ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಹೀಗಾಗಿ, ಆ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಕರ್ನಾಟಕದ ಹಲವಾರು ಭಾಗಗಳಲ್ಲಿ ನಿರಂತರ ಮಳೆಯಾಗುತ್ತಿದ್ದರೂ, ಮುಂದಿನ 4 ದಿನಗಳವರೆಗೆ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ಮುಂದಿನ ಮೂರು ಗಂಟೆಗಳವರೆಗೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಲಾಗಿದೆ. ಧಾರವಾಡ, ಗದಗ, ದಾವಣಗೆರೆ, ಹಾವೇರಿ ಮತ್ತು ಉತ್ತರ ಕನ್ನಡದಲ್ಲಿ ಇಂದು ಸಹ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಹಲವು ಜಿಲ್ಲೆಗಳಲ್ಲೂ ವರುಣ ಅಬ್ಬರಿಸುವ ಸಾಧ್ಯತೆ ಇದೆ. ಅದಕ್ಕೆ ಕರಾವಳಿ ಹೊರತು ಪಡಿಸಿ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದೆ. ಈ ಕಾರಣ ಬೆಳಗಾವಿ ಚಿಕ್ಕೋಡಿಗಳಲ್ಲಿ ಪ್ರವಾಹ ಭೀತಿ ಉಂಟಾಗಿದೆ. ಜನ ಜೀವನ ಅಸ್ತವ್ಯಸ್ತವಾಗಿದೆ. ಸೇತುವೆಗಳು ಮುಳುಗಿ ವಾಹನ ಸವಾರರು ಪರದಾಡುವಂತಾಗಿದೆ.