ರಾಜಾಜಿನಗರದ ಇಎಸ್‌ಐ ಆಸ್ಪತ್ರೆಯಲ್ಲಿರುವ ಜಯದೇವ ಹೃದ್ರೋಗ ಸಂಸ್ಥೆಯ ಕಾರ್ಡಿಯಾಲಜಿ ವಿಭಾಗವನ್ನು ಬನ್ನೇರುಘಟ್ಟಕ್ಕೆ ಸ್ಥಳಾಂತರ ಮಾಡುವ ನಿರ್ಧಾರವನ್ನು ತಕ್ಷಣವೇ ಕೈಬಿಡಬೇಕು ಎಂದು ಆಮ್ ಆದ್ಮಿ ಪಾರ್ಟಿಯ ಬೆಂಗಳೂರು ನಗರದ ಉಪಾಧ್ಯಕ್ಷರಾದ ಬಿ.ಟಿ.ನಾಗಣ್ಣ ಆಗ್ರಹಿಸಿದರು.
ರಾಜಾಜಿನಗರದ ಎಎಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಬಿ.ಟಿ.ನಾಗಣ್ಣ, “2011-12ರಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು ರಾಜಾಜಿನಗರದ ಇಎಸ್‌ಐ ಆಸ್ಪತ್ರೆಯೊಂದಿಗೆ ಎಂಒಯು ಮಾಡಿಕೊಂಡಿದೆ. ಆ ಪ್ರಕಾರ ಇಎಸ್‌ಐ ಆಸ್ಪತ್ರೆಯಲ್ಲಿ ವಾರ್ಷಿಕ 15 ಕೋಟಿ ರೂ. ಮೊತ್ತದ ವಹಿವಾಟು ನಡೆಯಬೇಕಿತ್ತು. ಆದರೆ ಪ್ರಚಾರದ ಕೊರತೆಯಿಂದಾಗಿ ಇತ್ತೀಚಿನ ಕೆಲವು ವರ್ಷಗಳಲ್ಲಿ ಆ ಗುರಿ ತಲುಪಲು ಇಎಸ್‌ಐಗೆ ಸಾಧ್ಯವಾಗುತ್ತಿಲ್ಲ. ಇದನ್ನೇ ನೆಪ ಮಾಡಕೊಂಡು, ಅಲ್ಲಿರುವ ಜಯದೇವ ಆಸ್ಪತ್ರೆಯ ಹೃದ್ರೋಗ ವಿಭಾಗವನ್ನು ಸ್ಥಳಾಂತರಿಸಲು ಹೊರಟಿರುವುದು ಖಂಡನೀಯ” ಎಂದು ಹೇಳಿದರು