ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಬಿಜೆಪಿ ಮುಂದಿನ ತಿಂಗಳು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸುವ ಸಾಧ್ಯತೆ ಇದೆ.
ಯುಪಿ ಚುನಾವಣೆಗೆ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸುವ ಕುರಿತು ಜೂನ್ 12 ಮತ್ತು 13ರಂದು ಅಲಹಾಬಾದ್‌ನಲ್ಲಿ ನಡೆಯಲಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಓಂ ಪ್ರಕಾಶ್ ಮಾಥುರ್ ಹೇಳಿದ್ದಾರೆ.
ಮೊದಲು ಪ್ರಧಾನಿ ಮೋದಿ ಜನಪ್ರಿಯತೆಯನ್ನು ಮುಂದಿಟ್ಟುಕೊಂಡು ಚುನಾವಣೆಯನ್ನು ಎದುರಿಸಬೇಕೆಂಬ ಯೋಜನೆ ಇತ್ತು. ಈಗ ಸಿಎಂ ಅಭ್ಯರ್ಥಿ ಹೆಸರನ್ನು ಘೋಷಿಸುವ ಆಯ್ಕೆಯನ್ನು ಸಹ ಮುಂದಿಟ್ಟುಕೊಳ್ಳಲಾಗಿದೆ ಎಂದು ಯುಪಿಯಲ್ಲಿ ಪಕ್ಷದ ಉಸ್ತುವಾರಿಯನ್ನು ಹೊತ್ತಿರುವ ಮಾಥುರ್ ಹೇಳಿದ್ದಾರೆ.
2014ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ತೋರಿದ್ದ ಅದ್ಭುತ ಪ್ರದರ್ಶನವನ್ನು ಮರುಕಳಿಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ ಎಂದ ಅವರು ಸಿಎಂ ಅಭ್ಯರ್ಥಿಗಾಗಿ ಪಕ್ಷದ ಮುಂದಿರುವ ಹೆಸರುಗಳನ್ನು ಬಹಿರಂಗ ಪಡಿಸಲು ನಿರಾಕರಿಸಿದ್ದಾರೆ.
2014ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ 80 ಲೋಕಸಭಾ ಸ್ಥಾನಗಳಲ್ಲಿ 78 ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಬಿಜೆಪಿ 71 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವನ್ನು ಸಾಧಿಸಿತ್ತು.