Select Your Language

Notifications

webdunia
webdunia
webdunia
webdunia

ನನಗೇ ಅಧಿಕಾರ ಇದ್ದಿದ್ದರೆ ಮೆಟ್ರೋಗೆ ಬಸವಣ್ಣನ ಹೆಸರಿಡುತ್ತಿದ್ದೆ: ಸಿದ್ದರಾಮಯ್ಯ

Siddaramaiah

Krishnaveni K

ಬೆಂಗಳೂರು , ಭಾನುವಾರ, 5 ಅಕ್ಟೋಬರ್ 2025 (16:48 IST)
ಬೆಂಗಳೂರು: ನಮ್ಮ ಮೆಟ್ರೋ ಸಂಪೂರ್ಣವಾಗಿ ರಾಜ್ಯದ್ದೇ ಆಗಿದ್ದರೆ ಬಸವಣ್ಣನ ಹೆಸರಿಡುತ್ತಿದ್ದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಶ್ವಗುರು ಬಸವಣ್ಣ ಅವರನ್ನು "ಕರ್ನಾಟಕ ಸಾಂಸ್ಕೃತಿಕ ನಾಯಕ" ಎಂದು ಘೋಷಿಸಿದ ವರ್ಷಾಚರಣೆ ಸಂದರ್ಭದಲ್ಲಿ ಆಯೋಜಿಸಲಾಗಿದ್ದ 'ಬಸವ ಸಂಸ್ಕೃತಿ ಅಭಿಯಾನ-2025' ರ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು ನಮ್ಮ ಮೆಟ್ರೋ ಬದಲು ಬಸವ ಮೆಟ್ರೋ ಎಂದು ಹೆಸರಿಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುತ್ತೇನೆ ಎಂದಿದ್ದಾರೆ.

‘ನಮ್ಮ ಮೆಟ್ರೋಗೆ "ಬಸವ ಮೆಟ್ರೋ" ಎಂದು ನಾಮಕರಣ ಮಾಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇನೆ. ಇದು ಪೂರ್ಣವಾಗಿ ರಾಜ್ಯ ಸರ್ಕಾರದ ಯೋಜನೆ ಆಗಿದ್ದರೆ ಇವತ್ತೇ "ಬಸವ ಮೆಟ್ರೋ" ಎಂದು ಘೋಷಿಸಿ ಬಿಡುತ್ತಿದ್ದೆ.

ನಮ್ಮಲ್ಲಿ ಅನೇಕ ಜಾತಿ, ಅನೇಕ‌ ಧರ್ಮಗಳಿವೆ. ಚಾತುವರ್ಣ ವ್ಯವಸ್ಥೆಯಲ್ಲಿ ನಾಲ್ಕನೇ ಸ್ಥಾನದಲ್ಲಿ ಇರುವವರು ನಾವು. ಶೂದ್ರರು ಜಾತಿ ಯಾವುದೇ ಆದರೂ ನಾವೆಲ್ಲರೂ ಒಂದೇ ಎನ್ನುವುದನ್ನು ಅರಿಯಬೇಕು.

ನಾನು ಬಸವಣ್ಣನವರ ಅಭಿಮಾನಿ. ಬಸವ ತತ್ವದಲ್ಲಿ‌ ನಂಬಿಕೆ - ಬದ್ಧತೆ ಇಟ್ಟುಕೊಂಡಿದ್ದೇನೆ. ಅಂದಿಗಲ್ಲ-ಇಂದಿಗಲ್ಲ-ಮುಂದೆ ಎಂದೆಂದಿಗೂ ಬಸವ ತತ್ವ ಶಾಶ್ವತ ಮತ್ತು ಪ್ರಸ್ತುತ ಎನ್ನುವುದು ನನ್ನ ನಂಬಿಕೆ. ಸಹಬಾಳ್ವೆ ಮತ್ತು ಸಹಿಷ್ಣತೆಯನ್ನು ಬಸವಣ್ಣನವರು ಬದುಕಿನುದ್ದಕ್ಕೂ ಸಾರಿದರು. ನಾನೂ ಇದನ್ನು ಪಾಲಿಸುತ್ತೇನೆ.

ಬಸವ ಜಯಂತಿಯ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಾನು ಅದೇ ದಿನ ಎಲ್ಲರಿಗೂ ಬದುಕುವ ಸಮಾನ ಅವಕಾಶಗಳನ್ನು ಕಲ್ಪಿಸುವ ಬಸವಣ್ಣನವರ ಆಶಯಗಳನ್ನು ಈಡೇರಿಸುವ ತೀರ್ಮಾನ ಮಾಡಿ, ಹತ್ತು ಹಲವು ಭಾಗ್ಯಗಳ, ಗ್ಯಾರಂಟಿಗಳ ಮೂಲಕ ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ ಬದುಕಿಗೆ ಅವಕಾಶಗಳನ್ನು ಕಲ್ಪಿಸಿದೆ. ಎಲ್ಲಾ ಸರ್ಕಾರಿ ಕಚೇರಿಗಳಲ್ಲೂ ಬಸವಣ್ಣನವರ ಭಾವಚಿತ್ರ ಇಡುವುದನ್ನು ಕಡ್ಡಾಯ ಮಾಡಿದ್ದು ಇದೇ ಕಾರಣಕ್ಕೆ.
ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವ ಮೂಲಕ ಇಡೀ ಸರ್ಕಾರ ಬಸವಣ್ಣನವರಿಗೆ ಗೌರವ ಸೂಚಿಸಿದೆ.

ನಾನು ಕಾನೂನು ವಿದ್ಯಾರ್ಥಿ ಆದ ಗಳಿಗೆಯಿಂದ ಬಸವಣ್ಣನವರ ಅನುಯಾಯಿ. ಅಂಬೇಡ್ಕರ್ ಅವರೂ ತಮ್ಮ ಸಂವಿಧಾನದಲ್ಲಿ ಬಸವಣ್ಣನವರ ಆಶಯಗಳನ್ನೇ ಹೇಳಿದ್ದಾರೆ. ಹೀಗಾಗಿ ಸಂವಿಧಾನ ಮತ್ತು ಶರಣ ಸಂಸ್ಕೃತಿ ಒಂದೇ ಆಗಿದೆ. ನಮ್ಮ ಸರ್ಕಾರ ಸಂವಿಧಾನದ ಪೀಠಿಕೆ ಓದಿಸುವುದನ್ನು ಅಭಿಯಾನದ ರೀತಿ ನಡೆಸುತ್ತಿದೆ.

ಸ್ವಾತಂತ್ರ್ಯ, ಸಮಾನತೆ, ಬ್ರಾತೃತ್ವ ಸಂವಿಧಾನದ ಆಶಯವಾದರೆ ಬಸವಣ್ಣನವರೂ ಜಾತಿ ರಹಿತ, ವರ್ಗ ರಹಿತ ಬ್ರಾತೃತ್ವದ ಸಮಾಜ ನಿರ್ಮಾಣಕ್ಕೆ ಮುಂದಾಗಿದ್ದರು. ಹೀಗಾಗಿ ಬಸವಣ್ಣನವರು ಯಾವತ್ತಿಗೂ ಪ್ರಸ್ತುತ.

ಬಸವಣ್ಣನವರು ನುಡಿದಂತೆ ನಡೆದರು. ನಾವು ಬಸವ ಅನುಯಾಯಿಗಳೂ ನುಡಿದಂತೆ ನಡೆದಾಗ ಮಾತ್ರ ನಿಜವಾದ ಬಸವ ಅನುಯಾಯಿ ಆಗುತ್ತೇವೆ. ವಚನ ವಿಶ್ವವಿದ್ಯಾಲಯ ಸ್ಥಾಪಿಸುವ ಬೇಡಿಕೆ ಬಗ್ಗೆ ಸರ್ಕಾರದ ಒಪ್ಪಿಗೆ ಇದ್ದು, ಮುಂದಿನ ವರ್ಷ ವಚನ ವಿವಿ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು’ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನವರಿಗೆ ಕುರಿ, ಕೋಳಿ ಎಂದೆಲ್ಲಾ ಪ್ರಶ್ನೆ ಕೇಳಬೇಡಿ: ಡಿಕೆ ಶಿವಕುಮಾರ್ ಖಡಕ್ ಸೂಚನೆ