ಪಲ್ನಾಡು (ಆಂಧ್ರಪ್ರದೇಶ): ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತೆಲಂಗಾಣದ ಕೊಂಡಗಟ್ಟು ಆಂಜನೇಯಸ್ವಾಮಿ ದೇವಸ್ಥಾನದಿಂದ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಾಹನವು ಹಿಂತಿರುಗುತ್ತಿದ್ದಾಗ ಅಡ್ಡಂಕಿ-ನಾರ್ಕಟ್‌ಪಲ್ಲಿ ಹೆದ್ದಾರಿಯಲ್ಲಿ ಶನಿವಾರ ಅಪಘಾತ ಸಂಭವಿಸಿದೆ, ಪ್ರಯಾಣಿಕರು ತಮ್ಮ ಹೊಸ ಕಾರಿಗೆ ಪೂಜೆ ಸಲ್ಲಿಸಲು ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಕೊಂಡಗಟ್ಟು ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ತಮ್ಮ ಸ್ವಗ್ರಾಮವಾದ ಸಿರಿಪುರಕ್ಕೆ ಹಿಂದಿರುಗುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎಂದು ಪಿಡುಗುರಳ್ಳ ಗ್ರಾಮಾಂತರ ಠಾಣೆ ಸಬ್ ಇನ್ಸ್‌ಪೆಕ್ಟರ್ ಮೋಹನ್ ತಿಳಿಸಿದ್ದಾರೆ.
ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತಕ್ಕೆ ಅತಿವೇಗವೇ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.