ನವದೆಹಲಿ: ಹೊಸದಾಗಿ ಅಧಿಕಾರಕ್ಕೆ ಬಂದಿರುವ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ. ಹೀಗಾಗಿ ಈಗ ಬಿಜೆಪಿಗೆ ಹೊಸ ಅಧ್ಯಕ್ಷರ ನೇಮಕವಾಗಬೇಕಿದೆ.
ಜೆಪಿ ನಡ್ಡಾ ರಾಜ್ಯಸಭೆ ಸದಸ್ಯರಾಗಿದ್ದಾರೆ. ಈ ಮೊದಲು ಮೋದಿ ಸರ್ಕಾರದ ಮೊದಲ ಅವಧಿಯಲ್ಲಿ ಆರೋಗ್ಯ ಇಲಾಖೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಅದಾದ ಬಳಿಕ ಅವರನ್ನು ರಾಷ್ಟ್ರೀಯ ಅಧ್ಯಕ್ಷರಾಗಿ ನೇಮಕ ಮಾಡಲಾಯಿತು. ಕಳೆದ ಸೆಪ್ಟೆಂಬರ್ ತಿಂಗಳಿನಲ್ಲೇ ನಡ್ಡಾ ಅವಧಿ ಮುಗಿದಿತ್ತು.
ಹಾಗಿದ್ದರೂ ಲೋಕಸಭೆ ಚುನಾವಣೆ ದೃಷ್ಟಿಯಿಂದ ಅವರನ್ನೇ ಅಧ್ಯಕ್ಷರಾಗಿ ಮುಂದುವರಿಸಲಾಗಿತ್ತು. ಇದೀಗ ಮೋದಿ ಹೊಸ ಸರ್ಕಾರದಲ್ಲಿ ನಡ್ಡಾ ಮತ್ತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದೀಗ ನಡ್ಡಾ ಅನಿವಾರ್ಯವಾಗಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಬೇಕಾಗಿದೆ.
ಅವರ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಲಾಗುತ್ತದೆ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ಅಮಿತ್ ಶಾ ಬಳಿಕ ನಡ್ಡಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನೇಮಕವಾಗಿದ್ದರು. ಅವರ ಅವಧಿಯಲ್ಲಿ ಬಿಜೆಪಿ ಒಟ್ಟು 16 ರಾಜ್ಯಗಳಲ್ಲಿ ಅಧಿಕಾರದಲ್ಲಿದೆ.