ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ನಡೆದ ವಿಧಾನ ಪರಿಷತ್ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪುತ್ತೂರಿನ ಕಿಶೋರ್ ಕುಮಾರ್ ಬೊಟ್ಯಾಡಿ ಜಯಭೇರಿ ಬಾರಿಸಿದ್ದಾರೆ.
ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಅ.21ರಂದು ನಡೆದ ಚುನಾವಣೆಯಲ್ಲಿ ಒಟ್ಟು 392 ಮತಗಟ್ಟೆಗಳಲ್ಲಿ 5,906 ಮತದಾರರು ಮತ ಚಲಾಯಿಸಿದ್ದರು.
ಗುರುವಾರ ಮಂಗಳೂರಿನ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯಿತು. 1693 ಮತಗಳ ಅಂತರದೊಂದಿಗೆ ಕಿಶೋರ್ ಕುಮಾರ್ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಅವರನ್ನು ಸೋಲಿಸಿದ್ದಾರೆ.
ಮೊದಲ ಹಂತದಲ್ಲಿ ಒಟ್ಟು ಮತಗಳ ಎಣಿಕೆ ಮತ್ತು ಮಿಶ್ರಣ ಕಾರ್ಯ, ಎರಡನೇ ಹಂತದಲ್ಲಿ ಮತಪತ್ರಗಳ ಸಿಂಧುತ್ವ ಪರಿಶೀಲನೆ ಮಾಡಿ ನಂತರ ಒಂದನೇ ಪ್ರಾಶಸ್ತ್ಯದ ಮತಗಳ ಎಣಿಕೆ ಮಾಡಲಾಯಿತು. ಬಿಜೆಪಿ ಅಭ್ಯರ್ಥಿಯು 3655 ಮತ, ಕಾಂಗ್ರೆಸ್ 1958, ಎಸ್ಡಿಪಿಐ 195, ಪಕ್ಷೇತರ 9 ಮತ್ತು 89 ಅಸಿಂಧು ಮತಗಳಾಗಿವೆ.
ಕಿಶೋರ್ ಗೆಲುವು ಸಾಧಿಸುತ್ತಿದ್ದಂತೆಯೇ ಪಿವಿಎಸ್ ವೃತ್ತದ ಬಳಿ ಇರುವ ಬಿಜೆಪಿ ಜಿಲ್ಲಾ ಕಚೇರಿ ಎದುರು ಪಕ್ಷದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.