Publish Date: Thu, 04 Aug 2022 (15:31 IST)
Updated Date: Thu, 04 Aug 2022 (16:35 IST)
ದೇಶದ ರಾಜಕೀಯದಲ್ಲಿ ಬದಲಾವಣೆ ತರುವ ಪ್ರಯತ್ನದಲ್ಲಿ ಆಮ್ ಆದ್ಮಿ ಪಕ್ಷದ ಯಶಸ್ಸನ್ನು ಮೆಚ್ಚಿ ಕನ್ನಡದ ಖ್ಯಾತ ಹಾಸ್ಯನಟ ಟೆನ್ನಿಸ್ ಕೃಷ್ಣ ಪಕ್ಷಕ್ಕೆ ಗುರುವಾರ ಸೇರ್ಪಡೆಯಾದರು.
ಬೆಂಗಳೂರಿನ ಹೊಟೇಲ್ ಪರಾಗ್‌ನಲ್ಲಿ ನಡೆದ ಸಮಾರಂಭದಲ್ಲಿ ಎಎಪಿ ಪಕ್ಷದ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿಯವರು ಕೃಷ್ಣರವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಎಎಪಿ ಸೇರ್ಪಡೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಟೆನ್ನಿಸ್ ಕೃಷ್ಣ, "ದೇಶದ ರಾಜಕೀಯದಲ್ಲಿ ಬದಲಾವಣೆ ತರುವ ಪ್ರಯತ್ನದಲ್ಲಿ ಆಮ್ ಆದ್ಮಿ ಪಾರ್ಟಿ ಯಶಸ್ವಿಯಾಗುತ್ತಿದೆ. ದೆಹಲಿಯಲ್ಲಿ ಶಿಕ್ಷಣ, ಆರೋಗ್ಯ, ಕ್ರೀಡೆ ಮುಂತಾದ ಕ್ಷೇತ್ರಗಳಲ್ಲಿ ಸಾಧಿಸಿ ತೋರಿಸಿರುವ ಎಎಪಿಯು ಈಗ ಪಂಜಾಬ್‌ನಲ್ಲೂ ಮೋಡಿ ಮಾಡುತ್ತಿದೆ" ಎಂದರು.
"ಭ್ರಷ್ಟ ಪಕ್ಷಗಳನ್ನು ಬದಿಗೊತ್ತಿ ದೇಶವನ್ನು ಕಾಪಾಡಲು ಎಎಪಿಯಿಂದ ಮಾತ್ರ ಸಾಧ್ಯ. ಸಾಮಾನ್ಯ ಜನರ ಬಗ್ಗೆ ಅಪಾರ ಕಾಳಜಿಯುಳ್ಳ ಆಮ್ ಆದ್ಮಿ ಪಾರ್ಟಿಯ ಮೂಲಕ ರಾಜಕೀಯ ಪ್ರವೇಶಿಸುತ್ತಿರುವುದಕ್ಕೆ ಹೆಮ್ಮೆಯಾಗುತ್ತಿದೆ. ಎಎಪಿಯನ್ನು ಬಳಸಿಕೊಂಡು ದೇಶದ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ರಾಜಕೀಯ ಪ್ರವೇಶಿಸಬೇಕು" ಎಂದು ಹೇಳಿದರು.