Publish Date: Sun, 11 Jul 2021 (19:06 IST)
Updated Date: Sun, 11 Jul 2021 (19:08 IST)
ಬೆಂಗಳೂರು: ಬಂಗಾಳ ಉಪಸಾಗರದ ಪಶ್ಚಿಮ ಭಾಗದ ಮಧ್ಯಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಈ ಪ್ರಭಾವದಿಂದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 15ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗುವ ಹೆಚ್ಚಿನ ಸಾಧ್ಯತೆಯಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಕೆಲವೆಡೆ ಭಾರಿ ಹಾಗೂ ಅತಿಭಾರಿ ಮಳೆಯಾಗುವ ನಿರೀಕ್ಷೆಯಿದೆ. ಜುಲೈ 12ರಿಂದ 15ರವರೆಗೆ ಆರೆಂಜ್ ಅಲರ್ಟ್ ಕೊಡಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ಬೀದರ್, ಕಲಬುರ್ಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಭಾರಿ ಮಳೆಯನ್ನು ನಿರೀಕ್ಷಿಸಲಾಗಿದ್ದು, ಜುಲೈ 15ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಪ್ರಾಾದೇಶಿಕ ನಿರ್ದೆಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಭಾನುವಾರ ವ್ಯಾಪಕ ಮಳೆಯಾಗಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಬಹುತೇಕ ಎಲ್ಲ ಸ್ಥಳಗಳಲ್ಲಿ ಮಳೆಯಾಗಿದೆ.
ಮುಖ್ಯವಾಗಿ, ಉತ್ತರ ಕನ್ನಡ ಜಿಲ್ಲೆಯ ಮಂಕಿಯಲ್ಲಿ 12 ಸೆಂ.ಮೀ, ಉಡುಪಿ ಜಿಲ್ಲೆಯ ಕೋಟ, ಕುಂದಾಪುರದಲ್ಲಿ 10 ಸೆಂ.ಮೀ, ಮಂಗಳೂರಿನಲ್ಲಿ 9 ಸೆಂ.ಮೀ, ಕೊಡಗು ಜಿಲ್ಲೆಯ ಭಾಗಮಂಡಲ 7 ಸೆಂ.ಮೀ. ಮಳೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.