ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ವಿಚಾರದಲ್ಲಿ ಕಾಂಗ್ರೆಸ್ ಕ್ಷುಲ್ಲಕ ರಾಜಕೀಯ ಮಾಡುತ್ತಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಆರೋಪಿಸಿದ್ದಾರೆ.
ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಕಾಂಗ್ರೆಸ್ ಅವರನ್ನು ಕಡೆಗಣಿಸಿತ್ತು. ಸಿಂಗ್ ಅವರ ಅಂತಿಮಯಾತ್ರೆ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದು, ಕಾಂಗ್ರೆಸ್‌ನ ಬೂಟಾಟಿಕೆಯು ಬಹಿರಂಗವಾಗಿದೆ ಎಂದು ಎಕ್ಸ್‌ನಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಆರ್ಥಿಕ ಸುಧಾರಣೆಗಳ ಶಿಲ್ಪಿ, ಮಾಜಿ ಪ್ರಧಾನಿ ಪಿ.ವಿ. ನರಸಿಂಹ ರಾವ್ ಅವರಿಗೆ ಸ್ಮಾರಕ ನಿರ್ಮಾಣ ಮಾಡಲು ಕಾಂಗ್ರೆಸ್ ನಿರಾಕರಿಸಿತ್ತು. ಅಲ್ಲದೆ, ಎಐಸಿಸಿ ಪ್ರಧಾನ ಕಚೇರಿಯ ಮೂಲಕ ರಾವ್ ಅವರ ಅಂತಿಮಯಾತ್ರೆ ನಡೆಸುವುದನ್ನು ನಿರಾಕರಿಸಿತ್ತು. ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ನಿಧನರಾದ ಬಳಿಕ ಅವರನ್ನು ಗೌರವಿಸುವಲ್ಲಿ ಕಾಂಗ್ರೆಸ್ ವಿಫಲವಾಗಿದೆ ಎಂದು ವೈಷ್ಣವ್ ಟೀಕಿಸಿದ್ದಾರೆ.
ಭಾರತಮಾತೆಯ ಮಹಾನ್ ಪುತ್ರ ಹಾಗೂ ಸಿಖ್ ಸಮುದಾಯದ ಮೊದಲ ಪ್ರಧಾನಿ ಡಾ.ಮನಮೋಹನ ಸಿಂಗ್ ಅವರ ಅಂತ್ಯಕ್ರಿಯೆಯನ್ನು ನಿಗಮ್‌ಬೋಧ್ ಘಾಟ್‌ನಲ್ಲಿ ನೆರವೇರಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಅವರಿಗೆ ತೀವ್ರ ಅವಮಾನ ಮಾಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಆರೋಪಿಸಿದ್ದರು. ಅದಕ್ಕೆ ಅಶ್ವಿನಿ ವೈಷ್ಣವ್ ಸೇರಿದಂತೆ ಬಿಜೆಪಿ ನಾಯಕರು ತಿರುಗೇಟು ನೀಡಿದ್ದಾರೆ.