ಬೆಳಗಾವಿ: ಸದ್ಯ ರಾಜ್ಯದಲ್ಲಿ ದಿನೇ ದಿನೇ ಸಿಸೇರಿಯನ್ ಹೆರಿಗೆಗಳು ಏರಿಕೆಯಾಗುತ್ತಿದ್ದು, ಅದನ್ನು ನಿಯಂತ್ರಿಸುವ ಸಲುವಾಗಿ ಮುಂದಿನ ತಿಂಗಳು ನೂತನ ಕಾರ್ಯಕ್ರಮ ಜಾರಿಗೊಳೊಸುತ್ತಿರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಳಗಾವಿಯ ಸುವರ್ಣಸೌಧದಲ್ಲಿ ಇಂದು (ಸೋಮವಾರ) ವಿಧಾನ ಪರಿಷತ್ ಕಲಾಪದಲ್ಲಿ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಅವರ ಪ್ರಶ್ನೆಗೆ ಉತ್ತರಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ರಾಜ್ಯದಲ್ಲಿ ಪ್ರತಿ ವರ್ಷ ಸಿಸೇರಿಯನ್ ಹೆರಿಗೆ ಪ್ರಮಾಣ ಹೆಚ್ಚಾಗುತ್ತಿದೆ. 2021-2022 ರಲ್ಲಿ 35% ಇದ್ದ ಸಿಸೇರಿಯನ್ ಪ್ರಮಾಣ, 2022-23 ಕ್ಕೆ 38%ಕ್ಕೆ ಏರಿಕೆಯಾಗಿತ್ತು. ಪ್ರಸ್ತುತ ರಾಜ್ಯದಲ್ಲಿ ಸಿಸೇರಿಯನ್ ಹೆರಿಗೆ ಪ್ರಮಾಣ 46% ಏರಿಕೆಯಾಗಿದೆ.
ಇದರಲ್ಲಿ ವಿಶೇಷವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಶೇ 61 ರಷ್ಟು ಸಿಸೇರಿಯನ್‌ಗಳನ್ನ ಮಾಡಲಾಗುತ್ತಿದೆ. ಸಿಸೇರಿಯನ್ ಮೂಲಕ ಹೆಚ್ಚು ಆದಾಯ ಬರುತ್ತದೆ ಎಂಬ ಕಾರಣಕ್ಕಾಗಿ ಖಾಸಗಿ ಆಸ್ಪತ್ರೆಗಳು ಸಿಸೇರಿಯನ್ ಹೆರಿಗೆಗಳನ್ನು ಹೆಚ್ಚು ಮಾಡುತ್ತಿದ್ದಾರೆ ಎಂದರು.
ತಾಯಿ ಮತ್ತು ಮಗುವಿನ ಆರೋಗ್ಯ ದೃಷ್ಟಿಯಿಂದ ಇದಕ್ಕೆ ಕಡಿವಾಣ ಹಾಕುವುದು ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಮಹಿಳೆಯರನ್ನ ಸಹಜ ಹೆರಿಗೆ ಮಾಡಿಸಿಕೊಳ್ಳಲು ಮಾನಸಿಕವಾಗಿ ಸಜ್ಜುಗೊಳಿಸಿಬೇಕಿದೆ. ಇದಕ್ಕಾಗಿ ನೂತನ ಕಾರ್ಯಕ್ರಮ ಜಾರಿಗೊಳಿಸುತ್ತಿರುವುದಾಗಿ ಸದನಕ್ಕೆ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದರು.<>