Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಸರ್ಕಾರಕ್ಕೆ ಭಯೋತ್ಪಾದಕರೇ ಬಿಗ್ ಬಾಸ್: ಆರ್ ಅಶೋಕ್ ಟೀಕೆ

Karnataka BJP

Krishnaveni K

ಬೆಂಗಳೂರು , ಸೋಮವಾರ, 14 ಅಕ್ಟೋಬರ್ 2024 (13:52 IST)
ಬೆಂಗಳೂರು:ಕರ್ನಾಟಕದಲ್ಲಿ ಈಗ ಬಿಗ್ ಬಾಸ್ ಸೀರಿಯಲ್ ನಡೆಯುತ್ತಿದೆ. ಕಾಂಗ್ರೆಸ್ ಸರಕಾರಕ್ಕೆ ಭಯೋತ್ಪಾದಕರೇ ಬಿಗ್ ಬಾಸ್. ಅವರ ಸೂಚನೆಯಂತೆ ಸರಕಾರ ನಡೆದುಕೊಳ್ಳುತ್ತಿದೆ ಎಂದು ಹುಬ್ಬಳ್ಳಿ ಗಲಭೆ ಪ್ರಕರಣದ ಕೇಸ್ ಹಿಂಪಡೆದ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಟೀಕಿಸಿದರು.


ಇನ್ನೊಂದೆಡೆ ರಾಜ್ಯದ್ದು ಹಿಂದೂಗಳ ವಿರೋಧಿ ಸರಕಾರ, ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ ದೇಶದ್ರೋಹಿಗಳನ್ನು ರಕ್ಷಿಸುವ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದರು.

ನಗರದ ಸ್ವಾತಂತ್ರ್ಯ ಉದ್ಯಾನವನದ ಬಳಿ ಇಂದು ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಅಲ್ಪಸಂಖ್ಯಾತರನ್ನು ಓಲೈಕೆ ಮಾಡುವ ದುಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ಒಂದು ಸಾಂಕೇತಿಕ ಪ್ರತಿಭಟನೆ ಇದು ಎಂದು ವಿಜಯೇಂದ್ರ ಅವರು ತಿಳಿಸಿದರು. ಹುಬ್ಬಳ್ಳಿಯಲ್ಲಿ 2022ರಲ್ಲಿ ಪೊಲೀಸ್ ಠಾಣೆ ಮೇಲೆ ಕಲ್ಲೆಸೆದ, ದಾಳಿ ಮಾಡಿದ್ದ, ಗಲಭೆ ಸೃಷ್ಟಿಸಿದ್ದ ದೇಶದ್ರೋಹಿಗಳ ಮೇಲಿನ ಕೇಸುಗಳನ್ನು ಸಿದ್ದರಾಮಯ್ಯನವರ ನೇತೃತ್ವದ ಸರಕಾರ ಹಿಂದಕ್ಕೆ ಪಡೆದಿದೆ ಎಂದು ಟೀಕಿಸಿದರು.

ಹುಬ್ಬಳ್ಳಿ ಘಟನೆ ವಿಷಯದಲ್ಲಿ ಎನ್‍ಐಎ ತನಿಖೆ ನಡೆಯುತ್ತಿದೆ. ಮುಖ್ಯಮಂತ್ರಿಗಳ ಕುರ್ಚಿ ಅಲ್ಲಾಡುತ್ತಿದೆ ಎಂದು ಯಾವ ಮಟ್ಟಕ್ಕೆ ಹೋಗಲು ಕೂಡ ಕಾಂಗ್ರೆಸ್ ಸರಕಾರ ಹೇಸುವುದಿಲ್ಲ ಎಂದು ದೂರಿದರು.
 
ಸಿದ್ದರಾಮಯ್ಯರಿಗೆ ಸವಾಲು ಹಾಕಿದ ವಿಜಯೇಂದ್ರ

ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದು ನಿಶ್ಚಿತ ಎಂದು ತಿಳಿಸಿದರು. ಸಿದ್ದರಾಮಯ್ಯನವರು, ವಿಜಯೇಂದ್ರ ಭವಿಷ್ಯ ಹೇಳುತ್ತಾರಾ ಎಂದು ಪ್ರಶ್ನಿಸಿದ್ದನ್ನು ನೆನಪಿಸಿದರು. ಸಿದ್ದರಾಮಯ್ಯನವರು ತಪ್ಪಿಸಿಕೊಂಡು ಹೋಗಲು ಸಾಧ್ಯವಿಲ್ಲ. ಸಿದ್ದರಾಮಯ್ಯನವರು 5 ವರ್ಷ ಮುಖ್ಯಮಂತ್ರಿ ಎಂದು ನಿಮ್ಮ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಂದ ಹೇಳಿಸಿ ನೋಡೋಣ ಎಂದು ವಿಜಯೇಂದ್ರರು ಸವಾಲೆಸೆದರು.

ಖರ್ಗೆಯವರು ಇಂಥ ಹೇಳಿಕೆ ಕೊಡುತ್ತಿಲ್ಲ. ರಾಜ್ಯ ರಾಜಕಾರಣದ ಕುರಿತು ಮಾತನಾಡದೇ ಅವರು
ತಪ್ಪಿಸಿಕೊಂಡು ಹೋಗುತ್ತಿದ್ದಾರೆ. ನಮ್ಮ ಪಕ್ಷದ ಹೋರಾಟದ ಬಳಿಕ ಮುಡಾ ಹಗರಣದಲ್ಲಿ ಕದ್ದ ಮಾಲನ್ನು ವಾಪಸ್ ಕೊಡಲು ಸಿದ್ದರಾಮಯ್ಯನವರು ನಿರ್ಧರಿಸಿದ್ದಾರೆ. ಮುಖ್ಯಮಂತ್ರಿಗಳ ಪಾಪದ ಕೊಡ ತುಂಬಿದೆ. ಸಿದ್ದರಾಮಯ್ಯನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡುವುದು ಸೂರ್ಯ ಚಂದ್ರರು ಇರುವಷ್ಟೇ ಸತ್ಯ ಎಂದು ವಿಶ್ವಾಸ ವ್ಯಕ್ತಪಡಿಸಿದರು.
 
ಈ ಸರಕಾರ ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಹಣವನ್ನು ಲೂಟಿ ಮಾಡಿದೆ. ಇದರ ಬಗ್ಗೆ ಜನರು ಚರ್ಚಿಸುತ್ತಿದ್ದಾರೆ. ಬಡವರಿಗೆ ಮೀಸಲಿಟ್ಟ ನಿವೇಶನಗಳನ್ನು ಮೈಸೂರಿನಲ್ಲಿ ಮುಖ್ಯಮಂತ್ರಿಗಳ ಕುಟುಂಬವೇ ಲೂಟಿ ಮಾಡಿದೆ. ಎಸ್‍ಇಪಿ, ಟಿಎಸ್‍ಪಿ ಹಣ ದುರುಪಯೋಗದ ಕುರಿತು ಜನರು ಚರ್ಚೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿಯೇ ಇಲ್ಲವಾಗಿದೆ. ಇಂಥ ಸರಕಾರದಲ್ಲಿ ಶಾಸಕರಾಗಿರುವ ಬದಲು ಆತ್ಮಹತ್ಯೆ ಮಾಡಿಕೊಳ್ಳುವುದೇ ಒಳಿತೆಂದು ಕಾಂಗ್ರೆಸ್ ಶಾಸಕ ರಾಜು ಕಾಗೆಯವರು ಹೇಳಿದ್ದಾಗಿ ಗಮನ ಸೆಳೆದರು.

ಗ್ಯಾರಂಟಿಯಿಂದ ಅಭಿವೃದ್ಧಿ ಕೆಲಸ ನಿಂತು ಹೋಗಿದೆ ಎಂದು ಬಸವರಾಜರಾಯರೆಡ್ಡಿ ಹೇಳಿದ್ದಾರೆ. ಅಭಿವೃದ್ಧಿ ಕೆಲಸ ಸ್ಥಗಿತವಾಗಿದೆ ಎಂದು ಆರ್.ವಿ.ದೇಶಪಾಂಡೆ ಸೇರಿ ಕಾಂಗ್ರೆಸ್ ಮುಖಂಡರೇ ಹೇಳುತ್ತಿದ್ದಾರೆ ಎಂದು ವಿವರಿಸಿದರು.

ಸಿಎಂ ರಾಜೀನಾಮೆ ಕಾಲ ಸನ್ನಿಹಿತವಾಗಿದೆ. ಇನ್ನೊಂದೆಡೆ ದೇಶದ್ರೋಹಿಗಳ ಕೇಸು ಹಿಂಪಡೆಯುವ ದುಸ್ಸಾಹಸಕ್ಕೆ ಕಾಂಗ್ರೆಸ್ ಸರಕಾರ ಕೈಹಾಕಿದೆ. ಕಾಂಗ್ರೆಸ್ ಯೋಗ್ಯತೆ ಹರಿಯಾಣ, ಜಮ್ಮು- ಕಾಶ್ಮೀರದ ಚುನಾವಣೆಯಲ್ಲಿ ಗೊತ್ತಾಗಿದೆ. ಅಲ್ಪಸಂಖ್ಯಾತರ ಪಕ್ಷ ಇದ್ದಾಗ ಅಲ್ಪಸಂಖ್ಯಾತರಿಗೆ ಅದುವೇ ಮೊದಲ ಆಯ್ಕೆ. ಅವರಿಲ್ಲದೆ ಇದ್ದಲ್ಲಿ ಕಾಂಗ್ರೆಸ್ ಕಡೆ ನೋಡುತ್ತಾರೆ. ಇಷ್ಟಾದರೂ ಕಾಂಗ್ರೆಸ್ ಪಕ್ಷದವರಿಗೆ ಬುದ್ಧಿ ಬಂದಿಲ್ಲ ಎಂದು ಟೀಕಿಸಿದರು. ಮುಂದಿನ ದಿನಗಳಲ್ಲಿ ಜನಾಂದೋಲನ, ಬೃಹತ್ ಪ್ರತಿಭಟನೆ ನಡೆಸುವುದಾಗಿ ಅವರು ಪ್ರಕಟಿಸಿದರು.
 

Share this Story:

Follow Webdunia kannada

ಮುಂದಿನ ಸುದ್ದಿ

ಮದರಸಾ ಶಿಕ್ಷಣ ಸರಿಯಿಲ್ಲ, ಈ ಶಾಲೆಗಳಿಗೆ ಸರ್ಕಾರ ಅನುದಾನ ನಿಲ್ಲಿಸಬೇಕು ಎಂದು ಪತ್ರ ಬರೆದ ಮಕ್ಕಳ ಹಕ್ಕುಗಳ ಆಯೋಗ