Publish Date: Tue, 16 Dec 2025 (10:22 IST)
Updated Date: Tue, 16 Dec 2025 (10:24 IST)
ಬೆಂಗಳೂರು: ರಸ್ತೆ ಮಾಡಿದರೆ ಬಡವರು ಉದ್ದಾರವಾಗ್ತಾರಾ ಎಂದು ಹೇಳಿಕೆ ನೀಡಿದ್ದ ಗೃಹಸಚಿವ ಜಿ ಪರಮೇಶ್ವರ್ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ಟೀಕಾ ಪ್ರಹಾರ ನಡೆಸಿದ್ದಾರೆ.
ಅಲ್ಲಿಗೆ ನಮ್ಮ ಕನ್ನಡ ನಾಡು ಉದಯವಾಯ್ತು ಎಂದು ವ್ಯಂಗ್ಯ ಮಾಡಿದ್ದಾರೆ. ಮೊನ್ನೆ ತುಮಕೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಪರಮೇಶ್ವರ್ ರಸ್ತೆ, ಚರಂಡಿ ನಿರ್ಮಾಣ ಮಾಡುವುದರಿಂದ ಬಡವರು ಉದ್ದಾರ ಆಗ್ತಾರಾ ಎಂದು ಗ್ಯಾರಂಟಿ ಟೀಕಿಸುವವರಿಗೆ ತಿರುಗೇಟು ನೀಡಿದ್ದರು.
ಅವರ ಹೇಳಿಕೆಯನ್ನು ಟೀಕಿಸಿರುವ ಆರ್ ಅಶೋಕ್ ಸರ್ಕಾರ ನಡೆಸುವುದು, ಅಭಿವೃದ್ಧಿ ಮಾಡುವುದು ಅಂದರೆ 3 ತಿಂಗಳಿಗೋ, 6 ತಿಂಗಳಿಗೋ ಒಮ್ಮೆ ಗೃಹಲಕ್ಷ್ಮಿ ಹಣ ಅಕೌಂಟಿಗೆ ಹಾಕೋದು, ಬಾಕಿ ಸಮಯದಲ್ಲಿ ರಾಜಕೀಯ ಮಾಡೋದು, ಕುರ್ಚಿಗಾಗಿ ಕಿತ್ತಾಡೋದು ಅಂದುಕೊಂಡಿದ್ದಾರೆ ಕಾಂಗ್ರೆಸ್ ನಾಯಕರು.
ರಸ್ತೆ, ಚರಂಡಿ, ಮೂಲಸೌಕರ್ಯ ನಿರ್ಮಾಣದಿಂದ ಬಡವರು ಉದ್ಧಾರ ಆಗಿಲ್ಲ ಅನ್ನೋ ಮನಸ್ಥಿತಿ ಇರುವ ಕಾಂಗ್ರೆಸ್ ಸರ್ಕಾರದಿಂದ ಕರ್ನಾಟಕದ ಜನತೆ ಇನ್ನೇನು ತಾನೇ ನಿರೀಕ್ಷಿಸಲು ಸಾಧ್ಯ?
ರಸ್ತೆ, ಚರಂಡಿ ಬೇಡ ಅಂದಮೇಲೆ, ತುಮಕೂರಿನವರೆಗೂ ಮೆಟ್ರೋ ಯಾಕೆ ಬೇಕು ಪರಮೇಶ್ವರ್ ಅವರೇ? SCSP/TSP ಹಣ ದುರ್ಬಳಕೆ ಮಾಡಿಕೊಳ್ಳುತ್ತಿರುವಂತೆ, ಮೆಟ್ರೋ ಕಾಮಗಾರಿಯ ಹಣವನ್ನೂ ಗ್ಯಾರೆಂಟಿ ಯೋಜನೆಗಳಿಗೆ ಬಳಸಿಕೊಂಡು ಬಿಡಿ. ಒಟ್ಟಿನಲ್ಲಿ ಈ ನಾಲಾಯಕ್ ಕಾಂಗ್ರೆಸ್ ಸರ್ಕಾರ ತೊಲಗುವವರೆಗೂ ರಾಜ್ಯದಲ್ಲಿ ಅಭಿವೃದ್ಧಿ ಅಸಾಧ್ಯ. ಇದಂತೂ ಗ್ಯಾರೆಂಟಿ ಎಂದಿದ್ದಾರೆ.