Publish Date: Thu, 04 Dec 2025 (14:04 IST)
Updated Date: Thu, 04 Dec 2025 (14:07 IST)
ಬೆಂಗಳೂರು: ಕರ್ನಾಟಕದಲ್ಲಿ ಶೇ.63 ರಷ್ಟು ಭ್ರಷ್ಟಾಚಾರವಾಗುತ್ತಿದೆ ಎಂದು ಉಪಲೋಕಾಯುಕ್ತ ನ್ಯಾ ಬಿ ವೀರಪ್ಪ ಹೇಳಿದ್ದಾರೆ. ಇದನ್ನು ಉಲ್ಲೇಖಿಸಿ ವಿಪಕ್ಷ ನಾಯಕ ಆರ್ ಅಶೋಕ್ ಈಗ ಏನು ಹೇಳ್ತೀರಿ ಎಂದು ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ.
ಕೇರಳದಲ್ಲಿ ಇಂದು ಶೇ.10 ಮಾತ್ರ ಭ್ರಷ್ಟಾಚಾರವಿದೆ. ಆದರೆ ಕರ್ನಾಟಕದಲ್ಲಿ ಶೇ.63 ರಷ್ಟು ಭ್ರಷ್ಟಾಚಾರವಿದೆ ಎಂದು ಉಪಲೋಕಾಯುಕ್ತರು ಕಾರ್ಯಕ್ರಮವೊಂದರಲ್ಲಿ ಹೇಳಿದ್ದರು. ಅವರ ಹೇಳಿಕೆ ಉಲ್ಲೇಖಿಸಿ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
40% ಕಮಿಷನ್ ಎಂದು ಬಿಜೆಪಿ ಸರ್ಕಾರದ ಮೇಲೆ ಇಲ್ಲಸಲ್ಲದ ಸುಳ್ಳು ಆರೋಪ, ಅಪಪ್ರಚಾರ ಮಾಡಿ ಕನ್ನಡಿಗರ ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಈಗ ಸಂಪೂರ್ಣವಾಗಿ ಕಮಿಷನ್ ದಂಧೆಯಲ್ಲಿ ಮುಳುಗಿದೆ.
ಸ್ವಾಮಿ ಸಿಎಂ ಸಿದ್ದರಾಮಯ್ಯನವರೇ ಹಾಗು ಡಿಸಿಎಂ ಡಿಕೆ ಶಿವಕುಮಾರ್ ಅವರೇ, ಸರ್ಕಾರದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರ ತುಂಬಿ ತುಳುಕಾಡುತ್ತಿದೆ, ಕರ್ನಾಟಕದಲ್ಲಿ ಶೇ. 63% ಭ್ರಷ್ಟಾಚಾರ ಇದೆ ಸ್ವತಃ ಮಾನ್ಯ ಉಪಲೋಕಾಯುಕ್ತರೇ ತಮ್ಮ ಘನ ಸರಕಾರಕ್ಕೆ ಸರ್ಟಿಫಿಕೇಟ್ ಕೊಟ್ಟಿದ್ದಾರೆ.
ಈಗೇನು ಹೇಳುತ್ತೀರಿ? ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡುತ್ತೀರಾ? ಅಥವಾ ಇದೇ ಭಂಡ ಬಾಳು ಮುಂದುವರೆಸುತ್ತೀರಾ? ಸುಳ್ಳು, ಅಪಪ್ರಚಾರ, ಕುತಂತ್ರದಿಂದ 136 ಸೀಟು ಪಡೆದ ಕಾಂಗ್ರೆಸ್ ಪಕ್ಷ, ಈಗ ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿದರೆ, 36 ಸೀಟೂ ಬರುವುದಿಲ್ಲ. ಇದು ನನ್ನ ಗ್ಯಾರೆಂಟಿ ಎಂದು ಹೇಳಿದ್ದಾರೆ.