ಬೆಂಗಳೂರು: ಇಂದು ಬೆಂಗಳೂರಿಗೆ ಬಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾದ ತಮಿಳುನಾಡು ಸಚಿವರ ನಿಯೋಗ ಕೇಂದ್ರ ವಿರುದ್ಧ ಜೊತೆಯಾಗಿ ಹೋರಾಡೋಣ ಎಂದು ಕರೆ ನೀಡಿದ್ದಾರೆ.
ಕ್ಷೇತ್ರ ವಿಂಗಡಣೆ ವಿರೋಧಿಸಿ ಕೇಂದ್ರದ ವಿರುದ್ಧ ತಮಿಳುನಾಡು ಹೋರಾಟ ಮಾಡುತ್ತಿದೆ. ಇದಕ್ಕೆ ನಮ್ಮ ಜೊತೆ ಕೈ ಜೋಡಿಸಿ ಎಂದು ಇಂದು ತಮಿಳುನಾಡು ಸಚಿವರ ನಿಯೋಗ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಗೆ ಮನವಿ ಮಾಡಿದೆ. ಇದಕ್ಕೆ ಸಿಎಂ ಕೂಡಾ ಒಪ್ಪಿಗೆ ನೀಡಿದ್ದಾರೆ.
ಜನಸಂಖ್ಯೆ ಆಧಾರದಲ್ಲಿ ಕ್ಷೇತ್ರ ವಿಂಗಡಣೆ ಮಾಡುವುದರಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗಲಿದೆ ಎಂದು ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಆಕ್ರೋಶ ಹೊರಹಾಕಿದ್ದಾರೆ. ಇದಕ್ಕಾಗಿ ದಂಪತಿಗಳು ಹೆಚ್ಚು ಮಕ್ಕಳನ್ನು ಹಡೆಯಬೇಕಿದೆ ಎಂದೂ ಇತ್ತೀಚೆಗೆ ಹೇಳಿಕೆ ನೀಡಿದ್ದರು.
ಇದೀಗ ಕೇಂದ್ರದ ವಿರುದ್ಧ ಸಮರಕ್ಕೆ ಕರ್ನಾಟಕದ ನೆರವು ಕೇಳಿದ್ದಾರೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಕೂಡಾ ಸಹಮತಿ ವ್ಯಕ್ತಪಡಿಸಿದ್ದಾರೆ. ಈ ವೇಳೆ ಸ್ವತಃ ಸ್ಟಾಲಿನ್ ಫೋನ್ ಕರೆ ಮಾಡಿ ಸಿದ್ದರಾಮಯ್ಯ ಜೊತೆ ಮಾತುಕತೆಯನ್ನೂ ನಡೆಸಿದ್ದಾರೆ ಎನ್ನಲಾಗಿದೆ.