ಬೆಂಗಳೂರು: ಮೂರು ದಿನ ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರು ಯಾರೆಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿತ್ತು. ಇದೀಗ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಗೊ. ರು. ಚನ್ನಬಸಪ್ಪ ಆಯ್ಕೆಯಾಗಿದ್ದಾರೆ.
ಡಿಸೆಂಬರ್ 20ರಿಂದ ಮೂರು ದಿನ ಕಾಲ ಮಂಡ್ಯದಲ್ಲಿ ಸಮ್ಮೇಳನ ನಡೆಯಲಿದೆ.
ರಾಜ್ಯಾಧ್ಯಕ್ಷ ಡಾ. ಮಹೇಶ್ ಜೋಶಿ ಅಧ್ಯಕ್ಷತೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಭವನದಲ್ಲಿ ಇಂದು ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಗೊ ರು ಚನ್ನಬಸಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಗೊಂಡೇದಹಳ್ಳಿಯಲ್ಲಿ 1930ರ ಮೇ 18ರಂದು ಗೊ. ರು. ಚೆನ್ನಬಸಪ್ಪನವರು ಜನಿಸಿದರು. ಮಹಾದೇವಿ, ಸದಾಶಿವ ಶಿವಾಚಾರ್ಯ, ಕರ್ನಾಟಕ ಪ್ರಗತಿಪಥ ಇವರ ಪ್ರಮುಖ ಕೃತಿಗಳಾಗಿವೆ. ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅಷ್ಟೇ ಅಲ್ಲ, ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾನಪದ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸುವಲ್ಲಿ ಅವರು ಬಹುಮುಖ್ಯ ಪಾತ್ರವಹಿಸಿದ್ದರು.<>