ಬೆಂಗಳೂರು: ರಾಜ್ಯದಲ್ಲಿರುವ ಚರ್ಚ್ಗಳ ಸಮೀಕ್ಷೆ ನಡೆಸುವಂತೆ ರಾಜ್ಯ ಅಲ್ಪಸಂಖ್ಯಾತರ ನಿರ್ದೇಶನಾಲಯದ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಚರ್ಚ್ಗಳ ಸಮೀಕ್ಷೆ ಪ್ರಶ್ನಿಸಿ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಸಿಜೆ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ ಅವರಿದ್ದ ಪೀಠ, ಈ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಲ್ಪಸಂಖ್ಯಾತ ನಿರ್ದೇಶನಾಲಯದ ನಿರ್ದೇಶಕರಿಗೆ ನೋಟಿಸ್ ನೀಡಿದೆ.
ಇದಕ್ಕೂ ಮುನ್ನ ನಡೆದ ವಿಚಾರಣೆ ವೇಳೆ, ಅರ್ಜಿದಾರರ ಪರ ವಕೀಲರಾದ ಪ್ರೊ.ರವಿವರ್ಮ ಕುಮಾರ್ ವಾದ ಮಂಡಿಸಿ, ಕ್ರಿಶ್ಚಿಯನ್ ಸಮುದಾಯವನ್ನು ಗುರಿಯಾಗಿಸಿಕೊಂಡು ರಾಜ್ಯ ಸರ್ಕಾರ ಕೈಗೊಂಡಿರುವ ಈ ನಿರ್ಧಾರ ಅತ್ಯಂತ ತಾರತಮ್ಯದಿಂದ ಕೂಡಿದೆ. ಅಷ್ಟೇ ಅಲ್ಲ ಧಾರ್ಮಿಕ ಸ್ವಾತಂತ್ರ್ಯಕ್ಕೆ ಅಡ್ಡಿ ಉಂಟು ಮಾಡುತ್ತದೆ.ಯಾವುದೇ ಕಾನೂನಿನ ಆಧಾರವಿಲ್ಲದೆ, ಒಂದು ಧರ್ಮವನ್ನು ಗುರಿಯಾಗಿಸಿಕೊಂಡು ಸಮೀಕ್ಷೆಗೆ ಆದೇಶಿಸಿರುವ ಸರ್ಕಾರದ ಆದೇಶ ಅಸಂವಿಧಾನಿಕ ಕ್ರಮ. ಈ ಹಿಂದೆಯೂ ಸರ್ಕಾರ ಇದೇ ರೀತಿ ಪೊಲೀಸ್ ಮೂಲಕ ಮಾಹಿತಿ ಸಂಗ್ರಹಕ್ಕೆ ಮುಂದಾಗಿತ್ತು. ಇದೀಗ ಇಲಾಖೆ ಮೂಲಕವೇ ಮಾಹಿತಿ ಸಂಗ್ರಹಕ್ಕೆ ಮುಂದಾಗಿದೆ. ಹೀಗಾಗಿ, ಆದೇಶಕ್ಕೆ ಮಧ್ಯಂತರ ತಡೆ ನೀಡಬೇಕು ಎಂದು ಕೋರಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಪ್ರಕರಣದಲ್ಲಿ ಮಧ್ಯಂತರ ತಡೆ ನೀಡುವ ಅಂಶಗಳನ್ನು ತಾವು ಉಲ್ಲೇಖಿಸಿಲ್ಲ ಎಂದು ಅಭಿಪ್ರಾಯಪಟ್ಟು ಸಮೀಕ್ಷೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿತು. ಸರ್ಕಾರ ಆಕ್ಷೇಪಣೆ ಸಲ್ಲಿಸಿದ ಬಳಿಕ ಈ ಕುರಿತು ವಿಚಾರಣೆ ನಡೆಸುವುದಾಗಿ ತಿಳಿಸಿ, ವಿಚಾರಣೆಯನ್ನು 3 ವಾರಗಳ ಕಾಲ ಮುಂದೂಡಿತು.