Webdunia - Bharat's app for daily news and videos

Install App

ಎಲ್ಲ ಅಭ್ಯರ್ಥಿಗಳಿಗೂ ಪಿಯು ಪ್ರವೇಶ ಲಭ್ಯ: ಸುರೇಶ್ ಕುಮಾರ್

Webdunia
ಶುಕ್ರವಾರ, 23 ಜುಲೈ 2021 (19:25 IST)
ಬೆಂಗಳೂರು: ಈ ಬಾರಿ 10ನೇ ತರಗತಿಯ ಎಲ್ಲ ವಿದ್ಯಾರ್ಥಿಗಳೂ ಉತ್ತೀರ್ಣರಾಗುತ್ತಿರುವುದರಿಂದ  ಪಿಯುಸಿ ಸೇರಬಯಸುವ ಎಲ್ಲರಿಗೂ ಪ್ರವೇಶಾವಕಾಶ ಕಲ್ಪಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು  ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.  
 
ಗುರುವಾರ ಕೊನೆದಿನದ  ಪರೀಕ್ಷೆಯ ನಂತರ ನಗರದ ಹಲವಾರು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಕೊನೆದಿನ  ದಿನದ ಪರೀಕ್ಷೆಗೆ ಸಂಬಂಧಿಸಿದ ವಿವರಗಳನ್ನು ಸುದ್ದಿಗೋಷ್ಠಿಯಲ್ಲಿ ವಿವರಿಸಿದ ಅವರು, ಯಾವುದೇ ವಿದ್ಯಾರ್ಥಿಗೂ ತೊಂದರೆಯಾಗದಂತೆ ಎಲ್ಲರಿಗೂ ಪ್ರಥಮ ಪಿಯುಸಿ ಪ್ರವೇಶಕ್ಕೆ ಅನುವು ಮಾಡಿಕೊಡಲಾಗುವುದು ಎಂದರು. 
 
ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪಿಯು ಕಾಲೇಜುಗಳಲ್ಲಿ ಒಟ್ಟಾರೆ 12 ಲಕ್ಷ ಸೀಟುಗಳು ಲಭ್ಯವಿವೆ.  ಜಿಲ್ಲಾವಾರು ಅಂಕಿಅಂಶಗಳನ್ನು ಸಂಗ್ರಹಿಸಿದ್ದು ಅದಕ್ಕಾಗಿ ಅಧಿಕಾರಿಗಳ ಸಮನ್ವಯ ವ್ಯವಸ್ಥೆ ರೂಪಿಸಲಾಗುತ್ತಿದೆ. ಯಾವುದೇ ವಿದ್ಯಾರ್ಥಿಗೂ ಪಿಯು ಪ್ರವೇಶಕ್ಕೆ ಯಾವುದೇ ರೀತಿಯಲ್ಲೂ ತೊಂದರೆಯಾಗುವುದಿಲ್ಲ. ಯಾವುದೇ ಸಂಸ್ಥೆಗಳು ಸೀಟು ಹೆಚ್ಚಳದ ಪ್ರಸ್ತಾವನೆಯನ್ನು ಸಲ್ಲಿಸಿದರೆ, ಅವರ ಬೇಡಿಕೆಯನ್ನು ಪುರಸ್ಕರಿಸಲಾಗುವುದು ಎಂದು ಅವರು ಹೇಳಿದರು.
 
ಆಗಸ್ಟ್ 10ರ ವೇಳೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು. ರಾಜ್ಯದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಪ್ರಶಾಂತ ವಾತಾವರಣದಲ್ಲಿ ನಡೆದವು. ಇಂದು ಬೆಂಗಳೂರಿನ ದೂರವಾಣಿನಗರದ ಐಟಿಐ ವಿದ್ಯಾಮಂದಿರ ಪ್ರೌಢಶಾಲೆ,  ವಿದ್ಯಾಮಂದಿರ ಸೆಂಟ್ರಲ್ ಶಾಲೆ, ಕೆ.ಆರ್.ಪುರಂ ಕರ್ನಾಟಕ ಪಬ್ಲಿಕ್ ಶಾಲೆ, ವೆಂಕಟೇಶ್ವರ ಪ್ರೌಢಶಾಲೆ, ದೇವಸಂದ್ರದ ಭಾರತೀಯ ವಿದ್ಯಾನಿಕೇತನ ಪ್ರೌಢಶಾಲೆ, ಅವಲಹಳ್ಳಿಯ ಗ್ರೇಟ್ ಇಂಟರ್ನ್ಯಾಷನಲ್ ಸ್ಕೂಲ್, ವಿದ್ಯಾನಿಕೇತನ ಆಂಗ್ಲಪ್ರೌಢಶಾಲೆ, ಕಾಡುಗೋಡಿಯ ಶಾರದಾ ವಿದ್ಯಾಮಂದಿರ ಪ್ರೌಢಶಾಲೆ, ವೈಟ್ಫೀಲ್ಡ್ ನ ಉಜ್ವಲ ವಿದ್ಯಾಲಯ ಪ್ರೌಢಶಾಲೆ ಸೇರಿದಂತೆ ಹಲವಾರು  ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಎಲ್ಲ ಕಡೆಯೂ ಸಾಮಾಜಿಕ ಅಂತರ ಕಾಯ್ದುಕೊಂಡು ಮಕ್ಕಳು ಅತ್ಯಂತ ಶಿಸ್ತಿನಿಂದ ಪರೀಕ್ಷೆಗೆ ಹಾಜರಾಗಿದ್ದರು. ನಮ್ಮ ವಿದ್ಯಾರ್ಥಿಗಳ ಶಿಸ್ತು ನನ್ನ ಮನಸೂರೆಗೊಂಡಿತು. ಮಕ್ಕಳ ಶಿಸ್ತು ಮತ್ತು ಧೈರ್ಯ ಪರೀಕ್ಷೆಯ ಯಶಸ್ಸಿನ ಪ್ರಮುಖ ಕಾರಣವಾಗಿದೆ   ಎಂದು ಅವರು ತಿಳಿಸಿದರು. 
 
ಇಂದೂ ಸಹ ಕೆಲವೆಡೆ ಶಾಸಕರು ಮತ್ತು ಸಚಿವರು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳು ಖುದ್ದಾಗಿ  ಭೇಟಿ ನೀಡಿದ್ದಾರೆ ಮಕ್ಕಳನ್ನು ಹುರಿದುಂಬಿಸಿದ್ದಾರೆ. ಹಲವಾರು ಕಡೆಗಳಲ್ಲಿ ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು ಮಕ್ಕಳಿಗೆ ಉಪಹಾರ ವ್ಯವಸ್ಥೆ ಮಾಡಿದ್ದರು ಎಂದು ಹೇಳಿದ ಸಚಿವರು ಅವರೆಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. 
 
ಕಳೆದ ಬಾರಿಯ ವಾರ್ಷಿಕ ಪರೀಕ್ಷೆಗೆ ಹಾಜರಾಗಿದ್ದ ಮಕ್ಕಳಿಗಿಂತ ಹೆಚ್ಚಿನ ಸಂಖ್ಯೆಯ ಮಕ್ಕಳು ಹಾಜರಾಗಿದ್ದಾರೆ. ಮಕ್ಕಳ ಶೇ. ಹಾಜರಾತಿಯೂ ಸಹ ಈ ಬಾರಿ ಹೆಚ್ಚಾಗಿದೆ ಎಂದು ಅವರು ಹೇಳಿದರು. 
 
ಭಾಷಾ-1 ವಿಷಯಕ್ಕೆ 8,19,694 ಅಭ್ಯರ್ಥಿಗಳು ನೊಂದಾಯಿಸಿದ್ದರೆ, 8,16,544 ಅಭ್ಯರ್ಥಿಗಳು ಹಾಜರಾಗಿ 3150 ಮಕ್ಕಳು ಗೈರು ಹಾಜರಾಗಿಯಾಗಿದ್ದಾರೆ. ಶೇ. 99.62 ಹಾಜರಾತಿ ಇದೆ. ಕಳೆದ ವರ್ಷ ಇದು 98.41 ಇತ್ತು. 
 
ಭಾಷಾ -2 ವಿಷಯಕ್ಕೆ 8,27,988 ಅಭ್ಯರ್ಥಿಗಳು ನೊಂದಾಯಿಸಿದ್ದರೆ, 8,24,686 ಅಭ್ಯರ್ಥಿಗಳು ಹಾಜರಾಗಿ 3302 ಮಕ್ಕಳು ಗೈರು ಹಾಜರಾಗಿಯಾಗಿದ್ದಾರೆ. ಶೇ. 99.60 ಹಾಜರಾತಿ ಇದೆ. ಕಳೆದ ವರ್ಷ ಇದು 98.47 ಇತ್ತು. 
ಭಾಷಾ -3 ವಿಷಯಕ್ಕೆ 8,17,640 ಅಭ್ಯರ್ಥಿಗಳು ನೊಂದಾಯಿಸಿದ್ದರೆ, 8,14,538 ಅಭ್ಯರ್ಥಿಗಳು ಹಾಜರಾಗಿ 3102 ಮಕ್ಕಳು ಗೈರು ಹಾಜರಾಗಿಯಾಗಿದ್ದಾರೆ. ಶೇ. 99.62 ಹಾಜರಾತಿ ಇದೆ. ಕಳೆದ ವರ್ಷ ಇದು 98.47 ಇತ್ತು. 
 
ಸ್ಕೌಟ್ಸ್-ಗೈಡ್ಸ್ ಸ್ವಯಂಸೇವಕರು ಹಾಜರಿದ್ದು ಮಕ್ಕಳಿಗೆ ಮಾರ್ಗದರ್ಶನ ನೀಡಿದರು. ಆರೋಗ್ಯ ಇಲಾಖಾ ಸಿಬ್ಬಂದಿ ಮಕ್ಕಳ ಆರೋಗ್ಯ ತಪಾಸಣೆ ಮಾಡಿದರು. ಎಲ್ಲ ಅಭ್ಯರ್ಥಿಗಳು ಮಾಸ್ಕ್ ಗಳನ್ನು ಧರಿಸಿದ್ದರು. ಮಾಸ್ಕ್ ಧರಿಸದೇ ಬಂದ ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಮಾಸ್ಕ್ ನೀಡಲಾಯಿತು ಎಂದು ಅವರು ವಿವರಿಸಿದರು. 
 
ಒಟ್ಟಾರೆಯಾಗಿ ಪರೀಕ್ಷೆ ಯಾವುದೇ ವಿಘ್ನಗಳಿಲ್ಲದೇ ಯಶಸ್ವಿಯಾಗಿ ನಡೆದಿದ್ದು ಇದಕ್ಕೆ ಕಾರಣೀಭೂತರಾದ ನಮ್ಮ ವಿದ್ಯಾರ್ಥಿಗಳು, ಶಿಕ್ಷಕರು, ಅಧಿಕಾರಿ ವೃಂದಕ್ಕೆ ಸುರೇಶ್ ಕುಮಾರ್ ಕೃತಜ್ಞತೆ ಸಲ್ಲಿಸಿದ್ದಾರೆ.    
 
ಪರೀಕ್ಷಾ ಸಮಯದಲ್ಲಿ ಕಂಡು ಬಂದ ವಿಶೇಷತೆಗಳನ್ನು ಸಚಿವರು ಈ ಸಂರ್ಭದಲ್ಲಿ ವಿವರಿಸಿದರು. 
 
ಮೂಳೆ ಸವೆತ ರೋಗದಿಂದ ಬಳಲುತ್ತಿರುವ ಕುಮಾರಿ ಯಶಸ್ವಿನಿ ಎಂಬ ವಿದ್ಯಾರ್ಥಿನಿ ಬೆಂಗಳೂರಿನ ಕಾವೇರಿಪುರದ ಆರ್ ಎ ಎಸ್ ಕಾನ್ವೆಂಟ್ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದಾಳೆ. ಅವರ ಜೀವನೋಲ್ಲಾಸ ಮೆಚ್ಚುವಂತಹುದು. 
 
ಮೊದಲ ದಿನ ಪರೀಕ್ಷೆ ಬರೆದು ಕಡಿಮೆ ಅಂಕಗಳು ಬರಬಹುದೆಂಬ ಭೀತಿಯಿಂದ ತನ್ನ ಅಜ್ಜಿಗೆ ತಂದಿದ್ದ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದ ಶಿವಮೊಗ್ಗ ಜಿಲ್ಲೆಯ ಕೆಂಚನಾಲಾ ಗ್ರಾಮದ ಚೇತನಾ ಆರೋಗ್ಯವಾಗಿದ್ದು, ಇಂದು ಪರೀಕ್ಷೆಗೆ ಹಾಜರಾಗಿದ್ದಾಳೆ. ಇದು ಖುಷಿಯ ಸಂಗತಿಯಾಗಿದೆ. 
 
 
ಮಳೆ ತೀವ್ರವಾಗಿದ್ದರಿಂದ ಪಾಲಕರ ದ್ವಿಚಕ್ರ ವಾಹನಗಳಲ್ಲಿ ಬರಲು ತೊಂದರೆಯಾದ್ದರಿಂದ ದಾವಣಗೆರೆ ತಾಲೂಕಿನ ಚಿಕ್ಕ ಬಿದರೆ ಗ್ರಾಮದ ಆರು ಮಕ್ಕಳಿಗೆ ಅಧಿಕಾರಿಗಳು ಆಟೋ ಸೌಲಭ್ಯ ಒದಗಿಸಿದರು. 
 
ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು ತೀವ್ರವಾದ ಮಳೆ ಹಿನ್ನೆಲೆಯಲ್ಲಿ ಕೊಪ್ಪ ಮತ್ತು ಶೃಂಗೇರಿ ತಾಲೂಕಿನ ಕೆಲ ಗ್ರಾಮೀಣ ಪ್ರದೇಶದ ಮಕ್ಕಳನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳೇ ಅವರ ವಾಹನದಲ್ಲಿ ಕರೆ ತಂದಿದ್ದಾರೆ. ಶೃಂಗೇರಿ ತಾಲೂಕಿನ ಕಿಕ್ರೆ ಗ್ರಾಮದಲ್ಲಿ ಹಳ್ಳ ತುಂಬಿದ್ದು ಗೊತ್ತಾಗಿ ಮಕ್ಕಳ ಚಲನವಲನಕ್ಕೆ ತೊಂದರೆಯಾಗಿರುವುದು ಇಂಟಲಿಜೆಂಟ್ ನವರಿಂದ ಗೊತ್ತಾಗಿ ನಮ್ಮ ಅಧಿಕಾರಿಗಳು ಮಕ್ಕಳನ್ನು   ಪರೀಕ್ಷಾ ಕೇಂದ್ರಕ್ಕೆ ಬರಲು ವಾಹನ ವ್ಯವಸ್ಥೆ ಮಾಡಿದರು. 
 
 
ಅಥಣಿ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷೆ ಬರೆಯಲು ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಇಬ್ಬರು ಪರೀಕ್ಷಾರ್ಥಿಗಳು ಬೈಕ್ ಸ್ಕಿಡ್ ಆಗಿ ಬಿದ್ದರು. ಅದರಲ್ಲಿ ಮಲ್ಲಿಕಾರ್ಜುನ ಸದಾಶಿವ ಕವಟಿಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಆಸ್ಪತ್ರೆಗೆ ದಾಖಲಾದ್ದರಿಂದ ಪರೀಕ್ಷೆಗೆ ಬರಲಾಗಲಿಲ್ಲ. ಅವನೊಂದಿಗೆ ಬರುತ್ತಿದ್ದ ಸಹಪಾಠಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪರೀಕ್ಷೆಗೆ ಹಾಜರಾಗಿದ್ದಾನೆ.  
 
ಇಂದೂ ಸಹ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಇಬ್ಬರು ವಿದ್ಯಾರ್ಥಿನಿಯರಾದ ಕು. ಶಿಲ್ಪಾ ಮತ್ತು ಕು. ಸಂಜನಾ ಅವರಿಗೆ ಪರೀಕ್ಷೆಗೆ ಬಂದು ಹೋಗಲು ದೋಣಿಯ ವ್ಯವಸ್ಥೆ ಮಾಡಲಾಗಿತ್ತು. ತಮ್ಮೂರು ಕುರು ದ್ವೀಪ ಪ್ರದೇಶದ ಮನೆಗಳಿಂದ ಈ ಮಕ್ಕಳು ಬೋಟ್ ಮೂಲಕ ಬಂದು ಪರೀಕ್ಷೆ ಬರೆದು ಬೋಟ್ನಲ್ಲಿಯೇ ಹಿಂದಿರುಗಿದರು. 
 
ಮಳೆಯಿಂದಾಗಿ ಮರ ಬಿದ್ದು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಶೆಂಡೂರಿನ 44 ಮಕ್ಕಳಿಗೆ ಪರೀಕ್ಷೆಗೆ ಬರಲು ತೊಂದರೆಯಾಗಿತ್ತು. ನಮ್ಮ ಅಧಿಕಾರಿಗಳು ಪೊಲೀಸರ ನೆರವಿನಿಂದ ರಸ್ತೆಯಿಂದ ಮರವು ತೆರವುಗೊಳಿಸಿ ಸಂಚಾರ ಮುಕ್ತಗೊಳಿಸಿದರು.
 
 
ಅದೇ ರೀತಿ ಉತ್ತರ ಕನ್ನಡ ಜಿಲ್ಲೆಯ ಅಡಿಕೆಕುಳೀ ಮತ್ತು ಮಜಿರೆ ಗ್ರಾಮದ ಕೆಪಿಎಸ್ ಮಂಕಿ ಪರೀಕ್ಷಾ ಕೇಂದ್ರಕ್ಕೆ ಬರುವ ರಸ್ತೆಯಲ್ಲಿ ಮರ ಬಿದ್ದು ರಸ್ತೆ ಸಂಚಾರಕ್ಕೆ ತೊಂದರೆಯಾಗಿತ್ತು. ಸಿಆರ್ಪಿಗಳು ಮತ್ತು ಶಿಕ್ಷಕರ ವಾಟ್ಸ್ ಆಪ್ ಮೂಲಕ ವಿಷಯ ವಿನಿಮಯವಾಗಿ ನಮ್ಮ ಇಲಾಖೆಯ ಅಧಿಕಾರಿಗಳು ಮತ್ತು ಶಿಕ್ಷಕರು ಎಲ್ಲ 36 ಮಕ್ಕಳನ್ನು ದ್ವಿಚಕ್ರ ವಾಹನದಲ್ಲಿ ಕರೆ ತಂದರು. 
 
ಶಿರಸಿ ತಾಲೂಕಿನ ಬಸ್ ಸೌಲಭ್ಯವಿಲ್ಲದ ಗ್ರಾಮಗಳ ಮಕ್ಕಳಿಗಾಗಿ ಶಿರಸಿಯ ಮಾರಿಕಾಂಬ ಆಟೋ ಚಾಲಕರ ಮತ್ತು ಮಾಲೀಕರ ಸಂಘದಿಂದ 25 ಆಟೋ ಮತ್ತು 3 ವ್ಯಾನ್ಗಳ ಉಚಿತ ವ್ಯವಸ್ಥೆ ಮಾಡಿ 109 ವಿದ್ಯಾರ್ಥಿಗಳನ್ನು ಕರೆತಂದು ಮತ್ತು ಮನೆಗೆ ವಾಪಾಸು ಕಳಿಸಿ ಔದಾರ್ಯ ತೋರಿದ್ದಾರೆ.
 
 
ಜಾಂಡೀಸ್ನಿಂದಾಗಿ ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆಗೆ ದಾಖಲಾಗಿದ್ದ ಶಕ್ತಿವೇಲ್ಗೆ ವೈದ್ಯರ ಸಲಹೆಯಂತೆ ಎರಡೂ ದಿನವೂ ಆಸ್ಪತ್ರೆಯಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು. 
 
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಬೂರದೂರ ಹುಂಡಿ ಗ್ರಾಮದ ಬುಡಕಟ್ಟು ಜನಾಂಗದ ಪ್ರಿಯಾ ಎಂಬ ವಿದ್ಯಾರ್ಥಿನಿ ಕೆಪಿಎಸ್ ಶಾಲೆಯ ಪರೀಕ್ಷಾ ಕೇಂದ್ರಕ್ಕೆ ಬಂದಿರಲಿಲ್ಲ. ಇದನ್ನು ಗಮನಿಸಿದ ಮಾರ್ಗಾಧಿಕಾರಿಗಳು ಕೂಡಲೇ ಗ್ರಾಮಕ್ಕೆ ವಾಹನ ಕಳಿಸಿ ಪರೀಕ್ಷೆಗೆ ಕರೆತಂದರು. 
 
 
ವಿಭಿನ್ನ ಸಾಮಥ್ರ್ಯದ ವಿದ್ಯಾರ್ಥಿ ಬೆಂಗಳೂರಿನ ಕುಮಾರಪಾರ್ಕ್ ವಿದ್ಯಾನಿಕೇತನ ಪ್ರೌಢಶಾಲೆಯ ಎಸ್. ಭರತ್ಗೆ  ಮಲ್ಲೇಶ್ವರಂನ ಸ್ಟೆಲ್ಲಾ ಮೆರಿಸ್ ಬಾಲಕಿಯರ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದ ನೆಲಮಹಡಿಯಲ್ಲಿ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ  ಒದಗಿಸಲಾಯಿತು. ನರ್ಸ್ ಒಬ್ಬರ ಸಹಾಯ ಒದಗಿಸಿ ಒಂದು ಗಂಟೆ ಹೆಚ್ಚಿನ ಸಮಯಾವಕಾಶ ನೀಡಲಾಯಿತು. 
 
ಹೀಗೆ ಹಲವಾರು ವಿಶೇಷ ಪ್ರಕರಣಗಳು ನಡುವೆಯೂ ನಮ್ಮ ವಿದ್ಯಾರ್ಥಿಗಳು ಸೇನಾನಿಗಳಾಗಿ ಯುದ್ಧ ಗೆದ್ದಿದ್ದಾರೆ. ಮಕ್ಕಳು- ಪೋಷಕರು ಎಲ್ಲರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳು. 
 
ರಾಜ್ಯದ ಬಹುತೇಕ ಕಡೆಗಳಲ್ಲಿ ಸಂಘ ಸಂಸ್ಥೆಗಳು ಮತ್ತು ಜನಪ್ರತಿನಿಧಿಗಳು   ಶಾಲೆಗಳಲ್ಲಿ ಮಕ್ಕಳಿಗೆ ಮಧ್ಯಾಹ್ನದ ಉಪಹಾರ ವ್ಯವಸ್ಥೆ ಮಾಡಿದ್ದರು.   
 
 
ಹಲವಾರು ಕಡೆಗಳಲ್ಲಿ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿತ್ತು. ಕೆಲವೆಡೆ ವಾಹನಗಳ ವ್ಯವಸ್ಥೆ ಮಾಡಲಾಗಿತ್ತು. ಸಾರಿಗೆ ಸೌಲಭ್ಯವಿಲ್ಲದೇ ಯಾವೊಬ್ಬ ಅಭ್ಯಯೂ ಪರೀಕ್ಷೆಗೆ ಗೈರು ಹಾಜರಾಗಿಲ್ಲ. 
 
ಯಾವುದೇ ಅಭ್ಯರ್ಥಿ ಪರೀಕ್ಷಾ ಅವ್ಯವಹಾರದಲ್ಲಿ ತೊಡಗಿಲ್ಲ. 
 
ಅನಾರೋಗ್ಯ ಕಾರಣಗಳಿಂದ ವಿಶೇಷ ಕೊಠಡಿಗಳಲ್ಲಿ ಬರೆದ ಅಭ್ಯರ್ಥಿಗಳು- 152
 
ಸನಿಹದ ಪರೀಕ್ಷಾ  ಕೇಂದ್ರಗಳನ್ನು ಆರಿಸಿಕೊಂಡ ವಲಸೆ ವಿದ್ಯಾರ್ಥಿಗಳು- 10693
 
ವಸತಿ ನಿಲಯಗಳಲ್ಲಿದ್ದು ಪರೀಕ್ಷೆ ಬರೆದವರು - 2870
 
ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಮಕ್ಕಳು  ಸಾಮಾಜಿಕ ಅಂತರ ಕಾಯ್ದುಕೊಂಡಿದ್ದಾರೆ.
 
ಸ್ಕೌಟ್ಸ್-ಗೈಡ್ಸ್ ಸ್ವಯಂಸೇವಕರು ಹಾಜರಿದ್ದು ಮಕ್ಕಳಿಗೆ ಮಾರ್ಗದರ್ಶನ ನೀಡಿದರು.
 
ಮೊನ್ನೆಯ ರೀತಿಯಲ್ಲಿಯೇ ದಕ್ಷಿಣ ಕನ್ನಡ, ಉತ್ತರ ಕನ್ನಡ  ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಕೇರಳ ಮತ್ತು ಮಹಾರಾಷ್ಟ್ರ, ಆಂಧ್ರಪ್ರದೇಶ, ಗೋವಾ ರಾಜ್ಯಗಳಿಂದ ದಿಂದ ಒಟ್ಟು   706  ಮಕ್ಕಳು ಬಂದು ಪರೀಕ್ಷೆ ಬರೆದಿದ್ದಾರೆ. ಅವರಿಗೆ ಗಡಿ ಪ್ರದೇಶದಿಂದ ವಾಹನಗಳ ವ್ಯವಸ್ಥೆ ಮಾಡಲಾಗಿತ್ತು.  4 ಅಭ್ಯರ್ಥಿಗಳು ಗೈರು ಹಾಜರಾಗಿದ್ದರು. 
 
ಒಟ್ಟಾರೆಯಾಗಿ ಪರೀಕ್ಷೆ ಯಾವುದೇ ವಿಘ್ನಗಳಿಲ್ಲದೇ ಯಶಸ್ವಿಯಾಗಿ ನಡೆದಿದ್ದು ಇದಕ್ಕೆ ಕಾರಣೀಭೂತರಾದ ನಮ್ಮ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು, ಅಧಿಕಾರಿ ವೃಂದಕ್ಕೆ ಸಚಿವರು ಕೃತಜ್ಞತೆ ಸಲ್ಲಿಸಿದರು. 
 
ಕೋವಿಡ್-19 ಸೋಂಕು ಪ್ರಸರಣದಿಂದಾಗಿ ಎಲ್ಲರ ಸಹಕಾರದೊಂದಿಗೆ ಸರಳೀಕೃತವಾಗಿ ಎರಡು ದಿನಗಳ ಕಾಲ ನಡೆಸಲಾದ 2020-21ನೇ ಸಾಲಿನ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯಲ್ಲಿ ಕೈಗೊಂಡ ಉಪಕ್ರಮಗಳ ಕುರಿತು ಯಶೋಗಾಥೆ ಪುಸ್ತಿಕೆ ಹೊರತರಲಾಗುವುದು.  
 
ಶಾಲಾರಂಭ:-
ಶಾಲಾರಂಭದ ಕುರಿತ ಪ್ರಸ್ತಾಪಕ್ಕೆ ಉತ್ತರಿಸಿದ ಸಚಿವ ಸುರೇಶ್ ಕುಮಾರ್ ಈ ಸಂಬಂಧ ಇಲಾಖೆ ರಚಿಸಿರುವ ಟಾಸ್ಕ್ ಫೋರ್ಸ್ ತನ್ನ ಹಂತದಲ್ಲಿ ಸವಿವರವಾಗಿ ಚರ್ಚಿಸಿದ್ದು, ಈ ಕುರಿತಂತೆ ಮುಂದಿನ ದಿನಗಳಲ್ಲಿ ಸಭೆ ಸೇರಿ ಎಲ್ಲ ಆಯಾಮಗಳನ್ನು ಅವಲೋಕಿಸಿ ಸೂಕ್ತ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ