ಹುಬ್ಬಳ್ಳಿ: ರಾಜ್ಯವನ್ನೇ ಬೆಚ್ಚಿಬೀಳಿಸಿದ ನೇಹಾ ಕೊಲೆ ಪ್ರಕರಣದ ಆರೋಪಿ ಫಯಾಜ್‌ನ ರಕ್ತದ ಮಾದರಿಯನ್ನು ಸಂಗ್ರಹಿಸಿ ಡಿಎನ್‌ಎ ಪರೀಕ್ಷೆಗೆ ಒಳಪಡಿಸಲಾಗಿದೆ.
ಫಯಾಜ್‌ನನ್ನು ಇಲ್ಲಿನ ಒಂದನೇ ಸೇಷನ್ಸ್ ಕೋರ್ಟ್‌ಗೆ ಶನಿವಾರ ಹಾಜರು ಪಡಿಸಿದ ಸಿಐಡಿ ಅಧಿಕಾರಿಗಳು, ನ್ಯಾಯಾಧೀಶರ ಸಮ್ಮುಖದಲ್ಲಿ ಡಿಎನ್‌ಎ ಪರೀಕ್ಷೆಗೆ ರಕ್ತದ ಮಾದರಿ ಸಂಗ್ರಹಿಸಿದರು.
ಪ್ರಕರಣದ ಹೆಚ್ಚಿನ ತನಿಖೆಗೆ ತನಿಖಾಧಿಕಾರಿಗಳು ಶನಿವಾರ ಬೆಳಿಗ್ಗೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಆರೋಪಿ ಫಯಾಜ್‌ನ ಡಿಎನ್ಎ ಪರೀಕ್ಷೆಗೆ ಒಳಪಡಿಸಲು ಅನುಮತಿ ಕೇಳಿದ್ದರು. ನ್ಯಾಯಾಲಯ ಅರ್ಜಿ ಪರಿಗಣಿಸಿದ ಹಿನ್ನೆಲೆಯಲ್ಲಿ ಆರೋಪಿಯನ್ನು ಮಧ್ಯಾಹ್ನ ನ್ಯಾಯಾಲಯಕ್ಕೆ ಹಾಜರು ಪಡಿಸಿ, ವೈದ್ಯರಿಂದ ರಕ್ತದ ಮಾದರಿ ಸಂಗ್ರಹಿಸಲಾಯಿತು.
ಇನ್ನೂ ನೇಹಾ ಕೊಲೆ ನಡೆದ ಸ್ಥಳದಲ್ಲಿ ಹಾಗೂ ಆರೋಪಿ ಕೃತ್ಯಕ್ಕೆ ಬಳಸಿದ ಚಾಕುವಿನಲ್ಲಿ ರಕ್ತದ ಎರಡು ಗುಂಪಿನ ಮಾದರಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಫಯಾಜ್‌ನ ಡಿಎನ್ಎ ಪರೀಕ್ಷೆಗೆ ಮುಂದಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬಿಗಿ ಭದ್ರತೆಯಲ್ಲಿ ಆರೋಪಿಯನ್ನು ನ್ಯಾಯಾಲಯಕ್ಕೆ ಕರೆತರಲಾಗಿತ್ತು.