ಚಿತ್ರದುರ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಊಟ ತಿಂಡಿ ಮಾಡಿಕೊಂಡೇ ಎರಡೂವರೆ ವರ್ಷ ಕಳೆದಿದ್ದಾರೆ ಎಂದು ಮಾಜಿ ಸಚಿವ ಶ್ರೀರಾಮುಲು ವ್ಯಂಗ್ಯವಾಡಿದ್ದಾರೆ.
ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಸುಳ್ಳು ಹೇಳಿಕೊಂಡು ಅಧಿಕಾರಕ್ಕೆ ಬಂದ ಸರ್ಕಾರದಿಂದ ಜನರಿಗೆ ಅನ್ಯಾಯವಾಗಿದೆ. 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಹಾರ ಚುನಾವಣೆಯ ಫಲಿತಾಂಶ ರಾಜ್ಯದಲ್ಲಿ ಬರಲಿದೆ. ಬಿಹಾರಕ್ಕಿಂತ ದೊಡ್ಡಮಟ್ಟದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಹೇಳಿದರು.
ಸಿದ್ದರಾಮಯ್ಯ ಅವರು ಡಿಕೆಶಿ ಮೇಲೆ ಡಿಕೆಶಿಯವರು ಸಿದ್ದರಾಮಯ್ಯ ಅವರ ಮೇಲೆ ಯಾವತ್ತು ಬಾಂಬ್ ಹಾಕುತ್ತಾರೋ ಗೊತ್ತಿಲ್ಲ. ಸದ್ಯಕ್ಕಂತೂ ಕದನ ವಿರಾಮ ಘೋಷಣೆಯಾಗಿದೆ. ಅಧಿಕಾರಕ್ಕಾಗಿ ಕಚ್ಚಾಡುತ್ತಿರುವ ಕಾಂಗ್ರೆಸ್ ನಾಯಕರು ರಾಜ್ಯವನ್ನು ಮರೆತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಠೇವಣಿ ಕಳೆದುಕೊಳ್ಳಲಿದೆ ಎಂದರು.
ಬಿ.ವೈ. ವಿಜಯೇಂದ್ರ ಅವರು ಬಿಜೆಪಿಯ ಉಸ್ತುವಾರಿ ವಹಿಸಿಕೊಂಡ ನಂತರ ಕಾರ್ಯಕರ್ತರು ಚುರುಕಿನಿಂದ ಕೆಲಸ ಮಾಡುತ್ತಿದ್ದಾರೆ. ಮುಂದೆಯೂ ಅವರೇ ರಾಜ್ಯಘಟಕದ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದರು.
ಕಾಂಗ್ರೆಸ್ ಮುಖಂಡರಲ್ಲಿ ಅಧಿಕಾರಕ್ಕಾಗಿ ಕಿತ್ತಾಟ ಉಂಟಾಗಿದ್ದು ಸಾರ್ವಜನಿಕರ ಹಿತ ಕಾಯುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ, ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಅವರು ಆರೋಪಿಸಿದರು.