Select Your Language

Notifications

webdunia
webdunia
webdunia
webdunia

ಮತಾಂತರ ತಡೆಗೆ ಕಾಯ್ದೆ ತರಲು ರಾಜ್ಯ ಸರ್ಕಾರ ಚಿಂತನೆ

ಮತಾಂತರ ತಡೆಗೆ ಕಾಯ್ದೆ ತರಲು ರಾಜ್ಯ ಸರ್ಕಾರ ಚಿಂತನೆ
bangalore , ಬುಧವಾರ, 22 ಸೆಪ್ಟಂಬರ್ 2021 (21:04 IST)
ಬೆಂಗಳೂರು: ರಾಜ್ಯದಲ್ಲಿ ಬಲವಂತದ ಹಾಗೂ ಆಮಿಷವೊಡ್ಡಿ ಮತಾಂತರ ನಡೆಸುತ್ತಿರುವ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಮತಾಂತರ ನಿಷೇಧಕ್ಕೆ ಕಾಯ್ದೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.
ವಿಧಾನಸಭೆಯಲ್ಲಿ ಮಂಗಳವಾರ ಶೂನ್ಯವೇಳೆಯಲ್ಲಿ ಬಿಜೆಪಿಯ ಗೂಳಿಹಟ್ಟಿ ಶೇಖರ್‌ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ರಾಜ್ಯದಲ್ಲಿ ಬಲವಂತದ ಮತಾಂತರಕ್ಕೆ ಅವಕಾಶವಿಲ್ಲ. ಆಮಿಷವೊಡ್ಡಿ ಮತಾಂತರ ಮಾಡುವುದು ಕಾನೂನಿಗೆ ವಿರುದ್ಧವಾಗಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಈ ಕುರಿತು ಸ್ಪಷ್ಟ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.ಜನರ ಮುಗ್ಧತೆ ಅಥವಾ ಇನ್ನಿತರ ಸನ್ನಿವೇಶಗಳನ್ನು ಉಪಯೋಗಿಸಿಕೊಂಡು ಯಾವುದೇ ಸಂಘಟನೆ ಅಥವಾ ಸಂಸ್ಥೆಗಳು ಮತಾಂತರ ಮಾಡುವುದರಿಂದ, ಸಮಾಜದಲ್ಲಿ ಶಾಂತಿ ಕದಡುವ ಸಂಭವವೂ ಇದೆ. ಆಮಿಷ ಒಡ್ಡಿ ಜನರನ್ನು ಮತಾಂತರಗೊಳಿಸುವ ಪ್ರಕ್ರಿಯೆಯಲ್ಲಿ ಒಂದು ವ್ಯವಸ್ಥಿತ ಜಾಲವೇ ಇದ್ದು  ಅದನ್ನು ಯಾವರೀತಿ ತಡೆಗಟ್ಟಲು ಸಾಧ್ಯ ಎಂಬುದರ ಬಗ್ಗೆ ಚರ್ಚೆ ಆಗುತ್ತಿದೆ. ಮುಂದಿನ ದಿನಗಳಲ್ಲಿ ಸೂಕ್ತ ಕಾನೂನನ್ನು ತರಲಾಗುವುದು ಎಂದು ತಿಳಿಸಿದರು.ಈ ವೇಳೆ ಮಾತನಾಡಿದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ‘ಮತಾಂತರದ ಪಿಡುಗು ರಾಜ್ಯ ಮಾತ್ರವಲ್ಲ ಇಡೀ ದೇಶದಲ್ಲಿ ವ್ಯಾಪಿಸಿದೆ. ಬೇರೆ ಬೇರೆ ರಾಜ್ಯಗಳು ಮತಾಂತರ ನಿಷೇಧಕ್ಕೆ ಕಠಿಣ ಕಾಯ್ದೆಗಳನ್ನು ತಂದಿವೆ. ನಮ್ಮಲ್ಲೂ ಅಂತಹ ಕಾಯ್ದೆಗಳನ್ನು ಜಾರಿಗೆ ತರಬೇಕು’ ಎಂದು ಸಲಹೆ ನೀಡಿದರು.ಬಳಿಕ ಮಾತನಾಡಿದ ಗೂಳಿಹಟ್ಟಿ ಶೇಖರ್‌ ಅವರು, ಚಿತ್ರದುರ್ಗ ಜಿಲ್ಲೆಯಲ್ಲಿ ಸುಮಾರು 20 ಸಾವಿರ ಮಂದಿ ಮತಾಂತರ ಆಗಿದ್ದಾರೆ. ನನ್ನ ತಾಯಿ ಸಹ ಮತಾಂತರಗೊಂಡಿದ್ದಾರೆ. ಕುಂಕುಮ ಇಡಬಾರದು ಹಾಗೂ ದೇವರ ಫೋಟೋ ಇಡಬಾರದು ಎಂದು ಅವರ ಬ್ರೈನ್‌ ವಾಶ್‌ ಮಾಡಲಾಗಿದೆ. ಇದು ಸರಿಯಲ್ಲ ಎಂದು ಕಿವಿಮಾತು ಹೇಳಿದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಾಯಿ ಬೆದರಿಕೆ ಹಾಕುತ್ತಿದ್ದಾರೆ. ಈ ಬೆಳವಣಿಗೆಯಿಂದ ಇಡೀ ಕುಟುಂಬ ಮುಜುಗರ ಅನುಭವಿಸುವಂತಾಗಿದೆ’ ಎಂದು ಅಳಲು ತೋಡಿಕೊಂಡರು.ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು, ಹಿಂದುಳಿದವರು ಮಾತ್ರವಲ್ಲದೆ ಮುಸ್ಲಿಮರನ್ನು ಸಹ ಮತಾಂತರ ಮಾಡಲಾಗುತ್ತಿದೆ. ಈ ಬಗ್ಗೆ ಪ್ರಶ್ನಿಸಿದರೆ ಅತ್ಯಾಚಾರ ಹಾಗೂ ದೌರ್ಜನ್ಯ ಪ್ರಕರಣಗಳನ್ನು ದಾಖಲಿಸುವುದಾಗಿ ಚರ್ಚ್‌ನವರು ಬೆದರಿಕೆ ಒಡ್ಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.ಇದೇ ವೇಳೆ ಬಿಜೆಪಿಯ ಕೆ.ಜಿ.ಬೋಪಯ್ಯ, ‘ರಾಜ್ಯದಲ್ಲಿ ಮತಾಂತರ ಪಿಡುಗು ವ್ಯಾಪಕವಾಗಿದೆ. ಇದರ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.ಕಾಂಗ್ರೆಸ್‌ನ ಕೆ.ಜೆ.ಜಾರ್ಜ್, ‘ಅತ್ಯಾಚಾರ ಪ್ರಕರಣ ದಾಖಲಿಸುತ್ತೇವೆ ಎಂದು ಚರ್ಚ್‌ನವರು ಬೆದರಿಕೆ ಒಡ್ಡುತ್ತಿದ್ದಾರೆ ಎಂಬ ಆರೋಪ ಸರಿಯಲ್ಲ. ಯಾವ ಚರ್ಚ್‌ನವರು ಬೆದರಿಕೆ ಹಾಕಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ’ ಎಂದು ಆಗ್ರಹಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆ ಸಾಧ್ಯತೆ; ಹಲವೆಡೆ ಯೆಲ್ಲೋ ಅಲರ್ಟ್