ಬೆಂಗಳೂರು: ರಾಮೇಶ್ವರಂ ಕೆಫೆ ಹೊಟೇಲ್ ನಲ್ಲಿ ನಿನ್ನೆ ನಡೆದ ಸ್ಫೋಟದ ಬಗ್ಗೆ ಶನಿವಾರ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂಥಾ ಘಟನೆಗಳನ್ನು ಸರ್ಕಾರ ಮತ್ತಷ್ಟು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಎಂದು ಆಗ್ರಹಿಸಿದರು. ಕಾಂಗ್ರಸ್ ಪಕ್ಷವು ಅಲ್ಪಸಂಖ್ಯಾತರ ಭಾವನೆಗಳಿಗೆ ಧಕ್ಕೆ ತರಬಾರದೆಂಬ ಉದ್ದೇಶದಿಂದ ಭಯೋತ್ಪಾದಕರ ರಕ್ಷಣೆಯಲ್ಲಿ ತೊಡಗಿಕೊಂಡಿರುವಂತೆ ಭಾಸವಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗಂಭೀರ ಆರೋಪ ಮಾಡಿದ್ದಾರೆ.
ರಾಮೇಶ್ವರಂ ಕೆಫೆಯ ಬಾಂಬ್ ಸ್ಫೋಟದ ವಿಷಯದಲ್ಲಿ ನಾವು ರಾಜಕಾರಣ ಮಾಡುವುದಿಲ್ಲ. ಜವಾಬ್ದಾರಿಯುತ ವಿರೋಧಪಕ್ಷವಾಗಿ ಬೆಂಬಲ ನೀಡುತ್ತೇವೆಂದು ಸ್ಪಷ್ಟಪಡಿಸಿದ್ದೇವೆ. ಆದರೆ ರಾಜ್ಯಸರ್ಕಾರವು ತನ್ನ ಹೊಣೆಗಾರಿಕೆಯನ್ನು ನಿರ್ವಹಿಸಲು ವಿಫಲವಾಗಿದೆ ಎಂದು ನುಡಿದ ಬಿ.ವೈ.ವಿಜಯೇಂದ್ರ, ತನ್ನ ಸೋಲನ್ನು ಮುಚ್ಚಿಹಾಕಿಕೊಳ್ಳಲು ಕಾಂಗ್ರೆಸ್ ಸಚಿವರು ಬಾಯಿಗೆ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ ಎಂದು ಟೀಕಿಸಿದರು.
ಕಾಂಗ್ರೆಸ್ ಸಚಿವರು ಏನೂ ನಡೆದೇ ಇಲ್ಲ ಎಂಬಂತೆ ವರ್ತಿಸಿದ್ದಾರೆ. ಬಾಯಿಗೆ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ. ಇವೆಲ್ಲವೂ ಸಹ ಕಾಂಗ್ರೆಸ್ ಪಕ್ಷದ ಬಗ್ಗೆ ಅನುಮಾನ ವ್ಯಕ್ತವಾಗಲು ಕಾರಣವಾಗಿದೆ ಎಂದು ವಿಜಯೇಂದ್ರ ನುಡಿದರು.