದರು.
ಅಜಿತ್ ಅವರು ನಮ್ಮ ಹಿರಿಯ ನಾಯಕರಾಗಿದ್ದರು. ತಮ್ಮ ರಾಜಕೀಯ ಭವಿಷ್ಯಕ್ಕಾಗಿ ಪಕ್ಷ ಬಿಟ್ಟು ಮರಳಿ ಬಂದರು. ಇದರ ಬಗ್ಗೆ ನಾನು ಮಾತನಾಡುವುದಿಲ್ಲ. ಪ್ರಸ್ತುತ ಮಹಾರಾಷ್ಟ್ರ ಡಿಸಿಎಂ ಆಗಿ ಕಾರ್ಯನಿರ್ವಹಿಸುತ್ತಿದ್ದರು ಎಂದರು.
ಇತ್ತೀಚೆಗೆ ಹೆಚ್ಚು ವಿಮಾನ ಅಪಘಾತಗಳು ಆಗುತ್ತಿರುವ ಬಗ್ಗೆ ಹಾಗೂ ತಾಂತ್ರಿಕ ದೋಷ ಎಂದು ಹೇಳುತ್ತಿದ್ದಾರೆ. ಈ ವಿಚಾರ ವಿಸ್ತೃತ ಮಾಹಿತ ಬಂದ್ಮೇಲೆ ಮಾತನಾಡುತ್ತೇನೆಂದರು.