Select Your Language

Notifications

webdunia
webdunia
webdunia
webdunia

ಮಾರ್ಚ್ 7ರಿಂದ ವಿವಿಧ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಮಾರ್ಚ್ 7ರಿಂದ ವಿವಿಧ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
bangalore , ಭಾನುವಾರ, 6 ಮಾರ್ಚ್ 2022 (19:21 IST)
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಒಣ ಹವೆ ಇದ್ದು, ಮಾರ್ಚ್ ತಿಂಗಳ ಬಿಸಿಲಿಗೆ ಜನರು ಹೈರಾಣಾಗಿದ್ದಾರೆ.
ರಾಜ್ಯದ ಹಲವು ಕಡೆ ಮಾರ್ಚ್ 7ರ ಬಳಿಕ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯ ದಕ್ಷಿಣ ಭಾಗದಲ್ಲಿ ತೀವ್ರವಾದ ವಾಯುಭಾರ ಕುಸಿತ ಉಂಟಾಗಿದೆ. ಇದರ ಪರಿಣಾಮ ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ತಮಿಳುನಾಡು, ಕೇರಳ ರಾಜ್ಯಗಳಲ್ಲಿಯೂ ಎರಡು ದಿನ ಮಳೆಯಾಗಲಿದೆ.ಮಾರ್ಚ್ 7ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರದಲ್ಲಿ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.ಮಾರ್ಚ್ 8ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಗದಗ, ಧಾರವಾಡ, ಹಾವೇರಿ ಜಿಲ್ಲೆಯ ಕೆಲವು ಕಡೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಪಶ್ಚಿಮ ಘಟ್ಟದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಮಾರ್ಚ್ 7, 8, 9ರಂದು ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ರಾಜ್ಯದ ಇತರ ಜಿಲ್ಲೆಗಳಲ್ಲಿ ಬಿಸಿಲು, ಒಣ ಹವೆ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.ಪ್ರಭಾವ ಕಡಿಮೆ ದಕ್ಷಿಣ ಬಂಗಾಳ ಕೊಲ್ಲಿಯ ಮಧ್ಯ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪ್ರಭಾವ ಭಾನುವಾರದ ಬಳಿಕ ತಗ್ಗಲಿದೆ ಎಂದು ಅಂದಾಜಿಸಲಾಗಿದೆ. ಸೋಮವಾರದಿಂದ ತಮಿಳುನಾಡು ಕರಾವಳಿ ಭಾಗದಲ್ಲಿ ಮಳೆ ಕಡಿಮೆಯಾಗಲಿದೆ. ಭಾನುವಾರ ತಮಿಳುನಾಡು, ಶ್ರೀಲಂಕಾದಲ್ಲಿ ಮಳೆಯಾಗದೆ. ಮಂಗಳವಾರದ ತನಕ ಕೇರಳ ಕರಾವಳಿ ಭಾಗದಲ್ಲಿ ಮಳೆ ಮುಂದುವರೆಯುವ ಮುನ್ಸೂಚನೆ ನೀಡಲಾಗಿದೆ.
ಈ ವರ್ಷದ ಮೊದಲ ವಾಯುಭಾರ ಕುಸಿತ ಶ್ರೀಲಂಕಾ ಕರಾವಳಿಯ ಕಡೆಗೆ ಚಲಿಸಲಿದೆ. ಆದರೆ ತಮಿಳುನಾಡಿನಲ್ಲಿ ಮಾರ್ಚ್‌ 7ರ ತನಕ ಮಳೆ ಮುನ್ಸೂಚನೆಯನ್ನು ನೀಡಲಾಗಿದೆ. ತಮಿಳುನಾಡು ಮಾತ್ರವಲ್ಲ ಪುದಚೇರಿ, ಕಾರೈಕಲ್‌ನಲ್ಲಿಯೂ ಸಾಧಾರಣೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ವಾಯುಭಾರ ಕುಸಿತದ ಪ್ರಭಾವದಿಂದ ಗಂಟೆಗೆ ಸುಮಾರು 15 ಕಿ. ಮೀ. ವೇಗದಲ್ಲಿ ಗಾಳಿ ಬೀಸುತ್ತಿದೆ. ಗಾಳಿಯ ವೇಗ ಗಂಟೆಗೆ 40 ರಿಂದ 45 ಕಿ. ಮೀ. ಆಗುವ ನಿರೀಕ್ಷೆ ಇದೆ. ಇದರಿಂದಾಗಿ ಮುಂದಿನ 5 ದಿನಗಳ ತನಕ ಸಮುದ್ರಕ್ಕೆ ಇಳಿಯಬಾರದು ಎಂದು ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.
ಭಾನುವಾರ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಪ್ರದೇಶದ ಹಲವು ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ತಮಿಳುನಾಡಿನ ತಂಜಾವೂರು, ತಿರುವರೂರು, ನಾಗಪಟ್ಟಣಂ, ಮೈಲಾಡುತುರೈ, ವಿಲ್ಲುಪುರಂ ಮತ್ತು ಕಡಲೂರು ಜಿಲ್ಲೆಗಳು ಮತ್ತು ಪುದುಚೇರಿ ಮತ್ತು ಕಾರೈಕಲ್ ಪ್ರದೇಶದ ಮಳೆ ಮುನ್ಸೂಚನೆ ನೀಡಲಾಗಿದೆ. ಪುದುಕೊಟ್ಟೈ, ಅರಿಯಲೂರು, ಪೆರಂಬಲೂರು, ಕಲ್ಲಕುರಿಚಿ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ.ಮಾರ್ಚ್ 7ರ ಸೋಮವಾರ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಭಾಗದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ತಮಿಳುನಾಡು ಮತ್ತು ಪುದುಚೇರಿಯ ಕಡಲೂರು, ಕಲ್ಲಕುರಿಚಿ ಮತ್ತು ವಿಲ್ಲುಪುರಂ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ಕೊಡಲಾಗಿದೆ.
ತಮಿಳುನಾಡಿನ ಚೆಂಗಲ್ಪಟ್ಟು, ಕಾಂಚೀಪುರಂ, ತಿರುವಣ್ಣಾಮಲೈ, ತಂಜಾವೂರು, ತಿರುವರೂರು, ನಾಗಪಟ್ಟಣಂ, ಮೈಲಾಡುತುರೈ, ಪುದುಕೊಟ್ಟೈ, ಅರಿಯಲೂರ್ ಮತ್ತು ಪೆರಂಬಲೂರು ಜಿಲ್ಲೆಗಳು ಮತ್ತು ಕಾರೈಕಲ್ ಪ್ರದೇಶದಲ್ಲಿ ಸೋಮವಾರ ಸಹ ಮಳೆ ಮುಂದುವರೆಯಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಪ್ರಗತಿ ಪರ ಮಹಿಳೆ