ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಎಲ್ಲ ಸ್ಥಳಗಳಲ್ಲಿ ಮಂಗಳವಾರ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವೆಡೆ ಮಾತ್ರ ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಮಂಗಳವಾರ ನೈರುತ್ಯ ಮುಂಗಾರು ದುರ್ಬಲವಾಗಿತ್ತು. ಪ್ರಮುಖವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ 4 ಸೆಂ.ಮೀ, ಉಡುಪಿ ಜಿಲ್ಲೆಯ ಸಿದ್ದಾಪುರದಲ್ಲಿ 3 ಸೆಂ.ಮೀ. ಮಳೆಯಾಗಿದೆ ಎಂದು ಹೇಳಿದ್ದಾರೆ.
ಕರ್ನಾಟಕದ ಕರಾವಳಿಯಲ್ಲಿ ಕಡಿಮೆ ಒತ್ತಡ ಇರುವ ವಿಸ್ತರಿಸಿದ ಪ್ರದೇಶ ಇದೆ. ಇದರ ಪ್ರಭಾವದಿಂದಾಗಿ ಜುಲೈ 3ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಎಲ್ಲ ಸ್ಥಳಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಕೆಲವು ಸ್ಥಳಗಳಲ್ಲಿ ಮಾತ್ರ ಮಳೆಯಾಗುವ ಸಾಧ್ಯತೆಯಿದೆ ಎಂದು ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.