ಚೆನ್ನೈ: ತಮಿಳುನಾಡಿನಲ್ಲಿ ಕಳೆದ ವಾರ ನಡೆದ ಕರೂರು ಕಾಲ್ತುಳಿತ ಪ್ರಕರಣ ದೇಶವನ್ನು ಬೆಚ್ಚಿಬೀಳಿಸಿದೆ. ಈ ಪ್ರಕರಣದ ತನಿಖೆ ಬಿರುಸಿನಿಂದ ಸಾಗಿದೆ. ಈ ಮಧ್ಯೆ ವಿಜಯ್ ನಾಯಕತ್ವದ ತಮಿಳಗ ವೆಟ್ರಿ ಕಳಗಂ ಪಕ್ಷವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಕರೂರು ಕಾಲ್ತುಳಿತ ಪ್ರಕರಣದಲ್ಲಿ 41 ಮಂದಿ ಮೃತಪಟ್ಟರೆ,ನೂರಾರು ಮಂದಿ ಗಾಯಗೊಂಡಿದ್ದರು. ಪ್ರಕರಣದ ಕುರಿತು ಪೊಲೀಸ್ ಮಹಾನಿರ್ದೇಶಕರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸುವಂತೆ ನಿರ್ದೇಶಿಸಿದ ಮದ್ರಾಸ್ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ತಮಿಳಗ ವೆಟ್ರಿ ಕಳಗಂ ಪಕ್ಷ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.
ತಮಿಳಗ ವೆಟ್ರಿ ಕಳಗಂ ಪಕ್ಷದ ಪರ ವಕೀಲರಾದ ದೀಕ್ಷಿತಾ ಗೋಹಿಲ್, ಪ್ರಾಂಜಲ್ ಅಗರ್ವಾಲ್ ಮತ್ತು ಯಶ್ ಎಸ್ ವಿಜಯ್ ಅವರು ಅರ್ಜಿ ಸಲ್ಲಿಸಿದ್ದಾರೆ. ಪೊಲೀಸ್ ನೇತೃತ್ವದ ಎಸ್‌ಐಟಿ ತನಿಖೆಯ ಬದಲು ಉನ್ನತ ನ್ಯಾಯಲಯದ ನಿವೃತ ನ್ಯಾಯಮೂರ್ತಿ ನೇತೃತ್ವದಲ್ಲಿ ಘಟನೆಯ ಸ್ವತಂತ್ರ ತನಿಖೆ ನಡೆಸಲು ಮನವಿ ಮಾಡಿದ್ದಾರೆ. ಸುಪ್ರೀಂಕೋರ್ಟ್ ಈ ಅರ್ಜಿ ವಿಚಾರಣೆಗೆ ಸಮ್ಮತಿ ಸೂಚಿಸಿದ್ದು, ಅ.10ರಂದು ವಿಚಾರಣೆ ನಡೆಸುವುದಾಗಿ ದಿನಾಂಕ ನಿಗದಿಪಡಿಸಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ಜಿ.ಎಸ್.ಮಣಿ ಅವರು ಸುಪ್ರೀಂಕೋರ್ಟ್‌ನಲ್ಲಿ ಮತ್ತೊಂದು ಅರ್ಜಿಯನ್ನು ಸಲ್ಲಿಸಿದ್ದು, ಈ ಪ್ರಕರಣದ ಬಗ್ಗೆ ಕೇಂದ್ರ ತನಿಖಾ ದಳ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. ಈ ಪೈಕಿ ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಸುಪ್ರೀಂಕೋರ್ಟ್‌ನಲ್ಲಿ ಮೂರು ಅರ್ಜಿಗಳು ದಾಖಲಾದಂತಾಗಿದೆ.