ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ದಶಕಗಳಿಂದ ಅಧಿಕಾರದಲ್ಲಿದ್ದ ಆಮ್ ಆದ್ಮಿ ಪಕ್ಷ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಅತಿಶಿ ರಾಜೀನಾಮೆ ನೀಡಿದ್ದಾರೆ.
ಭಾನುವಾರ ಅಶಿತಿ ಅವರು ರಾಜ್ಯಪಾಲ ವಿ.ಕೆ ಸಕ್ಸೇನಾ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಬಿಜೆಪಿ ಬಹುಮತ ಪಡೆದಿದ್ದು, ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಕುತೂಹಲ ಮುಂದುವರಿದಿದೆ. ಒಂದೆರಡು ದಿನಗಳಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಆಯ್ಕೆ ನಡೆಯಲಿದೆ.
ಈ ಬಾರಿ ಚುನಾವಣೆಯಲ್ಲಿ ಎಎಪಿ ವರಿಷ್ಠ, ಮಾಜಿ ಸಿಎಂ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಸೇರಿದಂತೆ ಘಟಾನುಘಟಿ ನಾಯಕರೇ ಸೋತು ಸುಣ್ಣವಾದ ಹೊರತಾಗಿಯೂ ಅತಿಶಿ ತನ್ನ ಕಲ್ಕಾಜಿ ಕ್ಷೇತ್ರವನ್ನು ಉಳಿಸಿಕೊಂಡರು. ಆರಂಭದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಬಿಧೂರಿ ವಿರುದ್ಧ ತೀವ್ರ ಹಿನ್ನಡೆ ಅನುಭವಿಸಿದ್ದ ಅತಿಶಿ 8-9ನೇ ಸುತ್ತಿನ ಬಳಿಕ ಸತತವಾಗಿ ಮುನ್ನಡೆ ಕಾಯ್ದುಕೊಂಡು ಗೆಲುವು ಸಾಧಿಸಿದ್ರು.
ಕಲ್ಕಾಜಿ ಕ್ಷೇತ್ರದಲ್ಲಿ ಆಪ್ ಅಭ್ಯರ್ಥಿ ಅತಿಶಿ 52,154 ಮತಗಳನ್ನು ಪಡೆದು 3,521 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರೆ, ಬಿಧೂರಿ 48,633 ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ.
ತೀವ್ರ ಕುತೂಹಲ ಕೆರಳಿಸಿದ್ದ ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, 27 ವರ್ಷಗಳ ಬಳಿಕ ಬಿಜೆಪಿ ಅಧಿಕಾರಕ್ಕೇರಿದೆ. ಆದ್ರೆ ಕಳೆದ 10 ವರ್ಷಗಳಿಂದ ಅಧಿಕಾರದಲ್ಲಿದ್ದ ಆಪ್ ಸೋಲು ಕಂಡಿದ್ದರೆ, ʻಕೈʼ ಪಾಳಯ ಸತತ 3ನೇ ಬಾರಿಗೆ ಶೂನ್ಯ ಸಂಪಾದನೆ ಮಾಡಿದೆ.