ಪಣಜಿ: ಉತ್ತರ ಗೋವಾದ ಅರ್‌ಪೋರಾ ನೈಟ್‌ಕ್ಲಬ್‌ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ.
ಮಧ್ಯರಾತ್ರಿ ಅಡುಗೆಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟವೇ ಅವಘಡಕ್ಕೆ ಕಾರಣವಾಗಿದೆ. ಅಗ್ನಿ ಸುರಕ್ಷತಾ ನಿಯಮಗಳನ್ನು ಪಾಲಿಸದಿರುವುದು ಹೆಚ್ಚಿನ ಸಾವು-ನೋವಿಗೆ ಮುಖ್ಯ ಕಾರಣ ಎನ್ನಲಾಗಿದ್ದು, ಗೋವಾ ಸಿಎಂ ತನಿಖೆಗೆ ಆದೇಶಿಸಿದ್ದಾರೆ.
ದುರ್ಘಟನೆಯಲ್ಲಿ ಸುಮಾರು 50 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಗೋವಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, 3-4 ಮಂದಿ ಮಾತ್ರ ಪ್ರವಾಸಿಗರಾಗಿದ್ದರು, ಉಳಿದ 19 ಮಂದಿ ಕ್ಲಬ್‌ನ ಸಿಬ್ಬಂದಿಯೇ ಆಗಿದ್ದಾರೆ ಎನ್ನಲಾಗಿದೆ.
ತಡರಾತ್ರಿ 1 ಗಂಟೆ ಸುಮಾರಿಗೆ ಕ್ಲಬ್ ಮುಚ್ಚಲು ಎಲ್ಲಾ ಸಿದ್ಧತೆ ಮಾಡಿಕೊಳ್ಳುತ್ತಿದ್ದರು ಅಷ್ಟರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಅಡುಗೆ ಮನೆಯ ಬಳಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿದ್ದೆ ಅನ್ನೋ ಶಂಕೆಯಿದೆ.
ಸ್ಫೋಟದ ತೀವ್ರತೆಗೆ ಕೆಲವೇ ಸೆಕೆಂಡುಗಳಲ್ಲಿ ಇಡೀ ಕಟ್ಟಡಕ್ಕೆ ಬೆಂಕಿ ಕೆನ್ನಾಲಿಗೆ ಚಾಚಿಕೊಂಡಿದೆ. ಮೇಲ್ನೋಟಕ್ಕೆ ಸಿಲಿಂಡರ್ ಸ್ಫೋಟಗೊಂಡಿರುವ ಶಂಕೆ ವ್ಯಕ್ತವಾಗಿದೆ. ಶವಗಳನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಘಟನೆಗೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಗೋವಾ ಸಿಎಂ ಪ್ರಮೋದ್ ಸಾವಂತ್ ಸಂತಾಪ ಸೂಚಿಸಿದ್ದಾರೆ.
ಅರ್ಪೋರಾದಲ್ಲಿ ಸಂಭವಿಸಿದ ಅಗ್ನಿ ಅವಘಡ ಅತ್ಯಂತ ದುಃಖಕರ. ತಮ್ಮ ಪ್ರೀತಿಪಾತ್ರರನ್ನ ಕಳೆದುಕೊಂಡ ಎಲ್ಲರೊಂದಿಗೂ ನನ್ನ ಚಿಂತನೆ ಇದೆ. ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಮೋದಿ ತಮ್ಮ ಎಕ್ಸ್ ಪೋಸ್ಟ್‌ನಲ್ಲಿ ಸಂದೇಶ ಹಂಚಿಕೊಂಡಿದ್ದಾರೆ.