ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬೀದರ್ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡುವಂತೆ ವಿರೋಧ ಪಕ್ಷದವರು ಒತ್ತಾಯಿಸಿ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ, ಪ್ರತಿಭಟನೆ ನಡೆಸುತ್ತಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು ಇದು ರಾಜಕೀಯ ದ್ವೇಷದ ಆರೋಪವಷ್ಟೇ ಎಂದು ಹೇಳಿದರು.
ಗುತ್ತಿಗೆದಾರ ಸಚಿನ್ ಪಾಂಚಾಳ್ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆಯ ಪಾತ್ರವಿಲ್ಲ, ಡೆತ್ ನೋಟಲ್ಲಿ ಪ್ರಿಯಾಂಕ್ ಹೆಸರು ಉಲ್ಲೇಖವಿಲ್ಲ, ಅವರ ವಿರುದ್ಧ ಯಾವುದೇ ಸಾಕ್ಷ್ಯಾಧಾರವೂ ಲಭ್ಯವಾಗಿಲ್ಲ ಮತ್ತು ಅದಕ್ಕೂ ಮಿಗಿಲಾಗಿ ಅವರು ಯಾವುದೇ ತನಿಖೆಗೆ ತಯಾರು ಇರುವುದಾಗಿ ಹೇಳಿದ್ದಾರೆ, ಹಾಗಾಗಿ ರಾಜೀನಾಮೆ ಸಲ್ಲಿಸುವ ಪ್ರಮೇಯ ಉದ್ಭವಿಸುವುದಿಲ್ಲ ಎಂದರು.
ಪ್ರಕರಣದ ಸಂಬಂಧ ದಾಖಲಾಗಿರುವ ದೂರಿನ ಆಧಾರದಲ್ಲಿ ತನಿಖೆಯ ಸಿಐಡಿಗೆ ವಹಿಸಲಾಗಿದ್ದು, ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.