ಬೆಂಗಳೂರು: ಹಗಲು ಮತ್ತು ರಾತ್ರಿಯ ವೇಳೆ ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕರ ವಾಹನಗಳ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳಾದ ನವೀದ್ ಪಾಷಾ, ಸಾಯೆದ್ ರೋಷನ್ ಎನ್ನುವವರನ್ನು ನಗರದ ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಿಂದ ಸುಮಾರು 7 ಲಕ್ಷ ರೂ ಮೌಲ್ಯದ 13 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ, ಆರೋಪಿಗಳ ವಿರುದ್ಧ ನಗರದ 13 ಪೊಲೀಸ್ ಠಾಣೆಗಳಲ್ಲಿ ಈಗಾಗಲೇ ಪ್ರಕರಣಗಳು ದಾಖಲಾಗಿತ್ತು ಎಂದು ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ ತಿಳಿಸಿದ್ದಾರೆ.
ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ 5 ಪ್ರಕರಣಗಳು, ಸುಬ್ರಮಣ್ಯಪುರ ಪೊಲೀಸ್ ಠಾಣೆ, ಪುಟ್ಟೇನಹಳ್ಳಿ, ಕೋಣನಕುಂಟೆ, ಜೆ.ಪಿ ನಗರ, ಬನಶಂಕರಿ, ಹನುಮಂತನಗರ, ಸಿ.ಕೆ ಅಚ್ಚುಕಟ್ಟು, ಹಾಗು ಆರ್.ಆರ್ ನಗರ ಪೊಲೀಸ್ ಠಾಣೆಗಳಲ್ಲಿ ತಲಾ ಒಂದೊಂದು ಪ್ರಕರಣ ಭೇದಿಸಿದಂತಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಈ ಪ್ರಕರಣಗಳನ್ನು ಭೇದಿಸಿದ ಸುಬ್ರಮಣ್ಯಪುರ ಪೊಲೀಸ್ ಉಪ ವಿಭಾಗದ ಉಪ ಪೊಲೀಸ್ ಆಯುಕ್ತ ಟಿ.ಎಂ ಶಿವಕುಮಾರ್ ನೇತೃತ್ವದಲ್ಲಿ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಪಿ. ಶಿವಕುಮಾರ್, ಸಬ್ ಇನ್ಸ್ಪೆಕ್ಟರ್ ಹೆಚ್.ಎಂ ನಾಗೇಶ್, ಹೆಚ್ ಎಂ ಶ್ರೀಕಂಠಯ್ಯ ಹಾಗು ಸಿಬ್ಬಂದ್ದಿಗಳನ್ನು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂಥ್ ಶ್ಲಾಘಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.