ನಗರದ ಕಂಠೀರವ ಸ್ಟುಡಿಯೋ ಸುತ್ತಮುತ್ತಲ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಿರುವುದಾಗಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಂಠೀರವ ಸ್ಟುಡಿಯೋ ಸುತ್ತಮುತ್ತ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ವರನಟ ಡಾ.ರಾಜ್‍ಕುಮಾರ್ ಅವರ ಪುಣ್ಯಭೂಮಿ ಬಳಿ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರ ನೆರವೇರಿಸಿರುವುದರಿಂದ ಸಮಾ ದರ್ಶನ ಮಾಡಲು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದರು.
ಪುನೀತ್ ಅವರ ಕುಟುಂಬದ ಸದಸ್ಯರು ಸಂಪ್ರದಾಯ ಪ್ರಕಾರ ಕಾರ್ಯಗಳನ್ನು ಮಾಡಬೇಕಿದೆ. ಐದನೇ ದಿನ ಅಂದರೆ, ಮಂಗಳವಾರ ಹಾಲುತುಪ್ಪದ ಕಾರ್ಯ ಮಾಡುವುದಾಗಿ ಹೇಳಿದ್ದಾರೆ. ಇದರಿಂದ ಅಲ್ಲಿಯವರೆಗೆ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶವಿಲ್ಲ.
ಕಂಠೀರವ ಸ್ಟುಡಿಯೋ ಜಾಗ ಚಿಕ್ಕದಾಗಿರುವುದರಿಂದ ಸಾರ್ವಜನಿಕರಿಗೆ ಅವಕಾಶವಿಲ್ಲ. ಹೀಗಾಗಿ ಸಾರ್ವಜನಿಕರು ಮತ್ತು ಅಭಿಮಾನಿಗಳು ಸಹಕರಿಸಬೇಕು ಎಂದು ಮನವಿ ಮಾಡಿದರು.