ಶ್ರೀಕಾಕುಳಂ: ದೇಶದಲ್ಲಿ ಮತ್ತೊಂದು ಕಾಲ್ತುಳಿತ ಪ್ರಕರಣ ಸಂಭವಿಸಿದೆ. ಆಂಧ್ರಪ್ರದೇಶದ ಇತಿಹಾಸ ಪ್ರಸಿದ್ಧ ದೇಗುಲದಲ್ಲಿ ಕಾಲ್ತುಳಿತ ಸಂಭವಿಸಿ ಕನಿಷ್ಠ 9 ಮಂದಿ ಸಾವಿಗೀಡಾಗಿದ್ದಾರೆ.
ಆಂಧ್ರ ಪ್ರದೇಶದ ಶ್ರೀಕಾಕುಳನಲ್ಲಿರುವ ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಕಾರ್ತಿಕ ಮಾಸದ ಏಕಾದಶಿ ಶನಿವಾರ ಬಂದಿದ್ದರಿಂದ ದೇವರ ದರ್ಶನ ಪಡೆಯಲು ಹೆಚ್ಚಿನ ಸಂಖ್ಯೆಯ ಭಕ್ತರು ಸೇರಿದ್ದರು. ಈ ಸಮಯದಲ್ಲಿ, ಜನಸಂದಣಿ ಹೆಚ್ಚಾದ ಕಾರಣ ಕಾಲ್ತುಳಿತ ಇದ್ದಕ್ಕಿದ್ದಂತೆ ಹೆಚ್ಚಾಯಿತು. ಕಾಲ್ತುಳಿತದಲ್ಲಿ ಅನೇಕ ಭಕ್ತರು ಗಂಭೀರವಾಗಿ ಗಾಯಗೊಂಡರು.
ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಪ್ರಸ್ತುತ, ದೇವಾಲಯದ ಸುತ್ತಮುತ್ತ ತೀವ್ರ ಉದ್ವಿಗ್ನತೆ ಉಂಟಾಗಿದೆ. ಘಟನೆ ನಡೆದ ದೇವಾಲಯಕ್ಕೆ ಪೊಲೀಸರು ತಲುಪಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸುತ್ತಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ಘಟನೆಯ ಬಗ್ಗೆ ಜಿಲ್ಲಾ ಅಧಿಕಾರಿಗಳು ಸಂಪೂರ್ಣ ತನಿಖೆಗೆ ಆದೇಶಿಸಿದ್ದಾರೆ. ದೇವಾಲಯದ ಭದ್ರತಾ ವ್ಯವಸ್ಥೆಯಲ್ಲಿ ನಿರ್ಲಕ್ಷ್ಯವಿದೆಯೇ ಎಂಬ ಬಗ್ಗೆಯೂ ತನಿಖೆ ನಡೆಸಲಾಗುವುದು. ಈ ಮಧ್ಯೆ, ಆನಮ್ ರಾಮನಾರಾಯಣ ರೆಡ್ಡಿ ಕಾಲ್ತುಳಿತ ಘಟನೆಯ ಬಗ್ಗೆ ವಿಚಾರಣೆ ನಡೆಸಿದ್ದಾರೆ.
ದೇವಸ್ಥಾನದ ಆವರಣದಲ್ಲಿ ಭಕ್ತರ ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಭಯಾನಕ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಕಾಲ್ತುಳಿತ ದುರಂತಕ್ಕೆ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಆಘಾತ ವ್ಯಕ್ತಪಡಿಸಿದ್ದು, ಭಕ್ತರ ಸಾವು ಹೃದಯವಿದ್ರಾವಕ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.