Select Your Language

Notifications

webdunia
webdunia
webdunia
webdunia

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆ

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆ
ಮಂಗಳೂರು , ಬುಧವಾರ, 4 ಆಗಸ್ಟ್ 2021 (08:58 IST)
Karnataka Rains Today:(ಆ.04): ಕರ್ನಾಟಕದಲ್ಲಿ ಮುಂಗಾರು ಮಳೆಯ ಅಬ್ಬರ ಕ್ಷೀಣಿಸತೊಡಗಿದೆ. ಜುಲೈ ತಿಂಗಳಲ್ಲಿ ವರುಣನ ಆರ್ಭಟಕ್ಕೆ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದರು. ಭಾರೀ ಮಳೆಗೆ ರಾಜ್ಯದಲ್ಲಿ ನದಿಗಳು ಪ್ರವಾಹ ಮಟ್ಟದಲ್ಲಿ ಹರಿಯುತ್ತಿದ್ದು, ಜನರಿಗೆ ಆತಂಕ ಮೂಡಿಸಿದ್ದವು.

ಬಹುತೇಕ ಡ್ಯಾಂಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗಿತ್ತು. ಇದರಿಂದ ನದಿಪಾತ್ರದ ಜನರಿಗೆ ಪ್ರವಾಹ ಭೀತಿ ಎದುರಾಗಿತ್ತು. ಈ ನದಿ ಹರಿವಿನ ಪ್ರಮಾಣ ಕಡಿಮೆಯಾಗಿದ್ದು, ಪ್ರವಾಹ ಭೀತಿಯೂ ಕಡಿಮೆಯಾಗಿದೆ. ಹಲವೆಡೆ ಮನೆಗಳು ಕುಸಿದಿದ್ದವು. ಇನ್ನೂ ಕೆಲವೆಡೆ ಸೇತುವೆಗಳು ಮುಳುಗಡೆಯಾಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿತ್ತು. ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಬೆಳೆಗಳು ನಾಶವಾಗಿದ್ದವು. ಭಾರೀ ಮಳೆಗೆ ರಾಷ್ಟ್ರೀಯ ಹೆದ್ದಾರಿಗಳು ಜಲಾವೃತಗೊಂಡಿದ್ದವು. ಸದ್ಯ ಮಳೆ ನಿಂತರೂ, ಮಳೆಯಿಂದಾಗಿರುವ ಹಾನಿಯಿಂದ ಸುಧಾರಿಸಿಕೊಳ್ಳಲು ಸಾಕಷ್ಟು ಸಮಯ ಬೇಕಿದೆ.
ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ.
ಕಳೆದ 24 ಗಂಟೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ನಗರಬಸ್ತಿಕೇರಿಯಲ್ಲಿ 76 ಮಿ.ಮೀ ಮಳೆಯಾಗಿದೆ. ನಿನ್ನೆ ರಾಜ್ಯದಲ್ಲಿ ಅತೀ ಹೆಚ್ಚು ಮಳೆಯಾಗಿರುವ ಪ್ರದೇಶ ಇದಾಗಿದೆ.
ನಿನ್ನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಿದೆ. ಕಳೆದ ಒಂದು ವಾರದಿಂದ ಬಿಡುವು ಕೊಟ್ಟಿದ್ದ ಮಳೆರಾಯ ನಿನ್ನೆ ಸಂಜೆ ಬೆಂಗಳೂರಿಗೆ ತಂಪೆರೆದಿದ್ದಾನೆ. ಇಂದು ಮೋಡ ಕವಿದ ವಾತಾವರಣವಿದ್ದು, ಮಳೆಯಾಗುವ ನಿರೀಕ್ಷೆ ಇದೆ.
ಕರ್ನಾಟಕದ ಕರಾವಳಿ ಭಾಗದಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ. ಮಂಗಳೂರು ಕರಾವಳಿಯಿಂದ ಕರ್ನಾಟಕ ಕರಾವಳಿವರೆಗೆ ಇಂದು ವ್ಯಾಪಕ ಮಳೆಯಾಗಲಿದೆ. ಮಲೆನಾಡು ಭಾಗದ ಜಿಲ್ಲೆಗಳಲ್ಲೂ ಇಂದು ಮಳೆ ಸುರಿಯಲಿದೆ. ಜೊತೆಗೆ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ದಾವಣಗೆರೆ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ.ಇನ್ನು, ಉತ್ತರ ಒಳನಾಡಿನಲ್ಲೂ ಸಹ ಸಾಧಾರಣ ಮಳೆಯಾಗಲಿದೆ. ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ನಿರೀಕ್ಷೆ ಇದೆ.ರಾಜ್ಯದ ಮಲೆನಾಡು ಭಾಗದಲ್ಲಿ ಇಂದು ಕೊಂಚ ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಉಡುಪಿ ಜಿಲ್ಲೆಯಾದ್ಯಂತ ಅಧಿಕ ಮಳೆಯಾದರೆ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಜುಲೈ ತಿಂಗಳಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಸುರಿದ ಧಾರಾಕಾರ ಮಳೆಗೆ ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ. ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸುಮಾರು 31,360 ಮಂದಿಯನ್ನು ತಗ್ಗು ಪ್ರದೇಶಗಳಿಂದ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಸುಮಾರು 22,417 ಜನರು 237 ನಿರಾಶ್ರಿತ ಕೇಂದ್ರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ಪ್ರಕಾರ, ಸುಮಾರು 283 ಗ್ರಾಮಗಳು, 45 ತಾಲೂಕುಗಳು ಮಳೆಯ ಹೊಡೆತಕ್ಕೆ ಸಿಕ್ಕಿದ್ದು, 36,498 ಜನರು ಅಕ್ಷರಶಃ ನಲುಗಿದ್ದಾರೆ.
ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಈ ವರ್ಷ ಮಳೆಯಿಂದಾಗಿ 9 ಮಂದಿ ಸಾವನ್ನಪ್ಪಿದ್ದು, ಮೂರು ಜನರು ಕಣ್ಮರೆಯಾಗಿದ್ದಾರೆ. ಸುಮಾರು 3,502 ವಿದ್ಯುತ್ ಕಂಬಗಳು ಧರೆಗುರುಳಿವೆ. 342 ಟ್ರಾನ್ಸ್ಫಾರ್ಮರ್ಗಳು ಹಾನಿಯಾಗಿದ್ದು, ಹಲವಾರು ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಡಿತವಾಗಿದೆ


Share this Story:

Follow Webdunia kannada

ಮುಂದಿನ ಸುದ್ದಿ

ಬೊಮ್ಮಾಯಿ ಸಂಪುಟದ ಸಂಭಾವ್ಯ ಸಚಿವರ ಹೊಸ ಪಟ್ಟಿ