ನವದೆಹಲಿ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗಾಗಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಶನಿವಾರ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೋರಖ್ ಪುರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉತ್ತರ ಪ್ರದೇಶ ಬಿಜೆಪಿ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಮೊದಲ ಹಂತಕ್ಕೆ 58 ಸ್ಥಾನಗಳ ಪೈಕಿ 57 ಅಭ್ಯರ್ಥಿಗಳ ಹೆಸರನ್ನು ಪಟ್ಟಿ ಮಾಡಲಾಗಿದ್ದು, ಎರಡನೇ ಹಂತಕ್ಕಾಗಿ 55 ಸ್ಥಾನಗಳ ಪೈಕಿ 48 ಅಭ್ಯರ್ಥಿಗಳ ಹೆಸರನ್ನು ಅಖೈರುಗೊಳಿಸಲಾಗಿದೆ ಎಂದು ತಿಳಿಸಿದರು.
ಯೋಗಿ ಆದಿತ್ಯ ನಾಥ್ ಜೊತೆಗೆ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಸಿರತು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ಪ್ರಧಾನ್ ಹೇಳಿದರು.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಯೋಧ್ಯೆಯಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಊಹಾಪೋಹಗಳು ಹರಿದಾಡುತ್ತಿದ್ದವು. ಆದಾಗ್ಯೂ, ಅವರನ್ನು ಗೋರಖ್ ಪುರದಿಂದ ಪಕ್ಷಕ್ಕೆ ಕಣಕ್ಕೆ ಇಳಿಸಿದೆ. ಅಲ್ಲಿ ಅವರು ಲೋಕಸಭಾ ಚುನಾವಣೆಯಲ್ಲಿ ಐದು ಬಾರಿ ಗೆದ್ದಿದ್ದಾರೆ.