ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಬೆನ್ನಲ್ಲೇ ಅವರ ಸಹೋದರ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಬಿಗ್‌ಶಾಕ್ ಎದುರಾಗಿದೆ.
ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಪ್ರಜ್ವಲ್ ರೇವಣ್ಣ ಅವರಿಗೆ ಹೈಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದೆ. ಶಿಕ್ಷೆ ಅಮಾನತುಗೊಳಿಸುವಂತೆ ಕೋರಿದ್ದ ಅವರ ಮನವಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಅತ್ಯಾಚಾರ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಜ್ವಲ್ ರೇವಣ್ಣ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.
ನ್ಯಾಯಮೂರ್ತಿಗಳಾದ ಕೆ.ಎಸ್. ಮುದಗಲ್ ಹಾಗೂ ಟಿ. ವೆಂಕಟೇಶ್ ನಾಯ್ಕ್ ಅವರಿದ್ದ ವಿಭಾಗೀಯ ಪೀಠವು ಬುಧವಾರ ಈ ಮಹತ್ವದ ಆದೇಶ ಪ್ರಕಟಿಸಿದ್ದು, ಪ್ರಜ್ವಲ್ ರೇವಣ್ಣ ಅವರಿಗೆ ಜೈಲು ವಾಸದಿಂದ ಸದ್ಯಕ್ಕೆ ಬಿಡುಗಡೆ ಭಾಗ್ಯ ದೊರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಗಂಭೀರ ಆರೋಪದ ಮೇಲೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಳೆದ ಆಗಸ್ಟ್ 2025ರಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ದೋಷಿ ಎಂದು ಘೋಷಿಸಿತ್ತು. ನ್ಯಾಯಾಲಯವು ಅವರಿಗೆ ಜೀವಿತಾವಧಿ ಕಠಿಣ ಜೈಲು ಶಿಕ್ಷೆ ಮತ್ತು ₹11 ಲಕ್ಷಕ್ಕೂ ಅಧಿಕ ದಂಡ ವಿಧಿಸಿ ಆದೇಶ ಹೊರಡಿಸಿತ್ತು.
ವಿಶೇಷ ನ್ಯಾಯಾಲಯದ ಈ ತೀರ್ಪನ್ನು ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಅವರು ಹೈಕೋರ್ಟ್‌ಗೆ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿಯ ವಿಚಾರಣೆ ಬಾಕಿ ಇರುವಾಗಲೇ, ತಮಗೆ ವಿಧಿಸಲಾದ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು, ಜಾಮೀನು ನೀಡುವಂತೆ ಪ್ರಜ್ವಲ್ ಪರ ಹಿರಿಯ ವಕೀಲರು ಹೈಕೋರ್ಟ್‌ಗೆ ಮನವಿ ಮಾಡಿದ್ದರು.