ನವದೆಹಲಿ: ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ (92) ಅವರು ಗುರುವಾರ ರಾತ್ರಿ ನಿಧನ ಹೊಂದಿದ್ದು, ಕೇಂದ್ರ ಸರ್ಕಾರವು ಇಂದಿನ ಎಲ್ಲಾ ಸರಕಾರಿ ಕಾರ್ಯಕ್ರಮಗಳನ್ನು ರದ್ದುಗೊಳಿಸಿ 7 ದಿನದ ರಾಷ್ಟ್ರೀಯ ಶೋಕಾಚರಣೆಯ ಘೋಷಿಸಿದೆ.
ಡಿಸೆಂಬರ್ 26, 2024 ರಿಂದ ಜನವರಿ 1, 2025 ರವರೆಗೆ 7 ದಿನ ರಾಷ್ಟ್ರೀಯ ಶೋಕಾಚರಣೆ ಘೋಷಿಸಲಾಗಿದ್ದು, ಮಾಜಿ ಪ್ರಧಾನಿ ಅವರ ಅಂತ್ಯಕ್ರಿಯೆಯನ್ನು ಸಂಪೂರ್ಣ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುವುದು. ಶುಕ್ರವಾರ ನಿಗದಿಯಾಗಿದ್ದ ಕೇಂದ್ರ ಸರ್ಕಾರದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಈ ಸಮಯದಲ್ಲಿ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
2004 ರಿಂದ 2014 ರವರೆಗೆ ಭಾರತದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಮನಮೋಹನ್ ಸಿಂಗ್ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಅವರು 26 ಡಿಸೆಂಬರ್ 2024 ರಂದು ಮನೆಯಲ್ಲಿ ಹಠಾತ್ ಪ್ರಜ್ಞೆ ಕಳೆದುಕೊಂಡ ನಂತರ ಆಸ್ಪತ್ರೆಗೆ ಸೇರಿಸಲಾಯಿತು ಎಂದು ದೆಹಲಿಯ ಏಮ್ಸ್ ತಿಳಿಸಿದೆ.
ಸರ್ಕಾರಿ ರಜೆ: ಡಾ. ಮನಮೋಹನ್ ಸಿಂಗ್ ನಿಧನದ ಗೌರವಾರ್ಥ ಇಂದು ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಿಸಲಾಗಿದ್ದು, ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ.<>