Select Your Language

Notifications

webdunia
webdunia
webdunia
webdunia

ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ಅನ್ಯಾಯವಾಗಿರುವುದಕ್ಕೆ ನಾವೆಲ್ಲರೂ ಧ್ವನಿಯೆತ್ತಬೇಕು: ಸಿದ್ದರಾಮಯ್ಯ

Siddaramaiah

Krishnaveni K

ಬೆಂಗಳೂರು , ಶನಿವಾರ, 12 ಅಕ್ಟೋಬರ್ 2024 (15:58 IST)
ಬೆಂಗಳೂರು: ಕೇಂದ್ರದ ಎನ್ ಡಿಎ ಸರ್ಕಾರ ರಾಜ್ಯಕ್ಕೆ ತೆರಿಗೆ ಹಂಚಿಕೆ ವಿಚಾರದಲ್ಲಿ ಅನ್ಯಾಯ ಮಾಡಿದೆ ಎಂದು ಆಪಾದಿಸಿರುವ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರದ ಎನ್ ಡಿಎ ಸರ್ಕಾರ ಕರ್ನಾಟಕ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಮಾಡುತ್ತಾ ಬಂದಿರುವ ಅನ್ಯಾಯಕ್ಕೆ ಇತ್ತೀಚಿನ ತೆರಿಗೆ ಪಾಲಿನ ಹಂಚಿಕೆಯ ವಿವರಗಳೇ ಸಾಕ್ಷಿ.  28 ರಾಜ್ಯಗಳಿಗೆ ಒಟ್ಟು 1,78,193 ಕೋಟಿ ರೂಪಾಯಿ ಬಿಡುಗಡೆಗೊಳಿಸಿರುವ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ನೀಡಿರುವುದು ಕೇವಲ ರೂ.6,498 ಕೋಟಿ. ಈ ಅನ್ಯಾಯದ ವಿರುದ್ದ ಜಾತಿ-ಧರ್ಮ, ಪಕ್ಷ - ಪಂಥದ ಭೇದವಿಲ್ಲದೆ ದನಿ ಎತ್ತುವ ಶಪಥವನ್ನು ಪ್ರತಿಯೊಬ್ಬ ಕನ್ನಡಿಗನು ಮಾಡಬೇಕಾಗಿದೆ. ಇಂತಹದ್ದೊಂದು ಪ್ರಮಾಣ ವಚನ ಸ್ವೀಕಾರಕ್ಕೆ ಅನ್ಯಾಯದ ವಿರುದ್ಧ ನ್ಯಾಯದ ಗೆಲುವಿನ ಸಂಕೇತವಾದ ವಿಜಯದಶಮಿಯ ಶುಭ ದಿನ ಸಾಕ್ಷಿಯಾಗಲಿ.

ಕರ್ನಾಟಕವನ್ನು ಕಡೆಗಣಿಸುವಂತಹ ಅನ್ಯಾಯವನ್ನು ನಾವೇನು ಮಾಡಿದ್ದೇವೆ? ಎಂದು ಪ್ರತಿಯೊಬ್ಬ ಸ್ವಾಭಿಮಾನಿ ಕನ್ನಡಿಗನು ಕೇಂದ್ರ ಸರ್ಕಾರವನ್ನು ಕೇಳಬೇಕಾಗಿದೆ. ಬಿಮಾರು ರಾಜ್ಯಗಳೆಂದೇ ಕುಖ್ಯಾತಿ ಪಡೆದಿರುವ ರಾಜ್ಯಗಳಾದ ಉತ್ತರಪ್ರದೇಶಕ್ಕೆ ರೂ.31,962 ಕೋಟಿ, ಬಿಹಾರಕ್ಕೆ ರೂ.17,921 ಕೋಟಿ, ಮಧ್ಯಪ್ರದೇಶಕ್ಕೆ ರೂ.13,987 ಕೋಟಿ ಮತ್ತು ರಾಜಸ್ತಾನಕ್ಕೆ ರೂ.10,737 ಕೋಟಿಯಷ್ಟು ತೆರಿಗೆ ಪಾಲನ್ನು ನೀಡಲಾಗಿದೆ.

ದುರಾಡಳಿತ ಮತ್ತು ಭ್ರಷ್ಟಾಚಾರದಿಂದಾಗಿ ಅಭಿವೃದ್ದಿ ಪಥದಲ್ಲಿ ಹಿಮ್ಮುಖವಾಗಿ ಸಾಗುತ್ತಿರುವ ಈ ರಾಜ್ಯಗಳಿಗಾಗಿ ಕನ್ನಡಿಗನ ಬೆವರ ಗಳಿಕೆ ಯಾಕೆ ಪೋಲಾಗಬೇಕು ಎನ್ನುವುದು ನಮ್ಮ ಪ್ರಶ್ನೆಯಾಗಿದೆ?

ರಾಜ್ಯಗಳಿಂದ ಸಂಗ್ರಹಿಸುವ ತೆರಿಗೆ ಹಣದಲ್ಲಿ ಉತ್ತರಪ್ರದೇಶಕ್ಕೆ ಶೇ.17.93, ಬಿಹಾರಕ್ಕೆ 10.05, ರಾಜಸ್ತಾನಕ್ಕೆ 6.02 ಮತ್ತು ಮಧ್ಯಪ್ರದೇಶಕ್ಕೆ 7.85ರಷ್ಟು ಪಾಲು ನೀಡಿದರೆ, ಕರ್ನಾಟಕಕ್ಕೆ ನೀಡುತ್ತಿರುವ ತೆರಿಗೆ ಪಾಲು ಕೇವಲ ಶೇ.3.64 ಮಾತ್ರ. ತೆರಿಗೆ ಹಂಚಿಕೆಗಾಗಿ ನಿಗದಿ ಪಡಿಸಲಾಗಿರುವ ಮಾನದಂಡದಲ್ಲಿಯೇ ಕೇಂದ್ರ ಸರ್ಕಾರದ ಪ್ರಗತಿ ವಿರೋಧಿ ಧೋರಣೆ ಸ್ಪಷ್ಟವಾಗಿದೆ.  ಅಭಿವೃದ್ಧಿಶೀಲ ರಾಜ್ಯವನ್ನು ಶಿಕ್ಷಿಸಿ, ದುರಾಡಳಿತ ನಡೆಸುತ್ತಿರುವ ರಾಜ್ಯಗಳನ್ನು ಪುರಸ್ಕರಿಸುವ ತೆರಿಗೆ ಹಂಚಿಕೆ ಮಾನದಂಡವನ್ನೇ ಬದಲಾಯಿಸಬೇಕೆಂದು ನಾವು ಒತ್ತಾಯಿಸುತ್ತಲೇ ಬಂದಿದ್ದರೂ ಕೇಂದ್ರ ಸರ್ಕಾರ ಕಿವುಡಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹದಿನಾಲ್ಕನೇ ಹಣಕಾಸು ಆಯೋಗ ಕರ್ನಾಟಕದ ತೆರಿಗೆ ಪಾಲು ಶೇ 4.713 ಎಂದು ನಿಗದಿಪಡಿಸಿತ್ತು, ಈಗಿನ 15ನೇ ಹಣಕಾಸು ಆಯೋಗ ಈ ಪಾಲನ್ನು ಕಡಿಮೆಗೊಳಿಸಿ ಶೇ 3.647ಕ್ಕೆ ಇಳಿಸಿತು. ಇದರಿಂದ 2021-26 ರವರೆಗಿನ ಐದು ವರ್ಷಗಳಲ್ಲಿ ತೆರಿಗೆ ಪಾಲಿನಲ್ಲಿ ಅಂದಾಜು ರೂ ₹62,275 ಕೋಟಿಯನ್ನು ಕರ್ನಾಟಕ ಕಳೆದುಕೊಂಡಿದೆ. ಈ ಅನ್ಯಾಯವನ್ನು ಪರಿಗಣಿಸಿದ್ದ ಹಣಕಾಸು ಆಯೋಗ ವಿಶೇಷ ಅನುದಾನದ ರೂಪದಲ್ಲಿ ರೂ.5,495 ಕೋಟಿ ನೀಡುವಂತೆ ಶಿಫಾರಸು ಮಾಡಿತ್ತು. ಇದನ್ನು ಕೂಡಾ ಕೇಂದ್ರ ಸರ್ಕಾರ ನೀಡದೆ ಅನ್ಯಾಯ ಎಸಗಿದೆ. ಈ ಎಲ್ಲ ನಷ್ಟಗಳನ್ನು ಸೇರಿಸಿದರೆ 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಕರ್ನಾಟಕ ರಾಜ್ಯಕ್ಕೆ ರೂ.79,770 ಕೋಟಿ ರೂಪಾಯಿಗಳಷ್ಟು ನಷ್ಟವಾಗಿದೆ ಎಂದು ಲೆಕ್ಕ ಕೊಟ್ಟಿದ್ದಾರೆ.

ದೇಶದ ಜನಸಂಖ್ಯೆಯಲ್ಲಿ ಕರ್ನಾಟಕದ ಪಾಲು ಕೇವಲ ಶೇಕಡಾ 5ರಷ್ಟಿದ್ದರೂ ದೇಶದ ಜಿಡಿಪಿಗೆ ಕರ್ನಾಟಕದ ಶೇಕಡಾ 8.4ರಷ್ಟು ಕೊಡುಗೆ ನೀಡುತ್ತಿದೆ. ಜಿಎಸ್‌ಟಿ ಸಂಗ್ರಹದಲ್ಲಿ ಸತತವಾಗಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಇನ್ನು ಜಿಎಸ್‌ಟಿ ಸಂಗ್ರಹದ ಬೆಳೆವಣಿಗೆ ದರವನ್ನು ಗಮನಿಸಿದರೆ ಶೇ.17ರ ಸಾಧನೆಯ ಮೂಲಕ ದೇಶದಲ್ಲೇ ಮೊದಲ ಸ್ಥಾನದಲ್ಲಿ ಕರ್ನಾಟಕವಿದೆ. ವಿಪರ್ಯಾಸವೆಂದರೆ ಈ ಪ್ರಮಾಣದಲ್ಲಿ ಜಿಎಸ್‌ಟಿ ಹಣವನ್ನು ಕೇಂದ್ರಕ್ಕೆ ಸಂಗ್ರಹಿಸಿ ನೀಡಿದರೂ ಇದರಿಂದ ರಾಜ್ಯಕ್ಕೆ ಮರಳಿ ದೊರೆಯುತ್ತಿರುವುದು ಶೇ.52 ಪಾಲು ಮಾತ್ರ. ಜಿಎಸ್‌ಟಿಯ ಅವೈಜ್ಞಾನಿಕ ಅನುಷ್ಠಾನದಿಂದಾಗಿ ಕರ್ನಾಟಕವು 2017-18ರಿಂದ 2023-24ರ ವರೆಗೆ ಸುಮಾರು ರೂ. 59,274 ಕೋಟಿ ಹಣವನ್ನು ಕಳೆದುಕೊಂಡಿದೆ.

ದೇಶದ ಒಟ್ಟು ತೆರಿಗೆ ಸಂಗ್ರಹಕ್ಕೆ ಕರ್ನಾಟಕ ರೂ.4 ಲಕ್ಷ ಕೋಟಿ ರೂಪಾಯಿಗಳನ್ನು ನೀಡುತ್ತಿದ್ದರೂ ತೆರಿಗೆ ಹಂಚಿಕೆ ರೂಪದಲ್ಲಿ ನಮಗೆ ಸಿಗುತ್ತಿರುವ ಪಾಲು ರೂ.45,000 ಕೋಟಿ ಮಾತ್ರ. ಇದರ ಜೊತೆಗೆ ಅನುದಾನದ ರೂಪದಲ್ಲಿ ಅಂದಾಜು ₹15,000 ಕೋಟಿ ಸೇರಿರುತ್ತದೆ. ಇವೆಲ್ಲ ಕೂಡಿದರೆ ಕರ್ನಾಟಕ ಕೇಂದ್ರ ಸರ್ಕಾರಕ್ಕೆ ನೀಡುತ್ತಿರುವ ಪ್ರತಿಯೊಂದು ರೂಪಾಯಿಗೆ ಹಿಂದಿರುಗಿ ಬರುತ್ತಿರುವುದು ಕೇವಲ 15 ಪೈಸೆ ಮಾತ್ರ. ಈ ಅನ್ಯಾಯವನ್ನು ಎಷ್ಟು ದಿನ ಸಹಿಸಿಕೊಂಡಿರಲು ಸಾಧ್ಯ?

ಕಳೆದ ಎಂಟು ವರ್ಷಗಳ ಅವಧಿಯಲ್ಲಿ ಕೇಂದ್ರ ಸರ್ಕಾರದ ಬಜೆಟ್‌ ದುಪ್ಪಟ್ಟಿಗಿಂತಲೂ ಹೆಚ್ಚಾಗಿದೆ. 2018-19ರಲ್ಲಿ ಕೇಂದ್ರ ಬಜೆಟ್‌ ಗಾತ್ರ ರೂ. ₹24,42,213 ಕೋಟಿ ಇತ್ತು. ಆಗ ಕೇಂದ್ರದಿಂದ ರಾಜ್ಯಕ್ಕೆ ದೊರೆಯುತ್ತಿದ್ದ ತೆರಿಗೆ ಪಾಲು ರೂ.35,895 ಕೋಟಿ ಹಾಗೂ ರೂ.16,082 ಕೋಟಿ ಸೇರಿ ಒಟ್ಟು ರೂ.46,288 ಕೋಟಿ ಲಭ್ಯವಾಗಿತ್ತು. 2024-25ರಲ್ಲಿ ಕೇಂದ್ರದ ಬಜೆಟ್‌ ಗಾತ್ರ ರೂ.48,20,514 ಕೋಟಿಗೆ ಏರಿಕೆಯಾಗಿದೆ. ಆದರೆ 2024-25ರ ಸಾಲಿನಲ್ಲಿ ಕರ್ನಾಟಕಕ್ಕೆ ನಿಗದಿ ಪಡಿಸಿರುವ ತೆರಿಗೆ ಪಾಲು ರೂ.44,485 ಕೋಟಿ. ಅಂದಾಜು ಅನುದಾನ ರೂ.15,299 ಕೋಟಿ. ಈ ರೀತಿ ತೆರಿಗೆ ಪಾಲು ಮತ್ತು ಅನುದಾನಗಳೆರಡೂ ಸೇರಿ ಕೇಂದ್ರದಿಂದ ರಾಜ್ಯಕ್ಕೆ ಸಿಗಲಿರುವ ಒಟ್ಟು ಹಣ ರೂ,59,784 ಕೋಟಿ ಮಾತ್ರ.
ಅಂದರೆ ಕಳೆದ 8 ವರ್ಷಗಳ ಅವಧಿಯಲ್ಲಿ ಬಜೆಟ್ ಗಾತ್ರ ದುಪ್ಪಟ್ಟಿಗಿಂತ ಹೆಚ್ಚಾದರೂ ಕರ್ನಾಟಕಕ್ಕೆ ಸಿಗುವ ಕೇಂದ್ರದ ತೆರಿಗೆ ಪಾಲಿನಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂದಿದ್ದಾರೆ.
ಪ್ರಸಕ್ತ ಬಜೆಟ್‌ ಗಾತ್ರದ ಹೋಲಿಕೆಯಲ್ಲಿ ಕರ್ನಾಟಕಕ್ಕೆ ವಾರ್ಷಿಕ ಕನಿಷ್ಠ ರೂ.1 ಲಕ್ಷ ಕೋಟಿಯಷ್ಟು ಹಣ ತೆರಿಗೆಯ ಪಾಲು ಹಾಗೂ ಅನುದಾನದ ಮುಖೇನ ದೊರೆಯಬೇಕಿತ್ತು, ಆದರೆ ದೊರೆತಿಲ್ಲ.

ಕರ್ನಾಟಕಕ್ಕೆ ಈ ಪರಿಯ ದೊಡ್ಡ ಮಟ್ಟದ ಅನ್ಯಾಯ ಆಗಿರುವುದು ಮನವರಿಕೆಯಾದ ನಂತರವೇ ಹದಿನೈದನೇ ಹಣಕಾಸು ಆಯೋಗ ಕರ್ನಾಟಕಕ್ಕೆ ವಿಶೇಷ ಅನುದಾನದ ರೂಪದಲ್ಲಿ ₹5,495 ಕೋಟಿ ನೀಡಬೇಕೆಂದು ಶಿಫಾರಸು ಮಾಡಿತ್ತು. ಕನ್ನಡಿಗರ ಜನಪ್ರತಿನಿಧಿಯಾಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೇ ಈ ಶಿಫಾರಸನ್ನು ನಿರಾಕರಿಸಿರುವ ಕಾರಣ ಆ ದುಡ್ಡು ಕೂಡಾ ಬರಲಿಲ್ಲ ಎಂದು ಸಿದ್ದರಾಮಯ್ಯ ದೂರಿದ್ದಾರೆ.

ಇದಲ್ಲದೆ, ಹದಿನೈದನೇ ಹಣಕಾಸು ಆಯೋಗವು ಬೆಂಗಳೂರಿನ ಫೆರಿಫೆರಲ್‌ ರಿಂಗ್‌ ರಸ್ತೆಗೆ ರೂ.3,000 ಕೋಟಿ ಮತ್ತು ಕೆರೆಗಳು ಸೇರಿದಂತೆ ಬೆಂಗಳೂರು ಜಲಮೂಲ ಅಭಿವೃದ್ಧಿಗೆ ರೂ. 3000 ನೀಡಲು ಶಿಫಾರಸ್ಸು ಮಾಡಿತ್ತು. ಆದರೆ, ಈ ಶಿಫಾರಸ್ಸುಗಳನ್ನು ತಿರಸ್ಕರಿಸಿದ ವಿತ್ತ ಸಚಿವರು ರಾಜ್ಯಕ್ಕೆ ಸುಮಾರು ರೂ.11,495 ಕೋಟಿ ದ್ರೋಹ ಮಾಡಿದ್ದಾರೆ. 

ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂ ಎರಡು ಚಕ್ರಗಳಂತೆ. ಈ ಎರಡೂ ಚಕ್ರಗಳೂ ಸಮಾನವಾಗಿ, ಸುಗಮವಾಗಿ ತಿರುಗಿದಾದ ಮಾತ್ರವೇ ದೇಶವು ನಾಗಾಲೋಟದಿಂದ ಪ್ರಗತಿಯ ಪಥದಲ್ಲಿ ಮುನ್ನಡೆಯಲು ಸಾಧ್ಯ. ವಿಪರ್ಯಾಸವೆಂದರೆ, ಇತ್ತೀಚಿನ ವರ್ಷಗಳಲ್ಲಿ ಸಂಪನ್ಮೂಲ ಹಂಚಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರದ ತಾರತಮ್ಯ ಧೋರಣೆಯು ಕರ್ನಾಟಕವೂ ಸೇರಿದಂತೆ ಭಾರತದ ದಕ್ಷಿಣದ ರಾಜ್ಯಗಳನ್ನು ನಿರಂತರವಾಗಿ ಅನ್ಯಾಯದ ಶೂಲಕ್ಕೆ ಕೊರಳೊಡ್ಡುವಂತೆ ಮಾಡಿದೆ ಎಂದು ಸಿಎಂ ಹೇಳಿದ್ದಾರೆ.

ದೇಶವು ಇಂದು ಐದು ಟ್ರಿಲಿಯನ್‌ ಅರ್ಥ ವ್ಯವಸ್ಥೆಯಾಗುವ ಕನಸನ್ನು ಕಾಣುತ್ತಿದೆ ಎಂದರೆ ಅದರ ಹಿಂದೆ ದೇಶದ ಪ್ರಗತಿಗೆ ಅನನ್ಯವಾದ ಕೊಡುಗೆಯನ್ನು ನೀಡುತ್ತಿರುವ, ದೇಶದ ಸಂಪತ್ತಿಗೆ ಅಗಾಧವಾದ ಸಂಪನ್ಮೂಲವನ್ನು ಒದಗಿಸುತ್ತಿರುವ ಕರ್ನಾಟಕದ ಸಹಿತ ದಕ್ಷಿಣ ಭಾರತದ ರಾಜ್ಯಗಳ ವಿಶೇಷ ಕೊಡುಗೆಯಿದೆ ಎನ್ನುವುದನ್ನು ಮರೆಯಬಾರದಲ್ಲವೇ?

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಮೊದಲು ಯೋಜನಾ ಆಯೋಗವನ್ನು ರದ್ದುಗೊಳಿಸಿ ರಾಜ್ಯ ಸರ್ಕಾರಗಳಿಗೆ ದನಿಯೇ ಇಲ್ಲದ ರೀತಿಯಲ್ಲಿ ನೀತಿ ಆಯೋಗವನ್ನು ರಚಿಸಲಾಯಿತು. ಅದರ ಬೆನ್ನಲ್ಲಿಯೇ ಹದಿನೈದನೇ ಹಣಕಾಸು ಆಯೋಗವನ್ನು ರಚಿಸಿ ಅದರ ಕಾರ್ಯೋದ್ದೇಶಗಳನ್ನು ನಿಗದಿಗೊಳಿಸುವ ಮಾರ್ಗಸೂಚಿ ಅಂಶಗಳಲ್ಲಿ ಬದಲಾವಣೆ ಮಾಡಲಾಯಿತು. ಈ ಬದಲಾವಣೆಗಳು ಸಹಜವಾಗಿ ಕರ್ನಾಟಕವೂ ಸೇರಿದಂತೆ ಅಭಿವೃದ್ಧಿಯ ಪಥದಲ್ಲಿರುವ ದಕ್ಷಿಣದ ರಾಜ್ಯಗಳಿಗೆ ಘೋರ ಅನ್ಯಾಯ ಮಾಡಿದೆ ಎಂದು ಆಪಾದಿಸಿದ್ದಾರೆ.

ಕರ್ನಾಟಕದಿಂದ ಕ್ರೋಢೀಕರಿಸಲ್ಪಟ್ಟ ತೆರಿಗೆ ಕನ್ನಡಿಗರ ಕಷ್ಟನಷ್ಟಗಳಿಗೆ ಒದಗದೆ ಹೋದರೆ, ಕನ್ನಡಿಗರ ಕಣ್ಣೀರು ಒರೆಸಲು ಬಳಕೆಯಾಗದೆ ಹೋದರೆ ಅಂತಹ ತೆರಿಗೆಯನ್ನು ಸಂಗ್ರಹಿಸಿ ಏನು ಪ್ರಯೋಜನ? ದೇಶದ ಅಭಿವೃದ್ದಿಗೆ ವರ್ಷಂಪ್ರತಿ ಲಕ್ಷೋಪಲಕ್ಷ ಕೋಟಿ ರೂಪಾಯಿ ಹಣವನ್ನು ತೆರಿಗೆಯಾಗಿ ನೀಡಿದ ನಂತರವೂ ಅಪರೂಪಕ್ಕೊಮ್ಮೆ ಬರುವಂತಹ ಅತಿವೃಷ್ಟಿ, ಅನಾವೃಷ್ಟಿಗಳ ಸಂದರ್ಭದಲ್ಲಿ ಕೆಲ ಸಾವಿರ ಕೋಟಿ ರೂ. ಹಣವನ್ನು ಕೇಂದ್ರ ನಮ್ಮವರ ಕಣ್ಣೀರು ಒರೆಸಲು ನೀಡದೆ ಹೋದರೆ ಒಕ್ಕೂಟ ವ್ಯವಸ್ಥೆಗೆ ಅರ್ಥವಿದೆಯೇ? ಈ ಪ್ರಶ್ನೆಗಳು ಇಂದು ನಮ್ಮ ಮುಂದಿವೆ ಎಂದಿದ್ದಾರೆ.

ಕರ್ನಾಟಕವು ಒಕ್ಕೂಟ ವ್ಯವಸ್ಥೆಯೆಡೆಗೆ ತನಗಿರುವ ಎಲ್ಲ ಗೌರವವನ್ನು ಉಳಿಸಿಕೊಂಡೇ, ತನ್ನ ನ್ಯಾಯಯುತ ಪಾಲನ್ನು ಪಡೆಯಲು ಹೇಗೆ ಮುಂದುವರೆಯಬೇಕು ಎನ್ನುವ ಚರ್ಚೆಗಳು ಮುಂದಿನ ದಿನಗಳಲ್ಲಿ ಸಾರ್ವಜನಿಕವಾಗಿ ನಡೆಯಬೇಕಿದೆ. ಇಂತಹ ಒಂದು ರಚನಾತ್ಮಕ ಚರ್ಚೆ ವಿಜಯದಶಮಿಯ ಶುಭದಿನದಿಂದಲೇ ಶುರುವಾಗಲಿ ಎನ್ನುವುದು ನನ್ನ ಹಾರೈಕೆ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ವಾರದೊಳಗೆ ಚನ್ನಪಟ್ಟಣ ಅಭ್ಯರ್ಥಿ ಹೆಸರು ಫೈನಲ್: ಕುಮಾರಸ್ವಾಮಿ