Publish Date: Fri, 03 Jun 2022 (08:49 IST)
Updated Date: Fri, 03 Jun 2022 (08:51 IST)
ಬೆಂಗಳೂರು : ಬಿಬಿಎಂಪಿ ಚುನಾವಣೆಗೆ ಈಗಿನಿಂದಲೇ ತಯಾರಿ ಮಾಡಲಿದ್ದೇವೆ.
ಪಕ್ಷದ ವತಿಯಿಂದ ಬೂತ್ ಕಮಿಟಿ ಮತ್ತು ವಾರ್ಡ್ ಸಮಿತಿಗಳನ್ನು ಚುರುಕುಗೊಳಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ನಗರದ ಮಲ್ಲೇಶ್ವರಂನ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಇವತ್ತು ನಮ್ಮ ಪಕ್ಷದ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ.
ಬಿಬಿಎಂಪಿ ವ್ಯಾಪ್ತಿಗೆ ಸಂಬಂಧಿಸಿದ ಜಿಲ್ಲಾ ಅಧ್ಯಕ್ಷರು, ಜಿಲ್ಲಾ ಪದಾಧಿಕಾರಿಗಳು, ನನ್ನ ಸಚಿವಸಂಪುಟದ ಸಹೋದ್ಯೋಗಿಗಳ ಮತ್ತು ಶಾಸಕ ಮಿತ್ರರು ಇದ್ದ ಸಭೆಯಲ್ಲಿ ಬಿಬಿಎಂಪಿ ಚುನಾವಣೆ ಬಗ್ಗೆ ಮಾತನಾಡಿದ್ದೇವೆ ಎಂದು ವಿವರಿಸಿದರು.
ಈಗಾಗಲೇ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಬೇಕು. ಮಳೆಗಾಲವನ್ನು ಗಮನದಲ್ಲಿ ಇಟ್ಟು ಆ ಕಾಮಗಾರಿಗಳನ್ನು ಬೇಗನೆ ಮುಗಿಸಬೇಕು ಎಂದು ನಿರ್ಧರಿಸಲಾಗಿದೆ. ಪಕ್ಷದ “ವಿಷನ್ ಡಾಕ್ಯುಮೆಂಟ್”ಅನ್ನು ಸಿದ್ಧಪಡಿಸಲು ತಜ್ಞರ ಸಮಿತಿಯನ್ನು ನೇಮಿಸಲು ತೀರ್ಮಾನಿಸಲಾಗಿದೆ.
ಪ್ರತಿ 15 ದಿನಗಳಿಗೊಮ್ಮೆ ಸಭೆ ನಡೆಸಬೇಕು. ಸಂಘಟನೆ ಮತ್ತು ಅಭಿವೃದ್ಧಿ ವಿಚಾರದಲ್ಲಿ ನಿರಂತರವಾಗಿ ಚರ್ಚೆ ಮಾಡುತ್ತಿರಬೇಕು. ಜನಾಭಿಪ್ರಾಯ ಪಡೆದು ಪ್ರಣಾಳಿಕೆಯಲ್ಲಿ ಸೇರಿಸಿ ವಿಷನ್ ಡಾಕ್ಯುಮೆಂಟ್ ತಯಾರು ಮಾಡಲು ನಿರ್ಧರಿಸಲಾಗಿದೆ ಎಂದು ಮಾಹಿತಿ ಹಂಚಿಕೊಂಡರು.