ನವದೆಹಲಿ: ಚಿನ್ನ ಕಳ್ಳಸಾಗಣೆ ಆರೋಪದಡಿಯಲ್ಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಮಾಜಿ ಆಪ್ತ ಸಹಾಯಕನನ್ನು ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಈ ಸಂಬಂಧ ಬ್ಯಾಂಕಾಕ್‌ನಿಂದ ಇಲ್ಲಿಗೆ ಆಗಮಿಸಿದ ಶಶಿ ತರೂರ್ ಅವರ ಆಪ್ತ ಸಹಾಯಕ ಹಾಗೂ ಮತ್ತೊಬ್ಬ ವ್ಯಕ್ತಿಯನ್ನು ಅಧಿಕಾರಿಗಳು ಬಂಧಿಸಿದ್ದು ಅವರ ವಿರುದ್ಧ ಚಿನ್ನ ಕಳ್ಳಸಾಗಣೆ ಪ್ರಕರಣವನ್ನು ದಾಖಲಿಸಿದ್ದಾರೆ.
ಬಂಧಿತ ವ್ಯಕ್ತಿಯಿಂದ ₹ 35.22 ಲಕ್ಷ ಮೌಲ್ಯದ 500 ಗ್ರಾಂ ತೂಕದ ಚಿನ್ನದ ಸರವನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ವಿಚಾರಣೆ ನಡೆಸಲಾಗುತಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದರು.
ಲೋಕಸಭಾ ಚುನಾವಣೆ ಪ್ರಚಾರಕ್ಕಾಗಿ ಹಿಮಾಚಲ ಪ್ರದೇಶದಲ್ಲಿರುವ ಶಶಿ ತರೂರ್ ಅವರು ಈ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ಅವರು ನಿವೃತ್ತ ವ್ಯಕ್ತಿಯಾಗಿದ್ದು, ಆಗಾಗ್ಗೆ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಾರೆ. 72 ವರ್ಷ ವಯಸ್ಸಾದರೂ ಸಹಾನೂಭೂತಿಯಿಂದ ಅವರನ್ನು ಉಳಿಸಿಕೊಳ್ಳಲಾಗಿತ್ತು ಎಂದು ಹೇಳಿದ್ದಾರೆ.