Publish Date: Mon, 02 Jun 2025 (18:27 IST)
Updated Date: Mon, 02 Jun 2025 (18:30 IST)
ಕುಷ್ಟಗಿ (ಕೊಪ್ಪಳ ಜಿಲ್ಲೆ): ರಾಜ್ಯ ಸರ್ಕಾರ ಕರಾವಳಿ ಭಾಗದಲ್ಲಿ ಶಾಂತಿ, ಸುವ್ಯವಸ್ಥೆ ಪರಿಸ್ಥಿತಿ ನಿಭಾಯಿಸುವಲ್ಲಿ ವಿಫಲವಾಗಿದ್ದು, ಪೊಲೀಸರ ಮೂಲಕವೇ ಸರ್ಕಾರವೇ ಗಲಭೆಗೆ ಪ್ರಚೋದನೆ ನೀಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪಿಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರಾವಳಿ ಭಾಗದಲ್ಲಿ ಇತ್ತೀಚೆಗೆ ನಡೆದ ಕೆಲ ಘಟನೆಗಳಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹಾಗೂ ಒಬ್ಬ ಮುಸಲ್ಮಾನನ ಹತ್ಯೆಯೂ ಆಗಿದೆ.
ರಾಜ್ಯ ಸರ್ಕಾರ ಪರಿಸ್ಥಿತಿಯನ್ನು ಸಮರ್ಪಕ ರೀತಿಯಲ್ಲಿ ನಿಭಾಯಿಸಿಲ್ಲ. ಆದರೆ ಕಾನೂನು ಸುವ್ಯವಸ್ಥೆ ಕಾಪಾಡುತ್ತೇವೆ ಎಂಬ ನೆಪ ಒಡ್ಡಿ ಪೊಲೀಸರ ಮೇಲೆ ಒತ್ತಡ ಹೇರಿ ಮಧ್ಯರಾತ್ರಿ ವೇಳೆ ಅಮಾಯಕ ಹಿಂದೂ ಕಾರ್ಯಕರ್ತರ ಮನೆ ಬಾಗಿಲು ತಟ್ಟಿ ವಿಚಾರಣೆಗೆ ಒಳಪಡಿಸುತ್ತಿರುವುದನ್ನು ನೋಡಿದರೆ ಕಾಂಗ್ರೆಸ್ ಸರ್ಕಾರ ಯಾರನ್ನೊ ಓಲೈಸುವ ಹಾಗೂ ಹಿಂದೂ ಕಾರ್ಯಕರ್ತರಿಗೆ ಬೆದರಿಕೆ ಒಡ್ಡುವ ಕೆಲಸ ಮಾಡುತ್ತಿರುವಂತಿದೆ ಎಂದರು.
ತಪ್ಪು ಮಾಡಿದವರನ್ನು ಬಂಧಿಸಲಿ, ಆದರೆ ವಿನಾಕಾರಣ ಹಿಂದೂಗಳನ್ನು ಗುರಿಯಾಗಿಸಿಕೊಳ್ಳುವುದು ಸರಿಯಲ್ಲ. ಈ ಬೆಳವಣಿಗೆಯಿಂದ ಕರಾವಳಿ ಭಾಗದಲ್ಲಿ ಪರಿಸ್ಥಿತಿ ತಿಳಿಯಾಗಲು ಸಾಧ್ಯವಿಲ್ಲ.
ಕರಾವಳಿಯ ಸದ್ಯದ ಪರಿಸ್ಥಿತಿಗೆ ರಾಜ್ಯ ಸರ್ಕಾರವೇ ಹೊಣೆ ಎಂದರು.