Publish Date: Thu, 25 Dec 2025 (10:31 IST)
Updated Date: Thu, 25 Dec 2025 (10:40 IST)
ನವದೆಹಲಿ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 9 ಮಂದಿ ಮೃತಪಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಗೊರ್ಲತ್ತು ಕ್ರಾಸ್ ಬಳಿ ಮುಂಜಾವ 3 ಗಂಟೆ ಸುಮಾರಿಗೆ ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಬಸ್ಗೆ ಎದುರು ಬದಿಯಿಂದ ಬರುತ್ತಿದ್ದ ಕಂಟೇನರ್ ಲಾರಿ ಡಿವೈಡ್ ಕ್ರಾಸ್ ಮಾಡಿ ಡಿಕ್ಕಿಯಾಗಿದೆ. ಪರಿಣಾಮವಾಗಿ ಬಸ್ ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿ ಉರಿದು 9 ಮಂದಿ ಸಜೀವ ದಹನವಾಗಿದ್ದಾರೆ. 32 ಆಸನ ಸಾಮರ್ಥ್ಯದ ಬಸ್‌ನಲ್ಲಿ 29 ಮಂದಿ ಪ್ರಯಾಣಿಸುತ್ತಿದ್ದರು. ಬಸ್ ಚಾಲಕ ಹಾಗೂ ಕ್ಲೀನರ್ ಪಾರಾಗಿದ್ದಾರೆ.
ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿದೆ ಎಂದು ತಿಳಿದು ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಧಾನಿ ಕಾರ್ಯಾಲಯ ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದೆ.
ಮೃತರ ಸಂಬಂಧಿಕರಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿ (ಪಿಎಂಎನ್‌ಆರ್‌ಎಫ್)ಯಿಂದ ₹2 ಲಕ್ಷ ತಾತ್ಕಾಲಿಕ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ಪ್ರಧಾನಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು. ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ವಿಷಾದನೀಯ. ಅಪಘಾತದ ಬಗ್ಗೆ ಸೂಕ್ತ ತನಿಖೆ ನಡೆಸಿ, ಕಾರಣವನ್ನು ಪತ್ತೆಹಚ್ಚಲಾಗುವುದು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅಪಘಾತದಲ್ಲಿ ಮಡಿದ ಕುಟುಂಬಸ್ಥರ ದುಃಖದಲ್ಲಿ ನಾನೂ ಭಾಗಿ ಹೇಳಿದ್ದಾರೆ.
ಬಸ್ ದುರಂತದ ಬಗ್ಗೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಆಘಾತ ವ್ಯಕ್ತಪಡಿಸಿದ್ದಾರೆ. ಇನ್ನೂ ಹೆಚ್ಚಿನ ಸಾವು-ನೋವು ಆಗದಿರಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ದುರಂತದಲ್ಲಿ ಜೀವ ಚೆಲ್ಲಿದವರಿಗೆ ದೇವರು ಚಿರಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.