Publish Date: Sat, 15 Apr 2023 (10:10 IST)
Updated Date: Sat, 15 Apr 2023 (10:11 IST)
ಬೆಂಗಳೂರು : ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.
ವಿಧಾನಸಭೆ ಚುನಾವಣೆಗೆ ಅಥಣಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಸಿಗದ ಬೆನ್ನಲ್ಲೇ ಅಸಮಾಧಾನಗೊಂಡಿದ್ದ ಲಕ್ಷ್ಮಣ ಸವದಿ ವಿಧಾನ ಪರಿಷತ್ ಸ್ಥಾನಕ್ಕೆ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಈ ಬೆನ್ನಲ್ಲೇ ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಲಕ್ಷ್ಮಣ ಸವದಿ ಅವರು ಪಕ್ಷದ ಧ್ವಜ ನೀಡುವ ಮೂಲಕ ಕಾಂಗ್ರೆಸ್ಗೆ ಅಧಿಕೃತವಾಗಿ ಸೇರ್ಪಡೆಗೊಂಡರು.
ಈ ವೇಳೆ ಮಾತನಾಡಿದ ಅವರು, ನಾನು ಸೋತರೂ ನನಗೆ ಉಪಮುಖ್ಯಮಂತ್ರಿ ಸ್ಥಾನ ಕೊಟ್ಟಿದ್ದರು. ಅದನ್ನು ಮರೆತು ಈಗ ಪಕ್ಷ ಬಿಡುತ್ತಿದ್ದಾರೆ ಎಂದು ಈಗ ಬಿಜೆಪಿ ನಾಯಕರು ಒಂದು ಚರ್ಚೆ, ಟೀಕೆ ಮಾಡುತ್ತಿದ್ದಾರೆ. ಆದರೆ ಹೈಕಮಾಂಡ್ ನಾಯಕರು ಒಂದು ವಚನ ಕೊಟ್ಟಿದ್ದರು. ಅಥಣಿಯಿಂದ 2023ರ ಚುನಾವಣೆಗೆ ಟಿಕೆಟ್ ನೀಡುತ್ತೇನೆ ಎಂದಿದ್ದರು. ಆದರೆ ಯಾವುದೇ ಮಾಹಿತಿ ಇಲ್ಲದೆ ನನ್ನನ್ನು ಉಪಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಿದರು. ಯಾವುದೇ ಜವಾಬ್ದಾರಿಯನ್ನು ನೀಡಲಿಲ್ಲ ಎಂದು ಕಿಡಿಕಾರಿದರು.