ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗವು (ಕೆಪಿಎಸ್ ಸಿ) 384 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಭರ್ತಿಗೆ ಕಳೆದ ಆಗಸ್ಟ್ 27 ರಲ್ಲಿ ನಡೆದ ಪರೀಕ್ಷೆಯಲ್ಲಿ ಅಕ್ರಮ ಕಂಡುಬಂದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಮರು ಪರೀಕ್ಷೆಗೆ ಆದೇಶಿಸಿದೆ. ಈ ಬಗ್ಗೆ ಈಗ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದು ಎಂದು ಈ ನಿರ್ಧಾರಕ್ಕೆ ಬಂದಿದ್ದೇವೆ ಎಂದಿದ್ದಾರೆ. ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದೇನೆ.
ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯನ್ನು ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ನಾವು ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ನಂಬಿಕಾರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ ಎಂದಿದ್ದಾರೆ.
ಇನ್ನು, ಸರ್ಕಾರ ಮರು ಪರೀಕ್ಷೆಗೆ ಆದೇಶಿಸಿದ ಬೆನ್ನಲ್ಲೇ ವಿಪಕ್ಷ ಬಿಜೆಪಿ ಕೂಡಾ ವ್ಯಂಗ್ಯ ಮಾಡಿದೆ. ಈ ಬಗ್ಗೆ ಪ್ರತಿಕ್ರಯಿಸಿರುವ ವಿಜಯೇಂದ್ರ, ಪರೀಕ್ಷಾರ್ಥಿಗಳು ಪ್ರತಿಭಟನೆ ನಡೆಸಿದಾಗ ದಂಡ ಪ್ರಯೋಗ ಮಾಡಿದ್ದ ಸರ್ಕಾರ ಈಗ ಹಠಕ್ಕೆ ಬಿದ್ದಂತೆ ಮರು ಪರೀಕ್ಷೆಗೆ ಆದೇಶಿಸಿದೆ. ಮೊದಲೇ ಈ ನಿರ್ಧಾರ ಮಾಡಿದ್ದರೆ ವಿದ್ಯಾರ್ಥಿಗಳು ಕಷ್ಟಪಡುವುದು ತಪ್ಪುತ್ತಿತ್ತು ಎಂದಿದೆ.