3,600 ಕೋಟಿ ರೂಪಾಯಿ ಅಗಸ್ಟಾ ವೆಸ್ಟ್ಲ್ಯಾಂಡ್ ಹಗರಣದ ಆರೋಪಕ್ಕೆ ಒಳಗಾಗಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪಕ್ಷದ ಇತರ ನಾಯಕರನ್ನು ಬಂದಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಿಜೆಪಿಗೆ ಸವಾಲು ಹಾಕಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೌನ ಕಾಯ್ದುಕೊಂಡಿರುವುದನ್ನು ಪ್ರಶ್ನಿಸಿರುವ ಅವರು ಇದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರ ಮೇಲೆ ಯಾಕೆ ಸಿಬಿಐ ರೈಡ್‌ನ್ನು ನಡೆಸಲಾಗಿಲ್ಲ ಎಂದು ಪ್ರಶ್ನಿಸಿದ್ದಾರೆ.
ಪ್ರಕರಣದಲ್ಲಿ ಆರೋಪಿಗಳಾಗಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಇತರ ನಾಯಕರನ್ನು ಬಂಧಿಸಿ ವಿಚಾರಣೆಗೊಳಪಡಿಸಿ ಎಂದು ನಾನು ಸವಾಲು ಹಾಕುತ್ತೇನೆ ಎಂದು ಗುರುವಾರ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
ಬಿಜೆಪಿ ಇದನ್ನು ಮಾಡಲಾರದು. ಕಮಲ ಪಕ್ಷದ ಉದ್ದೇಶ ತುಂಬಾ ಕೆಟ್ಟದ್ದು. ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಬಲವಾದ ಸಂಬಂಧವಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.