ಬೆಂಗಳೂರು: ಕರ್ನೂಲ್ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪ್ರಧಾನಿ ಮೋದಿ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಇನ್ನು, ದುರಂತದ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ.
ಹೈದರಾಬಾದ್ ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಇಂದು ಮುಂಜಾನೆ ಕರ್ನೂಲ್ ಬಳಿ ಬೈಕ್ ಢಿಕ್ಕಿಯಾಗಿ ಅಗ್ನಿ ಅನಾಹುತ ಸಂಭವಿಸಿತ್ತು. ಘಟನೆಯಲ್ಲಿ 20 ಮಂದಿ ಸಜೀವ ದಹನವಾಗಿದ್ದರು. ಈ ಧಾರುಣ ಘಟನೆ ಬಗ್ಗೆ ಪ್ರಧಾನಿ ಮೋದಿ ಆಘಾತ ವ್ಯಕ್ತಪಡಿಸಿದ್ದಾರೆ.
ಮೃತರ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಇನ್ನು ಘಟನೆಯಲ್ಲಿ 12 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರ ಘೋಷಿಸಿದ್ದಾರೆ.
ಕರ್ನೂಲ್ ಬಸ್ ದುರಂತದಲ್ಲಿ ಕರ್ನಾಟಕದವರೂ ಇದ್ದಾರಾ ಎಂಬ ಬಗ್ಗೆ ಇನ್ನಷ್ಟೇ ತಿಳಿದುಬರಬೇಕಿದೆ. ಈ ನಡುವೆ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಆಂಧ್ರಪ್ರದೇಶದ ಕರ್ನೂಲ್‌ನ ಬೆಂಗಳೂರು - ಹೈದರಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಬಸ್‌ಗೆ ಬೆಂಕಿ ತಗುಲಿ ಹಲವು ಪ್ರಯಾಣಿಕರು ಪ್ರಾಣ ಕಳೆದುಕೊಂಡ ಸುದ್ದಿ ಕೇಳಿ ಅತೀವ ದುಃಖವಾಯಿತು. ದುರಂತದಲ್ಲಿ ಮಡಿದವರ ಕುಟುಂಬಕ್ಕೆ ನನ್ನ ಸಂತಾಪಗಳು. ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.